ದೊಡ್ಡಬಳ್ಳಾಪುರ: ರೈತರಿಗೆ ಸಂಬಂಧಿಸಿದ ಕಂದಾಯ ಇಲಾಖೆಯ ಕೆಲಸ ಕಾರ್ಯಗಳಿಗೆ ಪ್ರಥಮ ಆದ್ಯತೆಯನ್ನು ನೀಡಿ, ಶೀಘ್ರವಾಗಿ ಬಗೆಹರಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಹೇಳಿದರು.
ರಾಜ್ಯ ಸರ್ಕಾರಿ ಕಂದಾಯ ಇಲಾಖಾ ನೌಕರರ ಸಂಘ, ಕರ್ನಾಟಕ ರಾಜ್ಯ ಸರ್ಕಾರಿ ಗ್ರಾಮ ಆಡಳಿತ ಅಧಿಕಾರಿಗಳ ಸಂಘ ಮತ್ತು ಕರ್ನಾಟಕ ರಾಜ್ಯ ಕಂದಾಯ ಇಲಾಖಾ ಗ್ರಾಮ ಸಹಾಯಕ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ, 2024ನೇ ಸಾಲಿನ ಕಂದಾಯ ದಿನಾಚರಣೆ ಮತ್ತು ಕಂದಾಯ ಕಾರ್ಯಾಗಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಂದಾಯ ಇಲಾಖೆಯೂ ಎಲ್ಲ ಇಲಾಖೆಗಳ ಮಾತೃ ಇಲಾಖೆಯಾಗಿ ಕೆಲಸ ನಿರ್ವಹಿಸುತ್ತಿದೆ. ಜಿಲ್ಲೆಯ ಕಂದಾಯ ಇಲಾಖೆಯ ಪ್ರಗತಿಗೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದ್ದಿರಿ. ತಾವುಗಳು ಕಛೇರಿ ಕೆಲಸದ ಜತೆಯಲ್ಲಿ ತಮ್ಮ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ವಹಿಸಿ, ಆಗಾಗ್ಗೆ ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.ಕಂದಾಯ ಅಧಿಕಾರಿಗಳು ಅಧಿಕಾರದಲ್ಲಿ ಇದ್ದೇನೆ ಅಂತಾ ಅಧಿಕಾರ ಚಲಾಯಿಸುವುದು ಬೇಡ. ಜನರಿಗೆ ಅಗತ್ಯ ಸೇವೆಯನ್ನು ಸಕಾಲದಲ್ಲಿ ನೀಡುವ ಮೂಲಕ ಸರ್ಕಾರಿ ಕೆಲಸದಲ್ಲಿದ್ದೇನೆ ಎನ್ನುವ ತೃಪ್ತಿ ಪಡಿಬೇಕು. ನಿಮ್ಮ ಸಮಸ್ಯೆ ಹಾಗೂ ಕುಂದುಕೊರತೆಗಳ ಮನವಿಯನ್ನು ಸರ್ಕಾರದ ಗಮನಕ್ಕೆ ತರುತ್ತೇನೆ ಈಗಾಗಲೇ ಗ್ರಾಮ ಲೆಕ್ಕಾಧಿಕಾರಿಗಳ ಕೆಲಸಕ್ಕೆ ಅಗತ್ಯ ಸವಲತ್ತುಗಳನ್ನು ವಿತರಿಸಲು ಸರ್ಕಾರ ಮಟ್ಟದಲ್ಲಿ ಚರ್ಚೆಯಾಗಿದೆ ಎಂದರು.
ಇದಕ್ಕೂ ಮುನ್ನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಂದಾಯ ಇಲಾಖಾ ಕಛೇರಿಯಲ್ಲಿ ಸೇವೆ ಸಲ್ಲಿಸಿ, ಸೇವಾ ನಿವೃತ್ತಿಯಾದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸನ್ಮಾನಿಸುವ ಮೂಲಕ ಬೀಳ್ಕೊಡಲಾಯಿತು.
1ಕೆಡಿಬಿಪಿ1- ಬೆಂ.ಗ್ರಾ. ಜಿಲ್ಲಾಡಳಿತ ಭವನದಲ್ಲಿ ಕಂದಾಯ ದಿನಾಚರಣೆ ಮತ್ತು ಕಂದಾಯ ಕಾರ್ಯಾಗಾರವನ್ನು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಉದ್ಘಾಟಿಸಿದರು.