ಕನ್ನಡಪ್ರಭ ವಾರ್ತೆ ವಿಜಯಪುರ
ಮಕ್ಕಳ ಆರೋಗ್ಯ ಕಾಳಜಿ, ಸಮರ್ಪಕ ತ್ಯಾಜ್ಯ ನಿರ್ವಹಣೆ, ಗ್ರಾಮ-ನಗರಗಳ ಸ್ವಚ್ಛತೆ, ಬಯಲು ಬಹಿರ್ದೆಸೆ ಮುಕ್ತ, ಕೆರೆಗಳ ಸಂರಕ್ಷಣೆ, ಸಾರ್ವಜನಿಕರ ಆರೋಗ್ಯ, ಶಾಲಾ ಮಕ್ಕಳ ಶಿಕ್ಷಣ ಗುಣಮಟ್ಟ ಸುಧಾರಣೆ, ಕೊಠಡಿಗಳ ಸುಸ್ಥಿತಿ, ಸಾರ್ವಜನಿಕ ಆಸ್ತಿ ರಕ್ಷಣೆ, ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ, ಹಸರೀಕರಣದ ದೃಷ್ಟಿಯಲ್ಲಿ ಅರಣ್ಯೀಕರಣ ಒಳಗೊಂಡಂತೆ ಸಾರ್ವಜನಿಕರ ಸಮಸ್ಯೆಗಳನ್ನು ಅರಿತು, ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಯೋಜನಾ ಬದ್ಧವಾಗಿ ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಸೂಚನೆ ನೀಡಿದರು.ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಜಿಲ್ಲೆಯ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ಸಾರ್ವಜನಿಕ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು. ಅಂಗನವಾಡಿ ಕೇಂದ್ರಗಳಲ್ಲಿರುವ ಚಿಕ್ಕ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಅಂಗನವಾಡಿ ಕೇಂದ್ರದ ಕಟ್ಟಡಗಳ ಕಿಟಕಿಗಳಿಗೆ ಜಾಳಿಗೆ ಅಳವಡಿಸಿ ಸೊಳ್ಳೆಗಳು ಬರದಂತೆ ನೋಡಿಕೊಂಡು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ವಹಿಸಬೇಕು. ಜಲಮೂಲಗಳ ಸಂರಕ್ಷಣೆ ನಮ್ಮ ಜವಾಬ್ದಾರಿಯಾಗಿದ್ದು, ಜಿಲ್ಲೆಯಲ್ಲಿರುವ ಕೆರೆ-ಕಟ್ಟೆಗಳ ಸಮೀಕ್ಷೆ ನಡೆಸುವ ಮೂಲಕ ಜೀವಜಲ ಸಂರಕ್ಷಣೆಗೆ ಆದ್ಯತೆ ನೀಡಬೇಕು ಎಂದು ಸೂಚನೆ ನೀಡಿದರು. ಗ್ರಾಮೀಣ ಭಾಗದಲ್ಲಿ ಸ್ವಚ್ಚತೆಗೆ ಮೊದಲಾದ್ಯತೆ ನೀಡಬೇಕು. ಬಯಲು ಬಹಿರ್ದೆಸೆ ಮುಕ್ತ ಗ್ರಾಮಗಳನ್ನಾಗಿಸುವ ನಿಟ್ಟಿನಲ್ಲಿ ಕಾಲಮಿತಿ ಹಾಕಿಕೊಂಡು ಪ್ರಗತಿ ಸಾಧಿಸಬೇಕು.ಜನರಲ್ಲಿ ಸೂಕ್ತ ಅರಿವು ಮೂಡಿಸಬೇಕು ಎಂದು ಸೂಚನೆ ನೀಡಿದರು. ನಗರ ಪ್ರದೇಶಗಳಲ್ಲಿ ತ್ಯಾಜ್ಯಗಳನ್ನು ವಿಂಗಡಿಸಿ ಸಮರ್ಪಕವಾಗಿ ವಿಲೇವಾರಿಗೆ ಕ್ರಮ ವಹಿಸಬೇಕು. ಪ್ರತಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಮೂಲಭೂತ ಸೌಕರ್ಯಗಳಾದ ರಸ್ತೆ, ಚರಂಡಿ, ಕುಡಿಯುವ ನೀರಿಗೆ ಆಧ್ಯತೆ ನೀಡಿ ಜನರ ಜೀವನ ಮಟ್ಟ ಸುಧಾರಣೆ ಕ್ರಮ ವಹಿಸಬೇಕು ಎಂದು ಸೂಚಿಸಿದರು. ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಕಡಿವಾಣಕ್ಕೆ ಅಗತ್ಯ ಕ್ರಮ ವಹಿಸಬೇಕು. ಪೋಲಿಸ್ ಇಲಾಖೆ, ಆರೋಗ್ಯ ಹಾಗೂ ಶಿಕ್ಷಣ ಇಲಾಖೆಯ ಸಮನ್ವಯದಲ್ಲಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಕಾರ್ಯಕ್ರಮಗಳನ್ನು ಆಯೋಜಿಸಿ ದುಶ್ಚಟಗಳ ನಿವಾರಣೆಗೆ ಶ್ರಮಿಸಬೇಕು ಎಂದರು.ಜಿಲ್ಲೆಯಲ್ಲಿ ತೆರೆದ ಕೊಳವೆ ಬಾವಿಗಳು ಇರದಂತೆ ನೋಡಿಕೊಳ್ಳಬೇಕು. ನಿಷ್ಕ್ರೀಯ ಬೋರವೆಲ್‌ಗಳನ್ನು ಕೂಡಲೇ ಮುಚ್ಚಿಸುವಲ್ಲಿ ಕ್ರಮ ಕೈಗೊಳ್ಳಬೇಕು. ದೇಶ-ವಿದೇಶಗಳಿಂದ ಪ್ರವಾಸಿಗರು ಐತಿಹಾಸಿಕ ನಗರ ವಿಜಯಪುರಕ್ಕೆ ಆಗಮಿಸಲಿರುವ ಹಿನ್ನಲೆಯಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸ್ಚಚ್ಛತೆಗೆ ಆದ್ಯತೆ ನೀಡಬೇಕು. ಹೆಚ್ಚೆಚ್ಚು ಪ್ರವಾಸಿಗರನ್ನು ಆಕರ್ಷಿಸಲು ಕ್ರಮ ವಹಿಸಬೇಕು ಎಂದರು.ಜಿಲ್ಲಾಧಿಕಾರಿ ಟಿ,ಭೂಬಾಲನ್ ಮಾತನಾಡಿ, ಜಿಲ್ಲೆಯಲ್ಲಿನ ೨೬೪ ಕೆರೆಗಳ ಪೈಕಿ ೨೪೭ ಕೆರೆಗಳ ಅಳತೆ ಕಾರ್ಯ ಪೂರ್ಣಗೊಳಿಸಲಾಗಿದೆ. ೧೭ ಕೆರೆಗಳ ಬಾಕಿ ಇದ್ದು, ಸೆಪ್ಟಂಬರ್ ಅಂತ್ಯಕ್ಕೆ ಪೂರ್ಣಗೊಳಿಸಲಾಗುವುದು. ಜಿಲ್ಲೆಯಲ್ಲಿನ ವಿಫಲ ಕೊಳವೆಬಾವಿಗಳ ಕುರಿತು ಈಗಾಗಲೇ ಪ್ರತಿ ತಾಲೂಕು ಮಟ್ಟದಲ್ಲಿ ಸಮಿತಿಯನ್ನು ರಚಿಸಲಾಗಿದೆ. ವಿಫಲ ಹಾಗೂ ನಿಷ್ಕ್ರೀಯ ಕೊಳವೆ ಬಾವಿಗಳ ಮುಚ್ಚುವಲ್ಲಿ ಪಿಡಿಒಗಳಿಗೆ ಸೂಚಿಸಲಾಗಿದ್ದು, ಕೊಳವೆ ಬಾವಿ ಕೊರೆಸಲು ಗ್ರಾಪಂ ವತಿಯಿಂದ ಅನುಮತಿ ಪಡೆಯುವುದು ಕಡ್ಡಾಯಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು. ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಮಾತನಾಡಿ, ಶಾಲಾ-ಕಾಲೇಜ್ ವಿದ್ಯಾರ್ಥಿಗಳಿಂದ ಶನಿವಾರ ಸ್ವಚ್ಛತಾ ಅಭಿಯಾನ ಕೈಗೊಂಡು ಜಾಗೃತಿ ಮೂಡಿಸಲಾಗುತ್ತಿದೆ. ಗುಣಮಟ್ಟದ ಶಿಕ್ಷಣ ಹಾಗೂ ಶಾಲಾ ಕೊಠಡಿಗಳ ಸುಸ್ಥಿತಿ ಕುರಿತು ಕಾಲಕಾಲಕ್ಕೆ ಸಭೆ ನಡೆಸಿ ಅಗತ್ಯ ಸಲಹೆ ಸೂಚನೆ ನೀಡಲಾಗಿದೆ. ಕ್ಷೇತ್ರ ವೀಕ್ಷಣೆ ಮಾಡುವ ಮೂಲಕ ಶಾಲಾ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ, ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿರುವ ಕುರಿತು ಸ್ಥಿತಿಗತಿಗಳನ್ನು ಅರಿತು ಅಗತ್ಯ ಕ್ರಮಗಳನ್ನು ವಹಿಸಲಾಗಿದೆ ಎಂದರು.
ಕರ್ನಾಟಕ ಲೋಕಾಯುಕ್ತ ಕಾರ್ಯದರ್ಶಿ ಕೆ.ಶ್ರೀನಾಥ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ, ಲೋಕಾಯುಕ್ತ ಜಿಲ್ಲಾ ಪೊಲೀಸ್ ಅಧೀಕ್ಷಕ ಟಿ.ಮಲ್ಲೇಶ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಲೋಕಾಯುಕ್ತ ಡಿವೈಎಸ್ಪಿ ಸುರೇಶ ರೆಡ್ಡಿ, ಇಂಡಿ ಉಪವಿಭಾಗಾಧಿಕಾರಿ ಆಬೀದ ಗದ್ಯಾಳ ಸೇರಿದಂತೆ ವಿವಿಧ ಇಲಾಖೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.