ಇಂಟೆಕ್ ಜಿಲ್ಲಾ ಸಮಿತಿಯ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಶಾಸಕ ಕೆ.ಸಿ.ವೀರೇಂದ್ರ
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರುಗಳು ಪ್ರಾಮಾಣಿಕವಾಗಿ ಕೆಲಸ ಮಾಡಿ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರಲು ದೃಢ ಸಂಕಲ್ಪ ಮಾಡಬೇಕು ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಕರೆ ನೀಡಿದರು
ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಇಂಟೆಕ್‌ನ ಜಿಲ್ಲಾ ಸಮಿತಿಯ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದರುಕಾಂಗ್ರೆಸ್ ಪಕ್ಷ ಸರ್ವ ಜನಾಂಗದ ಶ್ರೇಯಸ್ಸು ಬಯಸುತ್ತದೆ. ದಲಿತರು, ಅಲ್ಪಸಂಖ್ಯಾತರು, ಶೋಷಿತರು, ಸೇರಿದಂತೆ ಎಲ್ಲಾ ವರ್ಗ, ಜಾತಿ, ಧರ್ಮಗಳನ್ನು ಒಟ್ಟಿಗೆ ಕೊಂಡೊಯ್ಯುವ ಮೂಲಕ ಎಲ್ಲರಿಗೂ ಸಾಮಾಜಿಕ ನ್ಯಾಯ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಮುನ್ನಡೆಯುತ್ತಿದೆ. ದೇಶದ ಸಮಗ್ರತೆ ಮತ್ತು ಐಕ್ಯತೆಗಾಗಿ ಕಾಂಗ್ರೆಸ್ ಪಕ್ಷವನ್ನು ಈ ದೇಶದಲ್ಲಿ ಮತ್ತೆ ಅಧಿಕಾರಕ್ಕೆ ತರುವುದು ಅನಿವಾರ್ಯ ಎಂದು ಪ್ರತಿಪಾದಿಸಿದರು
ಚಿತ್ರದುರ್ಗದಲ್ಲಿ ಕಾಂಗ್ರೆಸ್ ಬಲಿಷ್ಠವಾಗಿದೆ. ಇನ್ನಷ್ಟು ಬಲಗೊಳ್ಳಬೇಕು ಎಂದರೆ ಇಂತಹ ಎಲ್ಲಾ ಘಟಕಗಳು, ವಿಭಾಗಗಳು ಸಕ್ರಿಯವಾಗಬೇಕು. ದುರ್ಗದಲ್ಲಿ ಕಳೆದ ಮೂರು ದಶಕಗಳಿಂದ ಕಾಂಗ್ರೆಸ್ ಪಕ್ಷಕ್ಕೆ ದುಡಿದು, ಇಡೀ ಜಿಲ್ಲೆಯಲ್ಲಿ ಬಡಗಿ ನೌಕರರು, ಕಟ್ಟಡ ಕಾರ್ಮಿಕರು ಒಳಗೊಂಡಂತೆ ಎಲ್ಲಾ ವಿಧದ ಕಾರ್ಮಿಕರನ್ನು ಸಂಘಟಿಸಿರುವ ಎ.ಜಾಕೀರ್ ಹುಸೇನ್ ಅವರ ಜೊತೆ ನಾನು ಸದಾ ಇರುವುದಾಗಿ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಹೇಳಿದರು
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂ.ಕೆ.ತಾಜ್‌ಪೀರ್ ಮಾತನಾಡಿ, ಇಂಟೆಕ್‌ನಲ್ಲಿ ಕಟ್ಟಡ ಕಾರ್ಮಿಕರ ವಿಭಾಗವೂ ಒಂದಾಗಿದೆ. ಕಟ್ಟಡ ಕಾರ್ಮಿಕರು ಈ ದೇಶದ ಅಭಿವೃದ್ಧಿಯಲ್ಲಿ ವಿಶಿಷ್ಟ ಕೊಡುಗೆ ನೀಡಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಇಂಟೆಕ್‌ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಅಲಿ, ರಾಷ್ಟ್ರೀಯ ಕಾರ್ಯದರ್ಶಿ ವಿಜಯ್ ನಾಯಕ್, ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಜ್ಯೊತಿ, ಸಂಘಟನಾ ಕಾರ್ಯದರ್ಶಿ ಮಹಮದ್ ಖಾಸಿಂ ಭಾಷ, ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ, ನಗರಸಭೆ ಮಾಜಿ ಅಧ್ಯಕ್ಷ ಸರ್ದಾರ್, ಎಸ್ಟಿ ವಿಭಾಗದ ಅಧ್ಯಕ್ಷ ಅಂಜಿನಪ್ಪ, ಟಿಪ್ಪು ಅಭಿಮಾನಿಗಳ ಮಹಾವೇದಿಕೆಯ ಟಿಪ್ಪು ಖಾಸಿಂ ಅಲಿ, ಮುಖಂಡರಾದ ಅಶೋಕ್ ನಾಯ್ಡು, ಷಬ್ಬೀರ್, ಪತ್ರಕರ್ತ ಹನೀಫ್ ಇನ್ನಿತರರು ಹಾಜರಿದ್ದರು.