ಕಾಲಮಿತಿಯಲ್ಲಿ ನೀರಿನ ದೂರು ಬಗೆಹರಿಸಿ: ತುಷಾರ್‌ ಸೂಚನೆ

KannadaprabhaNewsNetwork | Published : Mar 19, 2024 12:45 AM

ಸಾರಾಂಶ

ನೀರಿನ ಸಮಸ್ಯೆ ಬಗ್ಗೆ ಬರುವ ದೂರುಗಳಿಗೆ ತಕ್ಷಣ ಸ್ಪಂದಿಸಿ, ಕಾಲಮಿತಿಯಲ್ಲಿ ಸಮಸ್ಯೆ ಬಗೆಹರಿಸಿ ಎಂದು ಬಿಬಿಎಂಪಿ ಅಧಿಕಾರಿಗಳಿಗೆ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಸೂಚಿಸಿದ್ಧಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಜಲಮಂಡಳಿ ಮತ್ತು ಬಿಬಿಎಂಪಿ ಸಹಾಯವಾಣಿಗಳಿಗೆ ನೀರಿನ ಸಮಸ್ಯೆ ಕುರಿತಂತೆ ಬರುವ ದೂರುಗಳನ್ನು ಕಾಲಮಿತಿಯಲ್ಲಿ ನಿವಾರಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಹೇಳಿದರು.

ನಗರದ ಕುಡಿಯುವ ನೀರಿನ ಸಮಸ್ಯೆ ಹಾಗೂ ಮುಂಗಾರು ಪೂರ್ವ ಸಿದ್ಧತೆಗಳ ಕುರಿತಂತೆ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸೋಮವಾರ ಸಭೆ ನಡೆಸಿದ ಅವರು, ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ವಲಯ ವ್ಯಾಪ್ತಿಯಲ್ಲಿ ಜಲಮಂಡಳಿ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಕ್ರಮ ಕೈಗೊಳ್ಳಬೇಕು. ಬಿಬಿಎಂಪಿ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಂಡಿರುವ ಟ್ಯಾಂಕರ್‌ಗಳನ್ನು ವಲಯವಾರು ನಿಯೋಜನೆ ಮಾಡಲಾಗಿದ್ದು, ಅವುಗಳನ್ನು ನೀರಿನ ಸಮಸ್ಯೆಯಿರುವ ಪ್ರದೇಶಗಳಿಗೆ ನೀರಿನ ವ್ಯವಸ್ಥೆ ಕಲ್ಪಿಸಲು ಬಳಸಿಕೊಳ್ಳಬೇಕು ಎಂದು ಸೂಚಿಸಿದರು.‘ಮುಂಗಾರು ಪೂರ್ವ

ಮುಂಜಾಗ್ರತೆವಹಿಸಿ’

ಬಿಬಿಎಂಪಿ ವ್ಯಾಪ್ತಿಯಲ್ಲಿ ಮುಂಗಾರು ಪೂರ್ವ ಮಳೆಗೆ ಈಗಿನಿಂದಲೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಮಳೆ ಬಂದಾಗ ಪ್ರವಾಹ ಉಂಟಾಗುವ ಪ್ರದೇಶಗಳನ್ನು ಗುರುತಿಸಿ ಪರಿಹಾರ ಕ್ರಮ ಕೈಗೊಳ್ಳಬೇಕು. ರಾಜಕಾಲುವೆಗಳಲ್ಲಿ ಶೇಖರಣೆಯಾಗಿರುವ ಹೂಳು ತೆಗೆದು ಮಳೆ ನೀರು ಸರಾಗವಾಗಿ ಹರಿಯುವಂತೆ ಮಾಡಬೇಕು. ಅಲ್ಲದೇ ರಸ್ತೆ ಬದಿಯ ಚರಂಡಿಗಳನ್ನು ಸ್ವಚ್ಛಗೊಳಿಸುವುದು ಸೇರಿದಂತೆ ಇನ್ನಿತರ ಕ್ರಮ ಕೈಗೊಳ್ಳಬೇಕು ಎಂದು ತುಷಾರ್ ತಿಳಿಸಿದರು.

23ಕ್ಕೆ ನೀರಿನ ಸಮಸ್ಯೆ ನಿವಾರಣೆಗೆಮಾರ್ಗೋಪಾಯ ಚರ್ಚಿಸಲು ಸಭೆಕನ್ನಡಪ್ರಭ ವಾರ್ತೆ ಬೆಂಗಳೂರುನಗರದಲ್ಲಿ ಉಂಟಾಗಿರುವ ನೀರಿನ ಸಮಸ್ಯೆ ನಿವಾರಣೆಯ ಮಾರ್ಗೋಪಾಯಗಳ ಬಗ್ಗೆ ಚರ್ಚಿಸಲು ವಿವಿಧ ಸಂಘಟನೆಗಳು ಮಾ.23ರಂದು ಬೆಳಗ್ಗೆ 11ಕ್ಕೆ ಗಾಂಧಿ ಭವನದಲ್ಲಿ ಸಭೆ ಆಯೋಜಿಸಿವೆ.ಕರ್ನಾಟಕ ನೆಲ ಜಲ ಸಂರಕ್ಷಣಾ ಸಮಿತಿ ಹಾಗೂ ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಸಹಕಾರದೊಂದಿಗೆ ‘ಬೆಂಗಳೂರಿನ ನೀರಿನ ಬಿಕ್ಕಟ್ಟು ಮತ್ತು 365 ದಿನಗಳ ನೀರಿನ ಲಭ್ಯತೆ ಬಳಕೆ’ ಕುರಿತು ಸಭೆ ಆಯೋಜಿಸಲಾಗಿದೆ. ಭಾರತೀಯ ವಿಜ್ಞಾನ ಸಂಸ್ಥೆಯ ಪರಿಸರ ವಿಜ್ಞಾನಿ ಡಾ। ಟಿ.ವಿ.ರಾಮಚಂದ್ರರಾವ್‌ ಮತ್ತಿತರ ತಜ್ಞರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.ಮಳೆ ಅಭಾವದಿಂದ ರಾಜ್ಯದಲ್ಲಿ ಬರ ಪರಿಸ್ಥಿತಿ ಉಂಟಾಗಿದೆ. ಬೆಂಗಳೂರಿಗೆ ನೀರು ಸರಬರಾಜು ಮಾಡುವ ಕಾವೇರಿ ಜಲಾಶಯದಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಿದ್ದು, ಹಾಹಾಕಾರ ಉಂಟಾಗಿದೆ. ಮತ್ತೊಂದೆಡೆ, ಟ್ಯಾಂಕರ್‌ಗಳ ಹಾವಳಿ ಮಿತಿಮೀರಿದೆ. ಆದ್ದರಿಂದ ನೀರಿನ ಸದ್ಭಳಕೆ, ಪುನರ್‌ ಬಳಕೆ ಮತ್ತಿತರ ವಿಷಯಗಳ ಬಗ್ಗೆ ಚರ್ಚಿಸಿ ಜನರಲ್ಲಿ ಜಾಗೃತಿ ಮೂಡಿಸಲು ಸಭೆ ಕರೆಯಲಾಗಿದೆ ಎಂದು ಸಮಿತಿಯ ಸಂಚಾಲಕ ಕುರುಬೂರು ಶಾಂತಕುಮಾರ್‌ ತಿಳಿಸಿದ್ದಾರೆ.

Share this article