ಯೋಜನೆ ಪರಿಣಾಮಕಾರಿ ಅನುಷ್ಠಾನ ಅಧಿಕಾರಿಗಳ ಜವಾಬ್ದಾರಿ: ಯದುವೀರ್

KannadaprabhaNewsNetwork |  
Published : Dec 07, 2025, 03:45 AM IST

ಸಾರಾಂಶ

ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಯಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕೇಂದ್ರ ಸರ್ಕಾರದಿಂದ ಹಲವು ಯೋಜನೆಗಳಿದ್ದು, ಅವುಗಳನ್ನು ಪರಿಣಾಮಕಾರಿಯಾಗಿ ತಲುಪಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ. ಆ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವಂತೆ ಅಧಿಕಾರಿಗಳಿಗೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸದಸ್ಯ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಧಾನಮಂತ್ರಿಯವರ ಗ್ರಾಮ ಸಡಕ್ ಯೋಜನೆ, ಜಲಜೀವನ್ ಮಿಷನ್, ರಾಷ್ಟ್ರೀಯ ತೋಟಗಾರಿಕಾ ಮಿಷನ್, ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ, ಸ್ವಚ್ಛ ಭಾರತ ಮಿಷನ್, ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ, ಪ್ರಧಾನಮಂತ್ರಿ ಆವಾಸ್ ಯೋಜನೆ, ಎನ್‍ಆರ್‍ಎಲ್‍ಎಂ., ಸಂಜೀವಿನಿ ಯೋಜನೆ ಸೇರಿದಂತೆ ಹಲವು ಯೋಜನೆಗಳಿದ್ದು, ಇವುಗಳನ್ನು ಕಾಲಮಿತಿಯಲ್ಲಿ ಅನುಷ್ಠಾನಗೊಳಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಧೋರಣೆ ಅನುಸರಿಸಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದ ಸ್ಟೀವರ್ಟ್‍ಹಿಲ್ ನಲ್ಲಿ ಕಸ ವಿಲೇವಾರಿ ಸಂಬಂಧಿಸಿದಂತೆ ಮಾತನಾಡಿದ ಸಂಸದರು ಕಳೆದ ಏಳು ತಿಂಗಳಾದರೂ ಸಹ ಕಸ ವಿಲೇವಾರಿಗೆ ಸಂಬಂಧಿಸಿದಂತೆ ಪ್ರಗತಿ ಆಗದಿರುವುದಕ್ಕೆ ತೀವ್ರ ಅತೃಪ್ತಿ ವ್ಯಕ್ತಪಡಿಸಿದರು.

ಪೂರ್ಣಗೊಳಿಸುವಂತೆ ಸೂಚನೆ:

ಕಳೆದ ದಿಶಾ ಸಭೆಯಲ್ಲಿ ಸ್ಪಷ್ಟ ನಿರ್ದೇಶನ ನೀಡಿದರೂ ಸಹ, ಪ್ರಗತಿ ಸಾಧಿಸಿಲ್ಲ. ಕೂಡಲೇ ಮಾರ್ಚ್ ತಿಂಗಳೊಳಗೆ ಪೂರ್ಣಗೊಳಿಸುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪೌರಾಯುಕ್ತರು ಮತ್ತು ಎಂಜಿನಿಯರ್ ಅವರು ಅರಣ್ಯ ಇಲಾಖೆಯ ಕ್ಲಿಯರೆನ್ಸ್ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲಾಗಿದೆ. ನೂತನ ಕಸವಿಲೇವಾರಿ ಘಟಕ ನಿರ್ಮಾಣ ಸಂಬಂಧ ಅನುಮೋದಿತ 20 ಕಾಮಗಾರಿಗಳಿಗೆ ಈಗಾಗಲೇ ಟೆಂಡರ್ ಆಹ್ವಾನಿಸಿ ಕಾರ್ಯಾದೇಶ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರು ಹಸಿ ಕಸ ಮತ್ತು ಒಣ ಕಸ ಬೇರ್ಪಡಿಸಿ ವಿಲೇವಾರಿಗೆ ಕ್ರಮವಹಿಸಲಾಗಿದೆ ಎಂದು ಹೇಳಿದರು.

ಕಸವಿಲೇವಾರಿ ಸಂಬಂಧ ಅನುಷ್ಠಾನ ಸಂಸ್ಥೆ ಅವರು ಮಳೆ ವಾತಾವರಣಕ್ಕೆ ತಕ್ಕಂತೆ ಕರ್ತವ್ಯ ನಿರ್ವಹಿಸಬೇಕು. ಅದನ್ನು ಬಿಟ್ಟು ಸಬೂಬು ಹೇಳುವುದು ಸರಿಯಲ್ಲ. ಎಂಜಿನಿಯರ್‍ಗಳು ಎಜೆನ್ಸಿ ಅವರಿಂದ ಕೆಲಸ ಮಾಡಿಸಬೇಕು ಎಂದು ಸಂಸದರು ತಾಕೀತು ಮಾಡಿದರು.

ಸ್ವಚ್ಛತೆಗೆ ಒತ್ತು ನೀಡಬೇಕು:

ಸುಜಾ ಕುಶಾಲಪ್ಪ ಅವರು ಸ್ವಚ್ಛ ಕೊಡಗು ಅಭಿಯಾನ ನಡೆಯುತ್ತಿದ್ದು, ಅವರ ಜೊತೆಗೆ ಕೊಡಗು ಜಿಲ್ಲೆಯಲ್ಲಿ ಮತ್ತಷ್ಟು ಸ್ವಚ್ಛತೆಗೆ ಒತ್ತು ನೀಡಬೇಕು. ಪ್ರವಾಸಿಗರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸಲಹೆ ಮಾಡಿದರು.

ಸಮಿತಿ ಸದಸ್ಯರಾದ ಅರುಣ ಕುಮಾರಿ ಮಾತನಾಡಿ ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರ ಸಲಹೆ ಮಾರ್ಗದರ್ಶನ ಪಡೆಯುತ್ತಿಲ್ಲ. ಪಿಡಿಒ ಅವರು ಮೇಲಾಧಿಕಾರಿಗಳ ಸೂಚನೆಯನ್ನು ಮಾತ್ರ ಪಾಲಿಸುತ್ತಾರೆ ಎಂದು ದೂರಿದರು.

ಕೇಂದ್ರ ಸರ್ಕಾರದ 15 ನೇ ಹಣಕಾಸು ಯೋಜನೆ ಸಮರ್ಪಕವಾಗಿ ಬಳಸುವಂತಾಗಬೇಕು. ಆ ನಿಟ್ಟಿನಲ್ಲಿ ಸಲಹೆ ಮಾರ್ಗದರ್ಶನ ಮಾಡಬೇಕು ಎಂದು ಹೇಳಿದರು.

ಸಮಸ್ಯೆಗಳು ಬಗೆಹರಿಯಲಿವೆ:

ಈ ಸಂದರ್ಭದಲ್ಲಿ ಮಾತನಾಡಿದ ನಾಗೇಶ್ ಕುಂದಲ್ಪಾಡಿ ಅವರು ಗ್ರಾ.ಪಂ.ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ತಾ.ಪಂ.ಇಒ, ಪಿಡಿಒಗಳ ಜೊತೆ ಸಮನ್ವಯ ಸಮಿತಿ ನಡೆಯಬೇಕು. ಇದರಿಂದ ಹಲವು ಸಮಸ್ಯೆಗಳು ಬಗೆಹರಿಯಲಿವೆ ಎಂದು ಸಲಹೆ ಮಾಡಿದರು.

ಗ್ರಾಮೀಣ, ಪಟ್ಟಣ, ನಗರ ಪ್ರದೇಶದಲ್ಲಿ ಮಾಂಸದ ಕಸವನ್ನು ಎಲ್ಲೆಂದರಲ್ಲಿ ಬೀಸಾಡುತ್ತಿರುವ ಬಗ್ಗೆ ದೂರುಗಳು ನೀಡಿದ್ದಲ್ಲಿ ಎಫ್‍ಐಆರ್ ದಾಖಲಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಹೇಳಿದರು.

ಭಾರತ ಸಂಚಾರ ನಿಗಮವು(ಬಿಎಸ್‍ಎನ್‍ಎಲ್) ಎಲ್ಲೆಡೆ ಸಂಪರ್ಕ ಕಲ್ಪಿಸಬೇಕು. ದೂರು ಬರದಂತೆ ನೋಡಿಕೊಳ್ಳುವಂತೆ ಸಂಸದರು ನಿರ್ದೇಶನ ನೀಡಿದರು.

ಕೇಂದ್ರ ಸರ್ಕಾರದ ಪುರಸ್ಕೃತ ಯೋಜನೆಗಳ ರಸ್ತೆ ಕಾಮಗಾರಿ ಕೈಗೊಳ್ಳಬೇಕು. ಹೆದ್ದಾರಿ ಸೇರಿದಂತೆ ರಸ್ತೆ ಬದಿಯಲ್ಲಿ ಗಿಡ ಗಂಟೆಗಳನ್ನು ಕಡಿಯಬೇಕು. ಗುಂಡಿ ಮುಚ್ಚಬೇಕು. ಗುಣಮಟ್ಟದ ಕಾಮಗಾರಿಯನ್ನು ಕೈಗೊಳ್ಳಬೇಕು ಎಂದು ಸುಜಾ ಕುಶಾಲಪ್ಪ ಅವರು ಸೂಚಿಸಿದರು.

ಕೊಡ್ಲಿಪೇಟೆಯಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಯ ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮತ್ತಷ್ಟು ಸೌಲಭ್ಯ ಕಲ್ಪಿಸಬೇಕು ಎಂದು ಸಲಹೆ ಮಾಡಿದರು.

ಸಂಸದರ ನಿರ್ದೇಶನ:

ಕೃಷಿ ಇಲಾಖೆಯಲ್ಲಿ ಕೃಷಿ ಸಖಿ ಯೋಜನೆ ಸೇರಿದಂತೆ ಹಲವು ಕಾರ್ಯಕ್ರಮಗಳು ಇದ್ದು, ಬೆಳೆ ವಿಮೆ ಸೇರಿದಂತೆ ಹಲವು ಕೃಷಿ ಇಲಾಖೆ ಕಾರ್ಯಕ್ರಮಗಳ ಬಗ್ಗೆ ಜಾಗೃತಿ ಮೂಡಿಸುವಂತೆ ಸಂಸದರು ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ನಾಗೇಶ್ ಕುಂದಲ್ಪಾಡಿ ಅವರು ಕೃಷಿ ಇಲಾಖೆ ಅಧಿಕಾರಿಗಳು ಕೃಷಿಕರನ್ನು ನೇರವಾಗಿ ಸಂಪರ್ಕಿಸಿ ಮಾಹಿತಿ ನೀಡುವಂತಾಗಬೇಕು. ಪಂಚಾಯತ್ ಮಟ್ಟದಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಕೇಂದ್ರ ಸರ್ಕಾರದ ಯೋಜನೆ ಬಗ್ಗೆ ಮಾಹಿತಿ ನೀಡುವಂತಾಗಬೇಕು ಎಂದು ಸಲಹೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸುಜಾ ಕುಶಾಲಪ್ಪ ಅವರು ಬೆಳೆ ಹಾನಿ ಸಂಬಂಧಿಸಿದಂತೆ ಜಂಟಿ ಸಮೀಕ್ಷೆ ಮಾಡಿ ವರದಿ ನೀಡಲಾಗಿದೆ. ಆದರೆ ವರದಿ ಸರಿಯಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕೊಳೆ ರೋಗದಿಂದ ಬೆಳೆ ನಷ್ಟವಾಗಿದೆ. ಈ ಬಗ್ಗೆ ಸರಿಯಾದ ವರದಿ ನೀಡುವಂತೆ ಸೂಚಿಸಿದರು.

ನಾಗೇಶ್ ಕುಂದಲ್ಪಾಡಿ ಮಾತನಾಡಿ ಕರಿಕೆ, ಸಂಪಾಜೆ, ಪೆರಾಜೆ, ಚೆಂಬು ಗ್ರಾ.ಪಂ. ವ್ಯಾಪ್ತಿಯಲ್ಲಿ ಅಡಿಕೆಯು ಇಲ್ಲ, ರಬ್ಬರ್ ಸಹ ಇಲ್ಲ ಈ ಬಾರಿ ಮಳೆಯಿಂದ ಹೆಚ್ಚಿನ ನಷ್ಟವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮಳೆ ಹಾನಿ ಬಗ್ಗೆ ಕೇಂದ್ರ ಸರ್ಕಾರದ ಗಮನಕ್ಕೆ ಬಂದಿದ್ದು, ಈ ಬಗ್ಗೆ ಹೆಚ್ಚಿನ ಗಮನಹರಿಸಲಾಗುವುದು ಎಂದು ಹೇಳಿದರು.

ಆರೋಗ್ಯ ರಕ್ಷಾ ಸಮಿತಿ ಸಭೆಯನ್ನು ಕಾಲ ಮಿತಿಯಲ್ಲಿ ನಡೆಸಬೇಕು ಯಾವುದೇ ಕಾರಣಕ್ಕೂ ಔಷಧ ಪೂರೈಕೆಯಲ್ಲಿ ವ್ಯತ್ಯಯವಾಗಬಾರದು ಎಂದರು.

ಸಮಿತಿ ಸದಸ್ಯರಾದ ಚೆಪ್ಪುಡಿರ ರಾಕೇಶ್ ಅವರು ಮಾತನಾಡಿ, ಬಾಳೆಲೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಹಾಗೂ ಶ್ರುಶ್ರೂಷಕರು ಇಲ್ಲದೆ ಸಾರ್ವಜನಿಕರಿಗೆ ತೊಂದರೆಯಾಗಿದೆ. ಆದ್ದರಿಂದ ವೈದ್ಯರು ಹಾಗೂ ಶ್ರುಶ್ರೂಷಕರನ್ನು ನೇಮಿಸಿ ಆರೋಗ್ಯ ಸೇವೆ ಕಲ್ಪಿಸಬೇಕು ಎಂದರು.

ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಹಲವು ವಿಚಾರಗಳ ಕುರಿತು ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೊಡವ ಮುಸ್ಲಿಮರಿಂದ ಕಾಟ್ರಕೊಲ್ಲಿ ಪುತ್ತರಿ ಆಚರಣೆ
ಪರಿಸರಕ್ಕೆ ಹಾನಿಯಾಗದಂತೆ ಬೇಡ್ತಿ –ವರದಾ ನದಿ ತಿರುವು ಆಗಲಿ: ಬೊಮ್ಮಾಯಿ