ಹಾವೇರಿ: ಜಿಲ್ಲೆಯ ತಾಂಡಾ, ಹಟ್ಟಿ ನಿವಾಸಿಗಳಿಗೆ ಶಾಶ್ವತ ಸೂರು ಒದಗಿಸುವ ನಿಟ್ಟಿನಲ್ಲಿ ಕಂದಾಯ ಗ್ರಾಮದ ಸ್ಥಾನಮಾನ ನೀಡಲು ಸರ್ಕಾರ ನಿರ್ಧರಿಸಿದ್ದು, ಜೂನ್ ಅಂತ್ಯದೊಳಗಾಗಿ ಬಾಕಿ ಉಳಿದುಕೊಂಡಿರುವ ಕಂದಾಯ ಗ್ರಾಮಗಳ ರಚನೆಗೆ ಅಂತಿಮ ಅಧಿಸೂಚನೆ ಸಲ್ಲಿಸಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೂಚಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಜಿಲ್ಲೆಯ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕರ್ನಾಟಕದಲ್ಲಿ ಕಳೆದ ಹತ್ತು ವರ್ಷದಿಂದ ಕಂದಾಯ ಗ್ರಾಮ ಮಾನ್ಯತೆ ನೀಡುವ ಪ್ರಕ್ರಿಯೆ ಚಾಲನೆಯಲ್ಲಿದ್ದರೂ ಈವರೆಗೂ ಪೂರ್ಣಗೊಂಡಿಲ್ಲ. ಇಂತಹ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಲು ಈಗ ಸರ್ಕಾರ ಮುಂದಾಗಿದೆ. ಜಿಲ್ಲೆಯ ಅನೇಕ ಹಳ್ಳಿಗಳಲ್ಲಿ ಅಲೆಮಾರಿ ಮತ್ತು ಅರೆ ಅಲೆಮಾರಿ ಗುಂಪುಗಳು ವಾಸಿಸುತ್ತಿವೆ. ಅವುಗಳನ್ನು ಕಾನೂನುಬದ್ಧಗೊಳಿಸಿ ಆ ನಿವಾಸಿಗಳಿಗೆ ಹಕ್ಕುಪತ್ರಗಳನ್ನು ನೀಡುವ ಮೂಲಕ ಅವುಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲು ಸರ್ಕಾರ ಮಹತ್ತರ ಉದ್ದೇಶವನ್ನು ಹೊಂದಿದೆ ಎಂದರು.ಹಟ್ಟಿ, ತಾಂಡಾ, ಕಾಲನಿಗಳನ್ನು ಸೇರಿ ರಾಜ್ಯಾದಲ್ಲಿ ಸುಮಾರು 3 ಸಾವಿರ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳಾಗಿ ಘೋಷಿಸಲು ಭೂಕಂದಾಯ ಕಾಯ್ದೆಗೆ 2017ರಲ್ಲಿ ತಿದ್ದುಪಡಿ ಮಾಡಲಾಗಿದೆ. ಮೂಲ ಸೌಕರ್ಯಗಳಿಂದ ವಂಚಿತರಾಗಿರುವ ಸಮುದಾಯಗಳಿಗೆ ಕಂದಾಯ ಗ್ರಾಮಗಳನ್ನು ರಚಿಸಿ ಶಾಶ್ವತ ಪರಿಹಾರ ನೀಡುವ ಉದ್ದೇಶದಿಂದ ಕಾನೂನಿಗೆ ತಿದ್ದುಪಡಿ ತರಲಾಗಿದೆ ಆದರೂ ಅದರ ಅನುಷ್ಠಾನ ಈವರೆಗೂ ಪೂರ್ಣಗೊಂಡಿರುವುದಿಲ್ಲ ಎಂದರು. ಸಭೆಯಲ್ಲಿ ಹಾನಗಲ್ಲ ಶಾಸಕ ಶ್ರೀನಿವಾಸ ಮಾನೆ, ಹಿರೇಕೆರೂರು ಶಾಸಕ ಯು.ಬಿ.ಬಣಕಾರ, ಶಿಗ್ಗಾಂವಿ ಶಾಸಕ ಯಾಸೀರಅಹ್ಮದಖಾನ್ ಪಠಾಣ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್‌ಎಫ್‌ಎನ್ ಗಾಜೀಗೌಡ್ರ, ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ, ಅಪರ ಜಿಲ್ಲಾಧಿಕಾರಿ ಡಾ. ಎಲ್. ನಾಗರಾಜ್, ಸಂಜೀವಕುಮಾರ ನೀರಲಗಿ, ತಹಸೀಲ್ದಾರ್‌ಗಳು ಇದ್ದರು.
Revenue Village: Submit final notification: Minister Krishna ByreGowda instructsಹಾವೇರಿ ಸುದ್ದಿ, ಕೃಷ್ಣ ಬೈರೇಗೌಡ, ಕಂದಾಯ ಇಲಾಖೆ, Haveri News, Krishna Byregowda, Revenue Departmentಕರ್ನಾಟಕದಲ್ಲಿ ಕಳೆದ ಹತ್ತು ವರ್ಷದಿಂದ ಕಂದಾಯ ಗ್ರಾಮ ಮಾನ್ಯತೆ ನೀಡುವ ಪ್ರಕ್ರಿಯೆ ಚಾಲನೆಯಲ್ಲಿದ್ದರೂ ಈವರೆಗೂ ಪೂರ್ಣಗೊಂಡಿಲ್ಲ.