ಕಾರವಾರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ವಿವಿಧ ವಸತಿ ಶಾಲೆಗಳ ನೌಕರರ ಸಂಘ, ಶಿಕ್ಷಕರು ಹಾಗೂ ಸಿಬ್ಬಂದಿ ಜಿಲ್ಲಾಧಿಕಾರಿ ಕಚೇರಿ ಬಳಿ ಮೌನ ಪ್ರತಿಭಟನೆ ನಡೆಸಿದರು.
ಬಳಿಕ ಜಿಲ್ಲಾಧಿಕಾರಿ ಕಚೇರಿ ಬಳಿ ಸೇರಿ, ಮನವಿಯನ್ನು ಜಿಲ್ಲಾಡಳಿತ ಮೂಲಕ ಸರಕಾರಕ್ಕೆ ಸಲ್ಲಿಸಿದರು. ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳ ಕಾಯಂ ಶಿಕ್ಷಕರು ಹಾಗೂ ನೌಕರರು ಹಲವು ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ವಸತಿ ಶಿಕ್ಷಣ ನಿರ್ದೇಶನಾಲಯ ರಚನೆ ಅಥವಾ ಎಸ್ಸಿ, ಎಸ್ಟಿ ಹಾಗೂ ಹಿಂದುಳಿದ ವರ್ಗಗಳ ವಸತಿ ಶಾಲೆಗಳನ್ನು ಸಿಬ್ಬಂದಿಯೊಂದಿಗೆ ಸಂಬಂಧಿಸಿದ ಇಲಾಖೆಗಳ ವಶಕ್ಕೆ ನೀಡಬೇಕು. ಇಲ್ಲಿನ ಕಾಯಂ ನೌಕರರಿಗೆ ಜ್ಯೋತಿ ಸಂಜೀವಿನಿ ಅನುಷ್ಠಾನಗೊಳಿಸಬೇಕು. ನೌಕರಿಗೆ ಮರಣ ಮತ್ತು ನಿವೃತ್ತಿ ಉಪದಾನ ಸೌಲಭ್ಯ ಒದಗಿಸಬೇಕು. ಮನೆ ಬಾಡಿ ಭತ್ಯೆ ಕಡಿತದಿಂದ ವಿನಾಯಿತಿ ನೀಡಬೇಕು ಹಾಗೂ ಕಾಯಂ ನೌಕರರಿಗೆ ಶೇ. 10 ರಷ್ಟು ವಿಶೇಷ ಭತ್ಯೆ ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.
ಸದ್ಯ ಮೌನ ಪ್ರತಿಭಟನೆ ನಡೆಸಲಾಗಿದೆ. ಆದರೆ ವಸತಿ ಶಾಲೆ ಸಂಘವು ಜೂ. 2ರಿಂದ 4ರವರೆಗೆ ತಮ್ಮ ಸಂವಿಧಾನಾತ್ಮಕ ಬೇಡಿಕೆಗಳಿಗೆ ಆಗ್ರಹಿಸಿ ಧರಣಿ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಸಲಾಗಿದೆ.