ಕನ್ನಡಪ್ರಭ ವಾರ್ತೆ ಬಳ್ಳಾರಿ
ಕೇಂದ್ರ ಸರ್ಕಾರ ಪ್ರಜಾಪ್ರಭುತ್ವದ ಹಕ್ಕುಗಳನ್ನು ದಮನ ಮಾಡುತ್ತಿದ್ದು, ದೇಶದಲ್ಲಿ ಅಘೋಷಿತ ತುರ್ತುಪರಿಸ್ಥಿತಿಯ ವಾತಾವರಣ ನಿರ್ಮಾಣ ಮಾಡಿದೆ. ಶಾಂತಿಯುತ ಪ್ರತಿಭಟನೆ ನಡೆಸುವ ಸಂವಿಧಾನಬದ್ಧ ಹಕ್ಕನ್ನೂ ಕಸಿದುಕೊಳ್ಳಲಾಗುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಿಪಿಎಂ ತಾಲೂಕು ಕಾರ್ಯದರ್ಶಿ ಜೆ. ಚಂದ್ರಕುಮಾರಿ ಮಾತನಾಡಿ, ದೆಹಲಿಯ ಜಂತರ್ ಮಂತರ್‌ನಲ್ಲಿ ಸಿಪಿಎಂ ಸೇರಿದಂತೆ ವಿವಿಧ ಎಡಪಕ್ಷಗಳು ಹಾಗೂ ವಿದ್ಯಾರ್ಥಿ, ಯುವಜನ ಸಂಘಟನೆಗಳು ಪ್ರತಿಭಟನೆ ನಡೆಸಲು ಮುಂದಾಗಿದ್ದವು. ಆದರೆ, ಪೊಲೀಸರು ಪ್ರತಿಭಟನೆಗೆ ಅನುಮತಿ ನಿರಾಕರಿಸುವ ಮೂಲಕ ಪ್ರಜಾಪ್ರಭುತ್ವ ವಿರೋಧಿ ಧೋರಣೆ ಅನುಸರಿಸಿದ್ದಾರೆ. ಪ್ರತಿಭಟನೆಯನ್ನು ತಡೆಯುವ ಉದ್ದೇಶದಿಂದ ಜಂತರ್ ಮಂತರ್ ಸುತ್ತಮುತ್ತಲಿನ ಪ್ರದೇಶದಲ್ಲಿ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿತ್ತು. ರೈಲ್ವೆ, ಮೆಟ್ರೋ ನಿಲ್ದಾಣಗಳು ಹಾಗೂ ವಾಹನ ಸಂಚಾರಕ್ಕೂ ನಿರ್ಬಂಧ ವಿಧಿಸಲಾಗಿತ್ತು. ಸುಮಾರು 25 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಿ, ಬೃಹತ್ ಬ್ಯಾರಿಕೇಡ್‌ಗಳನ್ನು ಅಳವಡಿಸುವ ಮೂಲಕ ಪ್ರತಿಭಟನಾಕಾರರು ಜಂತರ್ ಮಂತರ್ ಪ್ರವೇಶಿಸದಂತೆ ತಡೆಯಲಾಗಿದೆ. ಪ್ರತಿಭಟನೆಯಲ್ಲಿ ಭಾಗವಹಿಸಲು ಮುಂದಾಗಿದ್ದ ಸಿಪಿಎಂ ಪ್ರಧಾನ ಕಾರ್ಯದರ್ಶಿ ಎಂ.ಎ. ಬೇಬಿ, ಹಿರಿಯ ನಾಯಕಿ ಬೃಂದಾ ಕಾರಟ್, ಕೇರಳ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಮಾಜಿ ಸಚಿವೆ ಕೆ.ಕೆ. ಶೈಲಜಾ ಸೇರಿದಂತೆ ಹಲವು ಮುಖಂಡರನ್ನು ಬಂಧಿಸುವ ಮೂಲಕ ಪೊಲೀಸರು ಪ್ರಜಾಪ್ರಭುತ್ವ ವಿರೋಧಿ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಿದರು.ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹೆಸರಿನಲ್ಲಿ ಅರ್ಹ ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ ಮೂಲಕ ಚುನಾವಣಾ ವ್ಯವಸ್ಥೆಯ ಮೇಲೆ ಪ್ರಭಾವ ಬೀರುವ ಆತಂಕವಿದೆ. ಹೀಗಾಗಿ ಎಸ್‌ಐಆರ್ ಪ್ರಕ್ರಿಯೆಯನ್ನು ಕೂಡಲೇ ರದ್ದುಗೊಳಿಸಬೇಕು. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಚಂದ್ರಕುಮಾರಿ ಆಗ್ರಹಿಸಿದರು. ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಜೆ. ಸತ್ಯಬಾಬು, ಮುಖಂಡರಾದ ಪಾಂಡುರಂಗರಾಜ್, ಡಿವೈಎಫ್‌ಐನ ಯು. ಎರ್ರಿಸ್ವಾಮಿ, ಅರುಣಾ, ಮಲ್ಲಮ್ಮ, ಎಂ. ತಿಪ್ಪೇಸ್ವಾಮಿ, ಗಂಗಣ್ಣ ಪತ್ತಾರ್, ಗುರುಸಿದ್ದಮೂರ್ತಿ, ಎಸ್‌ಎಫ್‌ಐನ ವರದರಾಜ್, ವೆಂಕಟೇಶ್, ನವೀನ್, ರಾಣಿ ಸೇರಿದಂತೆ ವಿದ್ಯಾರ್ಥಿ, ಯುವಜನ ಹಾಗೂ ಮಹಿಳಾ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿದ್ದರು.
ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಮುಂದಾದ ಎಡಪಕ್ಷಗಳ ಮುಖಂಡರು, ವಿದ್ಯಾರ್ಥಿ, ಯುವಜನ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿರುವುದನ್ನು ಖಂಡಿಸಿ ಸಿಪಿಎಂ ಪಕ್ಷದ ಕಾರ್ಯಕರ್ತರು ಬಳ್ಳಾರಿಯ ಗಡಗಿಚನ್ನಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.