ಫೆ.24ಕ್ಕೆ ಕೊಳಚೆ ನಿವಾಸಿಗಳಿಗಾಗಿ ಬೆಂಗಳೂರಲ್ಲಿ ಪ್ರತಿಭಟನೆ
ಸ್ಲಂ ಜನರ ಸಾಮಾಜಿಕ ಮತ್ತು ಅಭಿವೃದ್ಧಿ ತಾರತಮ್ಯ ವಿರೋಧಿಸಿ ಸ್ಲಂ ಜನಾಂದೋಲನ ಕರ್ನಾಟಕ, ಸಾವಿತ್ರಿ ಬಾಫುಲೆ ಮಹಿಳಾ ಸಂಘಟನೆ ವತಿಯಿಂದ ಫೆ.24ರಂದು ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜನಾಂದೋಲನ ಗೌರವಾಧ್ಯಕ್ಷ ಎಸ್.ಎಲ್.ಆನಂದಪ್ಪ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸ್ಲಂ ಜನಾಂದೋಲನ ಕರ್ನಾಟಕ ಮತ್ತು ಸಾವಿತ್ರಿ ಬಾಫುಲೆ ಮಹಿಳಾ ಸಂಘಟನೆಯಿಂದ ಸ್ಲಂ ಜನರ ಮೇಲಿನ ಸಾಮಾಜಿಕ ಮತ್ತು ಅಭಿವೃದ್ಧಿ ತಾರತಮ್ಯ ವಿರೋಧಿಸಲಾಗುವುದು. ಖಾಸಗಿ ಮಾಲೀಕತ್ವದ ಕೊಳಚೆ ಪ್ರದೇಶಗಳ ಘೋಷಣೆಗೆ ತೊಡಕಾಗಿರುವ ಸಂವಿಧಾನ ವಿರೋಧಿ ವಸತಿ ಇಲಾಖೆ ಸುತ್ತೋಲೆಯನ್ನು ತಕ್ಷಣ ಹಿಂಪಡೆಯಲು ಆಗ್ರಹಿಸಲಾಗುವುದು ಎಂದರು.2025-26ನೇ ಸಾಲಿನ ಬಜೆಟ್‌ನಲ್ಲಿ ಸ್ಲಂ ಜನರ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ನಲ್ಲಿ ಪಾಲು, 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೀಡಿರುವ ಪ್ರಣಾಳಿಕೆ ಭರವಸೆಗಳನ್ನು ಈಡೇರಿಸಲು ಒತ್ತಾಯಿಸಲಾಗುವುದು. ಸ್ಲಂ ಜನರಿಗೆ ಪ್ರತ್ಯೇಕ ಸಚಿವಾಲಯ ಮತ್ತು ನಗರ ಉದ್ಯೋಗ ಖಾತ್ರಿ ಯೋಜನೆ ಘೋಷಣೆ ಸೇರಿದಂತೆ ನಿವೇಶನ ರಹಿತರಿಗೆ ವಸತಿ ಕಲ್ಪಿಸುವ ಲ್ಯಾಂಡ್ ಬ್ಯಾಂಕ್ ಯೋಜನೆ ಜಾರಿಗೊಳಿಸುವುದು ಸೇರಿದಂತೆ ವಿವಿಧ ಹಕ್ಕೊತ್ತಾಯಗಳ ಈಡೇರಿಕೆಗೆ ಆಗ್ರಹಿಸಿ, ಪ್ರತಿಭಟನೆ ನಡೆಸಲಾಗುತ್ತಿದೆ ಎಂದರು.
ಶಬ್ಬೀರ್ ಸಾಬ್, ಜಂಶಿದಾ ಬಾನು, ಬೀಬಿಜಾನ್, ಮಂಜುಳ, ಗೀತಮ್ಮ, ರೇಣುಕ ಎಲ್ಲಮ್ಮ ಇದ್ದರು.