ಅಸಮತೋಲನ ನಿವಾರಣೆ ಕುರಿತು ಪರಾಮರ್ಶೆ, ಸೂಚ್ಯಂಕ ಆಧರಿಸಿ ಸರ್ಕಾರಕ್ಕೆ ವರದಿ ಸಲ್ಲಿಕೆ: ಪ್ರೊ.ಎಂ.ಗೋವಿಂದರಾವ್ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಸಭೆ/ ಜಿಲ್ಲೆಯ ಶಾಸಕರು ಭಾಗಿ

KannadaprabhaNewsNetwork |  
Published : Jun 18, 2025, 11:49 PM ISTUpdated : Jun 18, 2025, 11:50 PM IST
18ಎಚ್‌ಪಿಟಿ4- ಹೊಸಪೇಟೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಪ್ರಾದೇಶಿಕ ಅಸಮತೋಲನ ನಿವಾರಣೆ ಕುರಿತು ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಅಧ್ಯಕ್ಷ ಪ್ರೊ.ಎಂ. ಗೋವಿಂದರಾವ್‌ ಬುಧವಾರ ಮಾತನಾಡಿದರು. | Kannada Prabha

ಸಾರಾಂಶ

ಅಭಿವೃದ್ಧಿ ಸೇರಿ ವಿವಿಧ ವಲಯಗಳ ಸೂಚ್ಯಂಕ ಆಧರಿಸಿ, ಗುರುತಿಸಿ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಪರಾಮರ್ಶಿಸಿ ಸರ್ಕಾರಕ್ಕೆ ವರದಿ ನೀಡಲಾಗುವುದು.

ಕನ್ನಡಪ್ರಭ ವಾರ್ತೆ ಹೊಸಪೇಟೆ

ಜಿಲ್ಲೆಯಲ್ಲಿ ಯಾವ ರೀತಿಯ ಬದಲಾವಣೆ ಅಗತ್ಯವಿದೆ. ಅಭಿವೃದ್ಧಿ ಸೇರಿ ವಿವಿಧ ವಲಯಗಳ ಸೂಚ್ಯಂಕ ಆಧರಿಸಿ, ಗುರುತಿಸಿ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಪರಾಮರ್ಶಿಸಿ ಸರ್ಕಾರಕ್ಕೆ ವರದಿ ನೀಡಲಾಗುವುದು ಎಂದು ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಅಧ್ಯಕ್ಷ ಪ್ರೊ.ಎಂ. ಗೋವಿಂದರಾವ್ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಪ್ರಾದೇಶಿಕ ಅಸಮತೋಲನ ನಿವಾರಣೆ ಕುರಿತು ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಬುಧವಾರ ಮಾತನಾಡಿದರು.

ತಲಾ ಆದಾಯ, ಶಿಕ್ಷಣ, ಆರೋಗ್ಯ ಇನ್ನಿತರ ಕ್ಷೇತ್ರಗಳಲ್ಲಿನ ಸುಧಾರಣೆ, ಬೆಳವಣಿಗೆಯ ಬಗ್ಗೆಯು ಸಮಿತಿಯು ಪರಿಶೀಲಿಸಲಿದೆ. ರಾಜ್ಯ ಸರ್ಕಾರ 2024 ಸೆಪ್ಟಂಬರ್‌ನಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಆರ್ಥಿಕ ತಜ್ಞರನ್ನೊಳಗೊಂಡ ಸಮಿತಿ ರಚಿಸಿದ್ದು, ಈ ಸಮಿತಿಯು ಕೃಷಿ, ಕೈಗಾರಿಕೆ, ಆರ್ಥಿಕ ಮೂಲ ಸೌಲಭ್ಯ, ಸಾಮಾಜಿಕ ಸೌಲಭ್ಯ, ಹಣಕಾಸಿನ ಮತ್ತು ತಾಂತ್ರಿಕ ಮೂಲಸೌಲಭ್ಯ ಮುಂತಾದ ವಲಯಗಳ ಅಭಿವೃದ್ಧಿಯನ್ನು ಗುರುತಿಸಿ ಸೂಚ್ಯಂಕ ನಿಗಧಿಪಡಿಸಲಿದೆ. ಬಳಿಕ ಸಮಿತಿಯು ಸರ್ಕಾರಕ್ಕೆ ವರದಿ ಸಲ್ಲಿಸುತ್ತದೆ. ಜಿಲ್ಲೆಯಲ್ಲಿ ಕೈಗಾರಿಕಾ ಅಭಿವೃದ್ಧಿ ಬಹಳ ಮುಖ್ಯವಾಗಿದೆ. ಇಲ್ಲಿನ ಯುವಕರಿಗೆ ಉದ್ಯೋಗ ದೊರೆಯುವಂತೆ ಮಾಡುವುದು ಹಾಗೂ ವಲಸೆ ಹೋಗುವುದನ್ನು ಕಡಿಮೆ ಮಾಡುವುದು ಬಹಳ ಮುಖ್ಯವಾಗಿದೆ ಹಾಗೂ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗಿದೆ ಎಂದು ತಿಳಿಸಿದರು.

ಕೂಡ್ಲಿಗಿ ಶಾಸಕ ಡಾ.ಎನ್.ಟಿ. ಶ್ರೀನಿವಾಸ್ ಮಾತನಾಡಿ, ಕೂಡ್ಲಿಗಿ ಕ್ಷೇತ್ರದಲ್ಲಿ ಹಿಂದುಳಿದವರು, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಶಾಲೆಗಳಲ್ಲಿ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಅಗತ್ಯ ನುರಿತ ಶಿಕ್ಷಕರ ನೇಮಕವಾಗಬೇಕಿದೆ. ಯುವಕ, ಯುವತಿಯರಿಗೆ ಕೌಶಲ್ಯ ಅಭಿವೃದ್ದಿ ತರಬೇತಿಗಳು ಹೆಚ್ಚಿಸುವ ಮೂಲಕ ಸ್ಥಳೀಯರಿಗೆ ಉದ್ಯೋಗಾವಕಾಶಗಳನ್ನು ನೀಡಬೇಕಿದೆ. ಪ್ರವಾಸಿ ತಾಣ, ಧಾರ್ಮಿಕ ಕ್ಷೇತ್ರಗಳು, ಅರಣ್ಯಧಾಮಗಳಿರುವುದರಿಂದ ಪ್ರವಾಸೋದ್ಯಮ ಅಭಿವೃದ್ದಿಗೆ ಆದ್ಯತೆ ನೀಡಬೇಕಿದೆ ಎಂದರು.

ಹರಪನಹಳ್ಳಿ ಶಾಸಕಿ ಎಂ.ಪಿ. ಲತಾ ಮಾತನಾಡಿ, ಉದ್ಯೋಗಕ್ಕಾಗಿ ಬೇರೆ ಕಡೆ ಸ್ಥಳೀಯರು ಹೋಗುವುದನ್ನು ತಡೆಯಬೇಕಿದೆ. ನಗರದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಹೆಚ್ಚಾಗಿದೆ. ನಮ್ಮಲ್ಲಿ 38 ತಾಂಡಾಗಳಿವೆ. ತಾಂಡಾಗಳ ಅಭಿವೃದ್ದಿಯಾಗಬೇಕು. ಶೈಕ್ಷಣಿಕ ಕ್ಷೇತ್ರಕ್ಕೆ ಹೆಚ್ಚಿನ ಅದ್ಯತೆ ನೀಡಬೇಕು. ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಇದ್ದು, ಪರಿಹರಿಸಲು ಮುಂದಾಗಬೇಕು. ಉದ್ಯೋಗ ಸೃಷ್ಟಿ, ರೈತರಿಗೆ ನೆರವು, ಆರೋಗ್ಯ ಕ್ಷೇತ್ರದ ಸುಧಾರಣೆಯಾಗಬೇಕಿದೆ ಎಂದು ಸಮಿತಿಯ ಗಮನಕ್ಕೆ ತಂದರು.

ಹೊಸಪೇಟೆ ಶಾಸಕ ಎಚ್.ಆರ್. ಗವಿಯಪ್ಪ ಮಾತನಾಡಿ, ಜಿಲ್ಲೆಯ ಅರ್ಥಿಕ ಅಭಿವೃದ್ದಿಗೆ ಪ್ರವಾಸೋದ್ಯಮದ ಬಹಳ ಮುಖ್ಯವಾಗಿದೆ. ಪ್ರವಾಸಿತಾಣ ಹಂಪಿ ಸೇರಿ ವಿವಿಧ ಕ್ಷೇತ್ರಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು. ಜಿಲ್ಲೆಯಲ್ಲಿ ಸಕ್ಕರೆ ಕಾರ್ಖಾನೆ ಸೇರಿ ವಿವಿಧ ಕಾರ್ಖಾನೆಗಳನ್ನು ಸ್ಥಾಪಿಸಬೇಕಿದೆ. ರೈತರ ಬೆಳೆಗಳಿಗೆ ಬೆಂಬಲ ಬೆಲೆ, ಉದ್ಯೋಗ ಸೃಷ್ಟಿ, ನೀರಾವರಿಗೆ ಗಮನಹರಿಸಬೇಕಿದೆ. ಜಿಲ್ಲಾ ಕೇಂದ್ರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು, ವೈದಕೀಯ ಕಾಲೇಜು, ಸಣ್ಣ ಉದ್ಯಮಗಳಿಗೂ ಹೆಚ್ಚಿನ ಉತ್ತೇಜನ ನೀಡಬೇಕು. ಶಿಕ್ಷಣ ಸಂಸ್ಥೆಗಳಿಗೆ ಮೂಲ ಸೌಕರ್ಯ, ವಿದ್ಯಾರ್ಥಿಗಳಿಗೆ ಕ್ರೀಡಾ ಕ್ಷೇತ್ರದಲ್ಲಿ ಪ್ರೋತ್ಸಾಹ, ಕೃಷಿ ಆಧಾರಿತ ಕೈಗಾರಿಕೆಗಳು, ರೇಷ್ಮೆ ಅಭಿವೃದ್ದಿ ಪುನಶ್ಚೇತನ ಕಾರ್ಯಗಳಲ್ಲಿ ಪ್ರಗತಿ ಸಾಧಿಸಬೇಕಿದೆ ಎಂದರು.

ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್, ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಸದಸ್ಯರಾದ ಪ್ರೊ.ಡಾ.ಎಸ್.ಟಿ.ಬಾಗಲಕೋಟೆ, ಡಾ.ಸಂಗೀತಾ ಕಟ್ಟಿ ಇದ್ದರು. ಕೃಷಿ ಇಲಾಖೆ ಜಂಟಿ ನಿರ್ದೇಶಕ ಶರಣಪ್ಪ ಮುದಗಲ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಚಿದಾನಂದ್ ಪೂಜಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಶ್ವೇತಾ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಎಲ್‌.ಆರ್‌. ಶಂಕರ ನಾಯ್ಕ, ಆರ್‌ಸಿಹೆಚ್ ಅಧಿಕಾರಿ ಡಾ. ಬಿ. ಜಂಬಯ್ಯ, ಡಿಡಿಪಿಐ ವೆಂಕಟೇಶ್ ರಾಮಚಂದ್ರಪ್ಪ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಎಚ್.ವಿ.ಮಂಜುನಾಥ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ