ಕಾರವಾರ: ಭಾರತೀಯ ಸಂವಿಧಾನವು ಜಗತ್ತಿನ ಶ್ರೇಷ್ಠ ಸಂವಿಧಾನಗಳಲ್ಲಿ ಒಂದಾಗಿದ್ದು, ಡಾ. ಬಿ.ಆರ್. ಅಂಬೇಡ್ಕರ್ ಅವರ ನೇತೃತ್ವದಲ್ಲಿ ರೂಪುಗೊಂಡ ಅದರ ಆಶಯ ಮತ್ತು ಮೌಲ್ಯಗಳನ್ನು ಪ್ರತಿಯೊಬ್ಬರೂ ಗೌರವಿಸಿ, ಜೀವನದಲ್ಲಿ ಪಾಲಿಸಬೇಕು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.ನಗರದ ಬಿಜೆಪಿ ಕಚೇರಿಯಲ್ಲಿ ಗುರುವಾರ ಬಿಜೆಪಿ ಕಾರವಾರ ಘಟಕದ ವತಿಯಿಂದ ಆಯೋಜಿಸಿದ್ದ ಸಂವಿಧಾನ ಗೌರವ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬಾಬಾಸಾಹೇಬ ಅಂಬೇಡ್ಕರ್ ಅವರ ನೇತೃತ್ವದಲ್ಲಿ ರಚನೆಯಾದ ಭಾರತೀಯ ಸಂವಿಧಾನವು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ ಬುನಾದಿಯಾಗಿದೆ. ಇಂತಹ ಶ್ರೇಷ್ಠ ಸಂವಿಧಾನಕ್ಕೆ ಗೌರವ ಸಲ್ಲಿಸುವುದರ ಜತೆಗೆ ಅದರ ಆಶಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಹಾಗೂ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ, ಸಮಾಜದಲ್ಲಿನ ಅಸ್ಪೃಶ್ಯತೆಯನ್ನು ಹೋಗಲಾಡಿಸಿ ಎಲ್ಲರಿಗೂ ಸಮಾನ ಹಕ್ಕು ಮತ್ತು ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ಸಂವಿಧಾನ ರಚನೆಗೆ ಅಪಾರ ಶ್ರಮ ವಹಿಸಿದ್ದಾರೆ. ಅವರ ಹೋರಾಟ, ದೂರದೃಷ್ಟಿ ಹಾಗೂ ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ಸ್ಮರಿಸಿ ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು.ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಅವರು, ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಅಂಬೇಡ್ಕರ್ ಅವರು ಹೊಂದಿದ್ದ ಹಲವು ಆಶಯಗಳು ಹಾಗೂ ಜಮ್ಮು- ಕಾಶ್ಮೀರಕ್ಕೆ ಸಂಬಂಧಿಸಿದ 370ನೇ ವಿಧಿ ರದ್ದತಿಯಂತಹ ಕ್ರಮಗಳು ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಸಾಕಾರಗೊಂಡಿವೆ ಎಂದರು.ಕಾರ್ಯಕ್ರಮದ ಆರಂಭದಲ್ಲಿ ಬಾಬಾಸಾಹೇಬ ಅಂಬೇಡ್ಕರ್ ಹಾಗೂ ಭಾರತಮಾತೆಯ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಲಾಯಿತು. ಅಶೋಕ ಛಲವಾದಿ ಪ್ರಾಸ್ತಾವಿಕವಾಗಿ ಮಾತನಾಡಿ, ಅಂಬೇಡ್ಕರ್ ಅವರ ಜೀವನ, ಹೋರಾಟ ಹಾಗೂ ಸಂವಿಧಾನ ರಚನೆಯಲ್ಲಿ ಅವರ ಪಾತ್ರವನ್ನು ವಿವರಿಸಿದರು.