ಕನ್ನಡಪ್ರಭ ವಾರ್ತೆ ಕೋಲಾರಕೋಲಾರ ಹಾಲು ಒಕ್ಕೂಟದ ಚುನಾವಣೆ ಮುಗಿದಿದ್ದು, ಎನ್‌ಡಿಎ ಮೈತ್ರಿಯಡಿ ಗೆದ್ದಿರುವ ಅಭ್ಯರ್ಥಿಗಳು ಭ್ರಷ್ಟಾಚಾರದ ಆರೋಪದಿಂದ ನಲುಗಿ ಹೋಗಿರುವ ಕೋಮುಲ್ ಶುದ್ದೀಕರಣಕ್ಕೆ ಸಂಕಲ್ಪ ಮಾಡಬೇಕು ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಓಂಶಕ್ತಿ ಚಲಪತಿ ಮನವಿ ಮಾಡಿದ್ದಾರೆ.ಈ ಕುರಿತು ಹೇಳಿಕೆ ನೀಡಿರುವ ಅವರು, ಕೋಲಾರ ಜಿಲ್ಲೆಯ ರೈತರ ಜೀವನಾಡಿಯಾಗಿರುವ ಹಾಲು ಒಕ್ಕೂಟ ಇತ್ತೀಚಿನ ದಿನಗಳಲ್ಲಿ ಭ್ರಷ್ಟತೆಯಲ್ಲಿ ಮುಳುಗಿ ರೈತರು, ಹಾಲು ಉತ್ಪಾದಕರ ಹಿತ ರಕ್ಷಣೆ ಮಾಡುವಲ್ಲಿ ವಿಫಲವಾಗಿತ್ತು ಎಂದು ತಿಳಿಸಿದ್ದಾರೆ.ಹಗರಣಗಳ ತನಿಖೆಯಾಗಲಿ
ಈಗಾಗಲೇ ರಾಜ್ಯದ ಕಾಂಗ್ರೆಸ್ ಸರ್ಕಾರ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಹಾಲು ಉತ್ಪಾದಕರಿಗೆ ನೀಡುವ ಪ್ರೋತ್ಸಾಹಧನ ಯೋಜನೆಯ ಹಣವನ್ನು ಸಮರ್ಪಕವಾಗಿ ರೈತರಿಗೆ ನೀಡುವಲ್ಲಿ ವಿಫಲವಾಗಿದೆ ಎಂದು ತಿಳಿಸಿದ್ದಾರೆ.ರೈತರಿಗೆ ನ್ಯಾಯ ದೊರಕಿಸಿ
ಕೋಲಾರ ಹಾಲು ಒಕ್ಕೂಟಕ್ಕೆ ಎನ್‌ಡಿಎಯಿಂದ ನೂತನವಾಗಿ ಆಯ್ಕೆಯಾಗಿರುವ ನಿರ್ದೇಶಕರು ಹೆಚ್ಚಿನ ಜವಾಬ್ದಾರಿಯಿಂದ ಒಕ್ಕೂಟದಲ್ಲಿನ ಕೊಳಕನ್ನು ತೊಡೆದು ಹಾಕಬೇಕಾಗಿದೆ, ಅಲ್ಲಿ ಈವರೆಗೂ ರೈತರಿಗೆ ಆಗಿರುವ ವಂಚನೆ, ಅನ್ಯಾಯ ಕೊನೆಗೊಳಿಸಬೇಕು, ಭ್ರಷ್ಟಾಚಾರವನ್ನು ಸಂಪೂರ್ಣವಾಗಿ ಕೊನೆಗಾಣಿಸಲು ಪ್ರಾಮಾಣಿಕ ಪ್ರಯತ್ನ ನಡೆಸಬೇಕು ಎಂದು ತಿಳಿಸಿದ್ದಾರೆ. ಅಲ್ಲದೆ ಹಾಲು ಒಕ್ಕೂಟಕ್ಕೆ ಎನ್‌ಡಿಎ ಬೆಂಬಲಿತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ ಮತದಾರರಿಗೆ ಅವರು ಧನ್ಯವಾದ ಸಲ್ಲಿಸಿದ್ದಾರೆ.