ಮಳೆ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ: ದಿನೇಶ್‌ ಗುಂಡೂರಾವ್‌ ಸೂಚನೆ

KannadaprabhaNewsNetwork |  
Published : May 27, 2025, 01:27 AM ISTUpdated : May 27, 2025, 01:24 PM IST
ವಿಡಿಯೊ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಿದ ಸಚಿವ ದಿನೇಶ್‌ ಗುಂಡೂರಾವ್‌. | Kannada Prabha

ಸಾರಾಂಶ

ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಮಳೆ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಬೆಂಗಳೂರಿನಿಂದ ವಿಡಿಯೊ ಕಾನ್ಫರೆನ್ಸ್ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಭೆ ನಡೆಸಿದರು.

  ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಹಾನಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ಎಚ್ಚರಿಕೆ ವಹಿಸಲು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಮಳೆ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಬೆಂಗಳೂರಿನಿಂದ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಅವರು, ಅಧಿಕಾರಿಗಳು ತಾಲೂಕು ಕೇಂದ್ರ ಸ್ಥಳಗಳಲ್ಲಿದ್ದು, ಸಕ್ರಿಯವಾಗಿ ಕಾರ್ಯ ನಿರ್ವಹಿಸುವಂತೆ ತಿಳಿಸಿದರು.

ಎಲ್ಲ ಇಲಾಖೆ ಅಧಿಕಾರಿಗಳು ಪ್ರವಾಹ/ ಭೂಕುಸಿತ ಪ್ರದೇಶಗಳಲ್ಲಿ ಪ್ರಕೃತಿ ವಿಕೋಪಗಳು ಸಂಭವಿಸಿದಾಗ ತುರ್ತು ಕಾರ್ಯಾಚರಣೆಗಾಗಿ ಸನ್ನದ್ಧವಾಗಿರಬೇಕು ಹಾಗೂ ಸಂಪೂರ್ಣ ಜವಾಬ್ದಾರಿ ತೆಗೆದುಕೊಂಡು ಯಾವುದೇ ತಪ್ಪು ಆಗದಂತೆ ಮುಂಜಾಗ್ರತೆ ವಹಿಸಬೇಕು ಎಂದು ಸೂಚಿಸಿದರು.ಶಾಲೆ ಪುನಾರಂಭವಾಗುವ ಸಮಯದಲ್ಲಿ ಶಾಲೆ ಮಕ್ಕಳು ನದಿ, ತೋಡು ಇತ್ಯಾದಿ ದಾಟಿ ಬರುವಂತಹ ಪ್ರದೇಶಗಳಲ್ಲಿ ಬದಲಿ ವ್ಯವಸ್ಥೆಗಳನ್ನು ಕಲ್ಪಿಸಿರುವ ಬಗ್ಗೆ ಮತ್ತು ವಿಪತ್ತು ನಿರ್ವಹಣೆಗಾಗಿ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಪಿ.ಡಿ ಖಾತೆಯಲ್ಲಿ ಅನುದಾನ ಲಭ್ಯವಿರುವ ಬಗ್ಗೆ ಸಚಿವರು ಜಿಲ್ಲಾಧಿಕಾರಿಯಿಂದ ಮಾಹಿತಿ ಪಡೆದರು.

ಮಂಗಳೂರು ನಗರದಲ್ಲಿ ಮನೆಗಳಿಗೆ ನೀರು ನುಗ್ಗುವ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ. ಭಾರೀ ಗಾಳಿಗೆ ಮರಗಳು ರಸ್ತೆ, ಮನೆಗಳ ಮೇಲೆ ಬಿದ್ದಾಗ ತಕ್ಷಣ ಸ್ಪಂದಿಸಿ ತೆರವು ಕಾರ್ಯಾಚಣೆ ಕೈಗೊಳ್ಳಲು ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಾಸ್ತವ್ಯದ ಮನೆ ಸಮೀಪ ಹಲವು ಪ್ರದೇಶಗಳಲ್ಲಿ ಗುಡ್ಡ ಕುಸಿತ ನಡೆಯುವ ಕುರಿತು ಎಚ್ಚರ ವಹಿಸಬೇಕಾಗಿದೆ. ಇಂತಹ ಅಪಾಯದ ಪ್ರದೇಶದಲ್ಲಿರುವ ಮನೆಗಳಿಂದ ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳಿಸಬೇಕು. ಸುರಕ್ಷಿತವಲ್ಲದ ಅಂಗನವಾಡಿ, ಶಾಲಾ ಕಟ್ಟಡದ ಕುರಿತು ಎಚ್ಚರ ವಹಿಸಬೇಕು. ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಗಳು ನಡೆಯುವ ಪ್ರದೇಶದಲ್ಲಿ ಮಳೆ ನೀರು ತಗ್ಗಿನಲ್ಲಿರುವ ವಸತಿ ಪ್ರದೇಶಕ್ಕೆ ಹರಿದು ಬರುತ್ತಿದ್ದು ತಕ್ಷಣ ಇದನ್ನು ಸರಿಪಡಿಸಬೇಕು. ಪಂಪ್ ವೆಲ್ ಜಂಕ್ಷನ್‌ನಂತಹ ಕೆಲವು ಕಡೆ ನೀರು ಸರಾಗವಾಗಿ ಹರಿಯದೆ ರಸ್ತೆಯಲ್ಲಿಯೇ ನಿಂತು ಸಂಚಾರ ಅಸ್ತವ್ಯಸ್ತಗೊಳ್ಳುತ್ತಿದ್ದು ತಕ್ಷಣ ಸರಿಪಡಿಸುವಂತೆ ಸಚಿವರು ಸೂಚಿಸಿದರು.

ಗಾಳಿ ಮಳೆಗೆ ಅಲ್ಲಲ್ಲಿ ವಿದ್ಯುತ್ ಕಂಬಗಳು ಮುರಿದು ಬೀಳುತ್ತಿದ್ದು ಇಂತಹ ಸಂದರ್ಭದಲ್ಲಿ ತಂತಿಯಲ್ಲಿ ವಿದ್ಯುತ್ ಪ್ರವಹಿಸಿ ಅಪಾಯ ಉಂಟಾಗದಂತೆ ಎಚ್ಚರ ವಹಿಸಬೇಕು. ಕೃತಕ ಪ್ರವಾಹ ಭೀತಿ ಉಂಟಾಗುವ ಪ್ರದೇಶ ನದಿ ಪಾತ್ರದಲ್ಲಿರುವ ಜನವಸತಿ ಪ್ರದೇಶಕ್ಕೆ ನೀರು ನುಗ್ಗುವ ಸಂದರ್ಭ ಎದುರಾಗಿದ್ದು, ಇಂತಹ ಅಪಾಯ ಪ್ರದೇಶದಲ್ಲಿನ ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸುವುದು, ಅಗತ್ಯವಿದ್ದಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಬೇಕು. ಆವರಣವಿಲ್ಲದ ಕೆಂಪು ಕಲ್ಲಿನ ಕೋರೆ, ಕೆರೆಗಳು, ಹಾಗೂ ನದಿಯಲ್ಲಿ ಯಾರು ಈಜಲು ತೆರಳದಂತೆ ಎಚ್ಚರವಹಿಸಲು ದಿನೇಶ್ ಗುಂಡೂರಾವ್ ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ. ಆನಂದ್, ಅಪರ ಜಿಲ್ಲಾಧಿಕಾರಿ ಡಾ.ಜಿ. ಸಂತೋಷ್‌, ಮಹಾನಗರ ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್, ವಿವಿಧ ಇಲಾಖೆಯ ಅಧಿಕಾರಿಗಳು, ತಹಸೀಲ್ದಾರರು ಹಾಗೂ ಬಿ.ಇ.ಒ.ಗಳು ಇದ್ದರು.

PREV
Read more Articles on

Recommended Stories

ಶ್ರೀ ಶ್ರೀ ರವಿಶಂಕರ್‌ಗೆ ವರ್ಲ್ಡ್ ಲೀಡರ್ ಫಾರ್ ಪೀಸ್ ಆ್ಯಂಡ್‌ ಸೆಕ್ಯೂರಿಟಿ ಪ್ರಶಸ್ತಿ
ಹಾಡಹಗಲೇ ಮನೆಗೆ ನುಗ್ಗಿ ಚಹಾ ವ್ಯಾಪಾರಿಯ ಕತ್ತು ಕೊಯ್ದು ಹತ್ಯೆ