ಬಂಡೀಪುರ, ನಾಗರಹೊಳೆ ಸಫಾರಿ ಪುನಾರಂಭ

KannadaprabhaNewsNetwork |  
Published : Feb 19, 2026, 02:00 AM IST
ಬಂಡೀಪುರ | Kannada Prabha

ಸಾರಾಂಶ

ಹುಲಿ ದಾಳಿಯಿಂದ ಸರಣಿ ಸಾವು ಸಂಭವಿಸಿದ ಹಿನ್ನೆಲೆಯಲ್ಲಿ ಕಳೆದ ನ.7 ರಿಂದ ಸ್ಥಗಿತಗೊಳಿಸಲಾಗಿದ್ದ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಸಫಾರಿಯನ್ನು ತಾಂತ್ರಿಕ ಸಮಿತಿ ವರದಿ ಆಧರಿಸಿ ಹಂತ ಹಂತವಾಗಿ ಪುನಾರಂಭಿಸಲು ನಿರ್ಧರಿಸಲಾಗಿದೆ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಹುಲಿ ದಾಳಿಯಿಂದ ಸರಣಿ ಸಾವು ಸಂಭವಿಸಿದ ಹಿನ್ನೆಲೆಯಲ್ಲಿ ಕಳೆದ ನ.7 ರಿಂದ ಸ್ಥಗಿತಗೊಳಿಸಲಾಗಿದ್ದ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಸಫಾರಿಯನ್ನು ತಾಂತ್ರಿಕ ಸಮಿತಿ ವರದಿ ಆಧರಿಸಿ ಹಂತ ಹಂತವಾಗಿ ಪುನಾರಂಭಿಸಲು ನಿರ್ಧರಿಸಲಾಗಿದೆ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಪರಿಸರ ಪ್ರವಾಸೋದ್ಯಮದ ಧಾರಣಾ ಸಾಮರ್ಥ್ಯವನ್ನು ವೈಜ್ಞಾನಿಕವಾಗಿ ನಿಗದಿ ಪಡಿಸಲು ರಚಿಸಲಾಗಿರುವ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ನೇತೃತ್ವದ ತಾಂತ್ರಿಕ ಸಮಿತಿ ನೀಡಿರುವ ಪ್ರಾಥಮಿಕ ವರದಿಯನ್ನು ವಿಕಾಸಸೌಧದಲ್ಲಿ ಬುಧವಾರ ಉನ್ನತ ಅಧಿಕಾರಿಗಳೊಂದಿಗೆ ಪರಾಮರ್ಶೆ ನಡೆಸಿದ ಸಚಿವರು ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಜೀವನೋಪಾಯಕ್ಕಾಗಿ ಆರಂಭಿಸಿ:

ಎಚ್‌.ಡಿ.ಕೋಟೆಯಲ್ಲಿ ರೈತರೂ ಸೇರಿ ಸಾವಿರಾರು ಸ್ಥಳೀಯರು, ರೆಸಾರ್ಟ್ ಸಿಬ್ಬಂದಿ ಪ್ರತಿಭಟನೆ ನಡೆಸಿ ಸಫಾರಿ ನಿಲ್ಲಿಸಿರುವುದರಿಂದ ತಮ್ಮ ಜೀವನೋಪಾಯಕ್ಕೆ ಅಡ್ಡಿಯಾಗಿದ್ದು, ಸಫಾರಿ ಪುನಾರಂಭಿಸಬೇಕು ಎಂದು ಮನವಿ ಮಾಡಿದ್ದಾರೆ. ಅಲ್ಲದೆ, ರಾಜ್ಯ ಮತ್ತು ರಾಷ್ಟ್ರಮಟ್ಟದ ಹಲವು ಮಾಧ್ಯಮಗಳಲ್ಲಿ ಸಫಾರಿ ಪುನಾರಂಭಿಸಬೇಕು ಎಂದು ವರದಿಗಳು ಪ್ರಕಟವಾಗುತ್ತಿರುವ ಹಿನ್ನೆಲೆಯಲ್ಲಿ ಜೀವವೂ ಉಳಿಯಬೇಕು, ಜೀವನೋಪಾಯವೂ ಇರಬೇಕು ಎಂಬ ಕಾರಣಕ್ಕಾಗಿ ಸಫಾರಿಯನ್ನು ನಿಯಂತ್ರಿತವಾಗಿ ಮತ್ತು ಹಂತಹಂತವಾಗಿ ಪುನಾರಂಭ ಮಾಡಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ತಿಳಿಸಿದರು. ಈ ಹಿಂದೆ ಬಂಡೀಪುರದಲ್ಲಿ 8 ಗಂಟೆ ಕಾಲ ಸಫಾರಿ ನಡೆಯುತ್ತಿತ್ತು. ಈಗ ಅದನ್ನು 5 ಗಂಟೆಗೆ ತಗ್ಗಿಸಲಾಗಿದೆ. ಅದೇ ರೀತಿ ಸುಂಕದಕಟ್ಟೆಯಲ್ಲಿ 6 ಗಂಟೆ ಹಾಗೂ ನಾಗರಹೊಳೆಯಲ್ಲಿ 4 ಗಂಟೆ ಕಾಲ ಮಾತ್ರ ಸಫಾರಿಗೆ ಪ್ರಥಮ ಹಂತದಲ್ಲಿ ಅನುಮತಿಸಲಾಗಿದೆ ಎಂದರು.

ಪ್ರಥಮ ಹಂತದಲ್ಲಿ ಶೇ.50ರಷ್ಟು ವಾಹನಗಳನ್ನು ಮಾತ್ರವೇ ಬಳಕೆ ಮಾಡಲು ನಿರ್ಧರಿಸಲಾಗಿದ್ದು, ಉಳಿದ 50ರಷ್ಟು ವಾಹನ ಮತ್ತು ಸಿಬ್ಬಂದಿಯನ್ನು ಅರಣ್ಯದಂಚಿನ ಗ್ರಾಮಗಳ ಬಳಿ ಗಸ್ತು ಹೆಚ್ಚಿಸಲು ಬಳಸುವ ಮೂಲಕ ವನ್ಯ ಮೃಗಗಳು ನಾಡಿಗೆ ಬಾರದಂತೆ ತಡೆಯಲು ಸೂಚಿಸಲಾಗಿದೆ. ಸಫಾರಿ ವಾಹನಗಳನ್ನು ಕತ್ತಲಾದ ಬಳಿಕ ಓಡಿಸುವುದು, ಹೆಚ್ಚುವರಿ ಅವಧಿಗೆ ಓಡಿಸುವುದು ಮೊದಲಾದ ದುರ್ಬಳಕೆ ತಡೆಗಟ್ಟಲು ಕಡ್ಡಾಯವಾಗಿ ಮುಂದಿನ 2 ತಿಂಗಳೊಳಗಾಗಿ ಎಲ್ಲ ಸಫಾರಿ ವಾಹನಗಳಿಗೆ ಎಂಜಿನ್ ಸಂಪರ್ಕಿತ ಜಿಪಿಎಸ್ ಮತ್ತು ಡ್ಯಾಷ್ ಕ್ಯಾಮ್ ಅಳವಡಿಸಬೇಕು ಎಂದೂ ಸೂಚಿಸಲಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

ಸಫಾರಿ ಆದಾಯದ 3ನೇ ಒಂದು ಭಾಗ ಸ್ಥಳೀಯ ಅಭಿವೃದ್ಧಿಗೆ:

ಪ್ರಸ್ತುತ ಪರಿಸರ ಪ್ರವಾಸೋದ್ಯಮ ಅಂದರೆ ಸಫಾರಿಯಿಂದ ಬರುವ ಒಟ್ಟು ಆದಾಯದ ಮೂರನೇ ಒಂದು ಭಾಗದಷ್ಟು ಹಣವನ್ನು ಅರಣ್ಯದಂಚಿನ ಗ್ರಾಮಗಳ ಸ್ಥಳೀಯ ಸಮುದಾಯದವರಿಗೆ ಕೌಶಲ್ಯ ಅಭಿವೃದ್ಧಿಗಾಗಿ, ಜಾನುವಾರುಗಳಿಗೆ ಮೇವು ಬೆಳೆಸಲು ಮತ್ತು ಪರಿಸರ ಅಭಿವೃದ್ಧಿ ಕಾಮಗಾರಿಗಳಿಗೆ ಬಳಸುವ ಷರತ್ತಿನೊಂದಿಗೆ ಆರಂಭಿಸಲು ಮತ್ತು ವನ್ಯಜೀವಿ-ಮಾನವ ಸಂಘರ್ಷ ತಡೆಯಲು ಸೂಕ್ತ ಸಿಬ್ಬಂದಿಯನ್ನು ಸೂಕ್ಷ್ಮ ಪ್ರದೇಶಗಳಲ್ಲಿ ನಿಯೋಜಿಸುವ ಷರತ್ತಿನೊಂದಿಗೆ ಆರಂಭಿಸಲು ಸಮ್ಮತಿಸಲಾಗಿದೆ ಎಂದೂ ತಿಳಿಸಿದರು.

ಸಭೆಯಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥೆ ಮೀನಾಕ್ಷಿ ನೇಗಿ, ಪ್ರಧಾನ ಕಾರ್ಯದರ್ಶಿ ಮನೋಜ್ ಕುಮಾರ್, ಎಪಿಸಿಸಿಎಫ್ ಬಿಸ್ವಜಿತ್ ಮಿಶ್ರಾ ಮತ್ತಿತರರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರ ಪಾಪರ್‌ ಆದರೂ ಕೈ ಶಾಸಕರು ವಿದೇಶಕ್ಕೆ: ಅಶೋಕ್‌
ಶಾಸಕ ಸುಬ್ಬಾರೆಡ್ಡಿ ಅನರ್ಹ: ಪ್ರಜಾಪ್ರಭುತ್ವಕ್ಕೆ ಸಂದ ಜಯ