ಜನರ ಸಮಸ್ಯೆಗೆ ಸ್ಪಂದಿಸಿ, ಪರಿಹಾರ ಕೊಡಿ: ಸಚಿವ ಜಮೀರ್‌ ಅಹ್ಮದ್ ಖಾನ್

KannadaprabhaNewsNetwork |  
Published : Aug 17, 2024, 12:47 AM IST
14ಎಚ್‌ಪಿಟಿ10- ಹೊಸಪೇಟೆಯಲ್ಲಿ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್. ಜಮೀರ್ ಅಹಮದ್‌ ಖಾನ್ ಅವರು ಜನಸ್ಪಂದನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಾಸಕರಾದ ಎಚ್.ಆರ್. ಗವಿಯಪ್ಪ,  ಡಾ.ಶ್ರೀನಿವಾಸ್‌ ಎನ್.ಟಿ., ಎಂ.ಪಿ. ಲತಾ ಮಲ್ಲಿಕಾರ್ಜುನ ಇದ್ದರು. | Kannada Prabha

ಸಾರಾಂಶ

ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಪರಿಹಾರದ ಜೊತೆಗೆ ಸಕಾಲದಲ್ಲಿ ಸೇವೆಗಳು ಸಿಗುವ ನಿಟ್ಟಿನಲ್ಲಿ ನಮ್ಮ ಸರ್ಕಾರವು ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಂಡಿದೆ.

ಹೊಸಪೇಟೆ: ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕೃತವಾದ ಸಾರ್ವಜನಿಕರ ಅರ್ಜಿ, ಅಹವಾಲುಗಳಿಗೆ ತಕ್ಷಣವೇ ಸ್ಪಂದಿಸಿ ಪರಿಹಾರ ನೀಡಲು ಕ್ರಮ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್‌ ಖಾನ್ ಅಧಿಕಾರಿಗಳಿಗೆ ಸೂಚಿಸಿದರು.

ವಿಜಯನಗರ ಜಿಲ್ಲಾಡಳಿತ ಹಾಗೂ ಹೊಸಪೇಟೆ ನಗರಸಭೆ ಸಹಯೋಗದಲ್ಲಿ ನಗರದ ಜಿಲ್ಲಾ ಒಳಾಂಗಣ ಕ್ರೀಡಾಂಗಣದ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಳ್ಳಲಾದ ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿ ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಿ ಅಹವಾಲುಗಳನ್ನು ಆಲಿಸಿ, ಅವರು ಮಾತನಾಡಿದರು.

ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಪರಿಹಾರದ ಜೊತೆಗೆ ಸಕಾಲದಲ್ಲಿ ಸೇವೆಗಳು ಸಿಗುವ ನಿಟ್ಟಿನಲ್ಲಿ ನಮ್ಮ ಸರ್ಕಾರವು ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಂಡಿದೆ. ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕೃತವಾಗುವ ಸಾರ್ವಜನಿಕ ಅಹವಾಲುಗಳಿಗೆ ಎಲ್ಲ ಇಲಾಖೆಗಳ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸುವುದರ ಮೂಲಕ ಸಮಸ್ಯೆಗಳಿಗೆ ಶೀಘ್ರ ಪರಿಹಾರಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು. ಆಗ ಮಾತ್ರ ಈ ಕಾರ್ಯಕ್ರಮಕ್ಕೆ ಮಹತ್ವ ಬರುತ್ತದೆ. ಯಾವುದೇ ಅರ್ಜಿಗಳನ್ನು ಬಾಕಿ ಉಳಿಸಿಕೊಳ್ಳದೇ ಅವುಗಳನ್ನು ಮತ್ತು ಸಾರ್ವಜನಿಕರ ಕುಂದು ಕೊರತೆಗಳನ್ನು ಶೀಘ್ರವಾಗಿ ಪರಿಹರಿಸುವ ಕೆಲಸವಾಗಬೇಕು ಎಂದರು.

ವಸತಿರಹಿತರಿಗೆ ಮನೆ:

ರಾಜ್ಯ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳಿಗಾಗಿ ₹55ರಿಂದ 60 ಸಾವಿರ ಕೋಟಿ ಖರ್ಚು ಮಾಡುತ್ತಿದೆ. ಈ ನಡುವೆ ಸರ್ಕಾರ ವಸತಿರಹಿತರಿಗೆ ಮನೆಗಳನ್ನು ಒದಗಿಸಲು ರಾಜ್ಯದ ವಸತಿ ಯೋಜನೆಗಳಿಗೆ. ₹9,500 ಕೋಟಿ ಅನುದಾನ ನೀಡಿದೆ. ಈ ಹಿನ್ನೆಲೆಯಲ್ಲಿ ಫೆಬ್ರವರಿ ಮಾಹೆಯಲ್ಲಿ 36 ಸಾವಿರಕ್ಕೂ ಅಧಿಕ ಮನೆಗಳನ್ನು ಮಂಜೂರು ಮಾಡಲಾಗಿದ್ದು, ಮುಂದಿನ ತಿಂಗಳಲ್ಲಿ 35,200ಕ್ಕೂ ಅಧಿಕ ಮನೆಗಳನ್ನು ನೀಡುತ್ತಿದ್ದೇವೆ. ನಮ್ಮ ಸರ್ಕಾರದ ಅವಧಿಯಲ್ಲಿ ಸುಮಾರು 2 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಮನೆ ನಿರ್ಮಿಸಿ ಹಸ್ತಾಂತರ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಶಾಸಕ ಎಚ್.ಆರ್. ಗವಿಯಪ್ಪ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಡಾ.ಶ್ರೀನಿವಾಸ್‌ ಎನ್.ಟಿ., ಎಂ.ಪಿ. ಲತಾ ಮಲ್ಲಿಕಾರ್ಜುನ, ವಸತಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್‌ರಾಜ್ ಸಿಂಗ್, ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್, ಜಿಪಂ ಸಿಇಒ ಅಕ್ರಂ ಶಾ, ಎಸ್ಪಿ ಶ್ರೀಹರಿಬಾಬು ಬಿ.ಎಲ್. ಇದ್ದರು.

ವಿವಿಧ ಇಲಾಖೆಯ ಕೌಂಟರ್ ಸ್ಥಾಪನೆ ಮಾಡಿ ಸಾರ್ವಜನಿಕರಿಂದ ಅಹವಾಲು ಅರ್ಜಿಗಳನ್ನು ಸ್ವೀಕರಿಸಲಾಯಿತು. ಪಿಂಚಣಿ ಸೌಲಭ್ಯ ಸೇರಿದಂತೆ ಕೆಲ ಅರ್ಜಿಗಳನ್ನು ಸ್ಥಳದಲ್ಲಿಯೇ ಪರಿಹರಿಸಲಾಯಿತು.

ಕರ್ತವ್ಯ ವೇಳೆ ಹೃದಯಾಘಾತದಿಂದ ಮೃತಪಟ್ಟ ಹೊಸಪೇಟೆ ಘಟಕದ ಗೃಹರಕ್ಷಕದಳ ಸಿಬ್ಬಂದಿ ಬಿ.ಗೌಸ್ ಅವರ ಕುಟುಂಬಸ್ಥರಿಗೆ ಸಚಿವರು ₹1 ಲಕ್ಷ ವೈಯಕ್ತಿಕವಾಗಿ ಧನಸಹಾಯ ನೀಡಿದರು.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ