ಬೈಕ್ ರ‍್ಯಾಲಿಗೆ ಕೆ.ಲಕ್ಷ್ಮಿಪ್ರಿಯಾ ಚಾಲನೆ
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂದರ್ಭದಲ್ಲಿ ಜಿಲ್ಲೆಯ ಯಾವುದೇ ಅರ್ಹ ಮತದಾರರು ಪ್ರಕ್ರಿಯೆಯಿಂದ ಹೊರ ಉಳಿಯದಂತೆ ಎಚ್ಚರ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಹೇಳಿದರು.
ಸೋಮವಾರ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಜಾಗೃತಿ ಮೂಡಿಸಲು ಆಯೋಜಿಸಿದ್ದ ಬೈಕ್ ರ‍್ಯಾಲಿಗೆ ಚಾಲನೆ ನೀಡಿ ಮಾತನಾಡಿದರು.ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಜಿಲ್ಲೆಯಲ್ಲಿ ಮಂಗಳವಾರದಿಂದ ಪ್ರಾರಂಭವಾಗಲಿದ್ದು, ಈಗಾಗಲೇ ಈ ಕಾರ್ಯಕ್ಕೆ ನಿಯೋಜನೆಗೊಂಡ ಅಧಿಕಾರಿ ಸಿಬ್ಬಂದಿಗೆ ಸಮಗ್ರ ತರಬೇತಿ ನೀಡಲಾಗಿದೆ. ಮತಗಟ್ಟೆ ಅಧಿಕಾರಿಗಳು ಮನೆ-ಮನೆಗೆ ಭೇಟಿ ನೀಡಿ ಮತದಾರರಿಗೆ ಪ್ರಿ ಫಿಲ್ಡ್ ಎನ್ಯೂಮರೇಷನ್ ಫಾರ್ಮ್ ನೀಡಲಿದ್ದು, ಇದನ್ನು ಭರ್ತಿ ಮಾಡಿ ಅವರಿಗೆ ಮರಳಿ ನೀಡಬೇಕು ಎಂದರು.
ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಜಿಪಂ ಮುಖ್ಯ ಯೋಜನಾಧಿಕಾರಿ ಸೋಮಶೇಖರ ಮೇಸ್ತಾ, ಯೋಜನಾ ನಿರ್ದೇಶಕ ಕರೀಂ ಅಸಾದಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಹೀರ್ ಅಬ್ಬಾಸ್ ಮತ್ತಿತರರು ಇದ್ದರು.
ಸುರಿಯುತ್ತಿದ್ದ ಮಳೆಯನ್ನೂ ಲೆಕ್ಕಿಸದೇ ಬೈಕ್ ಜಾಥಾದಲ್ಲಿ ಭಾಗವಹಿಸಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಭಿತ್ತಿ ಫಲಕಗಳನ್ನು ಪ್ರದರ್ಶಿಸಿದರು.