ದೂರುಗಳಿಗೆ ತ್ವರಿತವಾಗಿ ಸ್ಪಂದಿಸಿ ಸಮಸ್ಯೆಗಳ ಇತ್ಯರ್ಥಪಡಿಸಿ

KannadaprabhaNewsNetwork |  
Published : Jun 24, 2026, 03:45 AM IST
ಹಾವೇರಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹನುಮಂತಪ್ಪ ಮರಗಡಿ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. | Kannada Prabha

ಸಾರಾಂಶ

ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ಸಾರ್ವಜನಿಕರಿಂದ ವ್ಯಕ್ತವಾಗುವ ದೂರುಗಳಿಗೆ ತ್ವರಿತವಾಗಿ ಸ್ಪಂದಿಸಿ ಸಮಸ್ಯೆಗಳನ್ನು ಇತ್ಯರ್ಥ ಪಡಿಸಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹನುಮಂತಪ್ಪ ಮರಗಡಿ ಹೇಳಿದರು.

ಹಾವೇರಿ: ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ಸಾರ್ವಜನಿಕರಿಂದ ವ್ಯಕ್ತವಾಗುವ ದೂರುಗಳಿಗೆ ತ್ವರಿತವಾಗಿ ಸ್ಪಂದಿಸಿ ಸಮಸ್ಯೆಗಳನ್ನು ಇತ್ಯರ್ಥ ಪಡಿಸಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹನುಮಂತಪ್ಪ ಮರಗಡಿ ಹೇಳಿದರು.ಸ್ಥಳೀಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ ಹಾಗೂ ಯುವನಿಧಿ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಿ ಸಂಬಂಧಿಸಿದ ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆದುಕೊಂಡರು.ಜಿಲ್ಲೆಯ ಮಹಿಳೆಯರು ಶೇ.100ರಷ್ಟು ಶಕ್ತಿ ಯೋಜನೆಯಡಿ ಸೌಲಭ್ಯವನ್ನು ಪಡೆದುಕೊಂಡಿದ್ದಾರೆ. ಹಾವೇರಿ ವಿಭಾಗಕ್ಕೆ ಮೊದಲು 96 ಹೊಸ ಬಸ್‌ಗಳನ್ನು ನೀಡಿದ್ದು, ಈಗ ಹೊಸದಾಗಿ ಮತ್ತೆ 38 ಹೊಸ ಬಸ್‌ಗಳನ್ನು ಹಂಚಿಕೆ ಮಾಡಿದ್ದಾರೆ. ಒಟ್ಟು 134 ಹೊಸ ಬಸ್‌ಗಳು ಹಾವೇರಿ ವಿಭಾಗಕ್ಕೆ ಮಂಜೂರಾಗಿದ್ದು ಅವುಗಳನ್ನು ಹಾವೇರಿ, ಹಿರೇಕೆರೂರು, ರಾಣಿಬೆನ್ನೂರು, ಹಾನಗಲ್ಲ, ಬ್ಯಾಡಗಿ ಹಾಗೂ ಸವಣೂರು ಘಟಕಗಳಿಗೆ ಆದ್ಯತೆ ಮೇರೆಗೆ ಹಂಚಿಕೆ ಮಾಡಿ. ಹಾಗೆಯೇ ಶಾಲಾ ಮಕ್ಕಳು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಅಗತ್ಯ ಮಾರ್ಗಗಳಲ್ಲಿ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಕಲ್ಪಿಸಲು ಕ್ರಮ ವಹಿಸಬೇಕು. ಎಲ್ಲಾ ಬಸ್ ನಿಲ್ದಾಣಗಳು ಹಾಗೂ ಶೌಚಾಲಯಗಳನ್ನು ಕಡ್ಡಾಯವಾಗಿ ಸ್ವಚ್ಛವಾಗಿಟ್ಟುಕೊಳ್ಳಬೇಕು. ಇತ್ತೀಚಿಗೆ ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್ ವಿತರಣೆಯನ್ನು ಆರಂಭಿಸಿದ್ದು ಇದರ ಬಗ್ಗೆ ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಈಗಾಗಲೆ ಹಣ ಪಾವತಿಸಿ ಪಾಸ್ ಪಡೆದವರಿಗೆ ಮರುಪಾವತಿ ಮಾಡಲು ಸಂಬಂಧಪಟ್ಟ ಅಕಾರಿಗಳಿಗೆ ತಿಳಿಸಿದರು.ಗೃಹ ಜ್ಯೋತಿ ಯೋಜನೆ:ಗ್ರಾಮೀಣ ಪ್ರದೇಶಗಳಲ್ಲಿ ಬೀದಿ ದೀಪಗಳು ಅನಗತ್ಯವಾಗಿ ಉರಿಯುವುದನ್ನು ತಡೆಯಲು ಹಾಗೂ ಗ್ರಾಮ ಪಂಚಾಯಿತಿಗಳ ವಿದ್ಯುತ್ ಬಿಲ್ ಹೊರೆಯನ್ನು ತಗ್ಗಿಸಲು ಅಗತ್ಯ ಕ್ರಮ ವಹಿಸಬೇಕು. ಪ್ರತಿ ತಾಲೂಕಿನಲ್ಲಿ ಸರ್ಕಾರಿ ಜಾಗವಿದ್ದರೆ ಸೋಲಾರ್ ಮೈಕ್ರೋ ಗ್ರಿಡ್‌ಗಳನ್ನು ಸ್ಥಾಪಿಸಿ ವಿದ್ಯುತ್ ಉತ್ಪಾದನೆಗೆ ಕ್ರಮ ವಹಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಎಂದು ಹೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.ಅನ್ನಭಾಗ್ಯ ಯೋಜನೆ: ಅನ್ನಭಾಗ್ಯ ಯೋಜನೆಯಡಿ ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಯಲು ಜಿಲ್ಲೆಯಲ್ಲಿ ತೀವ್ರ ನಿಗಾ ವಹಿಸಿ, ನ್ಯಾಯಬೆಲೆ ಅಂಗಡಿಗಳಲ್ಲಿ ಎಲೆಕ್ಟ್ರಾನಿಕ್ ತೂಕದ ಯಂತ್ರಗಳ ಬಳಕೆಯನ್ನು ಕಡ್ಡಾಯಗೊಳಿಸಿ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಆಹಾರ ಇಲಾಖೆಯ ಅಧಿಕಾರಿಗಳು, ಕಾಳ ಸಂತೆಯಲ್ಲಿ ಅಕ್ಕಿ ಮಾರುವವರ ವಿರುದ್ದ 17 ಪ್ರಕರಣಗಳನ್ನು ದಾಖಲಿಸಲಾಗಿದೆ. ಹಿರಿಯ ನಾಗರಿಕರಿಗೆ ಬಯೋಮೆಟ್ರಿಕ್ ಸಮಸ್ಯೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ 75 ವರ್ಷ ಮೇಲ್ಪಟ್ಟವರಿಗೆ ಮನೆ ಬಾಗಿಲಿಗೆ ಪಡಿತರ ತಲುಪಿಸುವ ಅನ್ನ ಸುವಿಧಾ ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗಿದೆ ಎಂದರು.ಗೃಹಲಕ್ಷ್ಮಿ ಯೋಜನೆ: ಗೃಹಲಕ್ಷ್ಮಿ ಯೋಜನೆಯಡಿ ಇದುವರೆಗೂ ಸರ್ಕಾರರಿಂದ 30 ಕಂತುಗಳನ್ನು ಬಿಡುಗಡೆ ಮಾಡಲಾಗಿದೆ. ಎರಡು ತಿಂಗಳ ಕಂತು ಬಾಕಿ ಇವೆ. ಇ-ಕೆವೈಸಿ ಸಮಸ್ಯೆಯಿಂದಾಗಿ ಕೆಲವು ಫಲಾನುಭವಿಗಳು ಯೋಜನೆಯ ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ. ಅಂತವರು ಸಂಬಂಧಿತ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಇ-ಕೆವೈಸಿ ನವೀಕರಿಸಿಕೊಳ್ಳುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಯುವನಿಧಿ ಯೋಜನೆ: ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ಇದುವರೆಗೆ 9,978 ಅರ್ಜಿಗಳು ನೋಂದಣಿಯಾಗಿದ್ದು, ಅದರಲ್ಲಿ 8,643 ಅರ್ಹ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗಿದೆ. ಇದು ಶೇ.87ರಷ್ಟು ಸಾಧನೆಯಾಗಿದೆ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು.ಸಭೆಯಲ್ಲಿ ಜಿಪಂ ಸಿಇಒ ದಲ್ಜಿತ್ ಕುಮಾರ್, ಜಿಪಂ ಉಪ ಕಾರ್ಯದರ್ಶಿ ಡಾ. ಪುನೀತ್ ಬಿ.ಆರ್., ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರು, ಸದಸ್ಯರು ಹಾಗೂ ಗ್ಯಾರಂಟಿ ಯೋಜನಗಳ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ₹1.02 ಕೋಟಿ ಮೌಲ್ಯದ ಮದ್ಯ ಜಪ್ತಿ
ವಿಚಿತ್ರ ದೇಹ ರಚನೆಯ ಕರು ಜನನ