ಕಾರವಾರ: ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಪೋಕ್ಸೊ ಪ್ರಕರಣಗಳಲ್ಲಿ ಹೆಚ್ಚಳ ಕಂಡುಬರುತ್ತಿರುವುದು ಕಳವಳಕಾರಿಯಾಗಿದ್ದು, ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆಗಳು ಹೆಚ್ಚಿನ ನಿಗಾ ವಹಿಸಬೇಕಾಗಿರುವುದು ಅತಿ ಅವಶ್ಯಕವಾಗಿದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದರು.
ಜಿಲ್ಲೆಯಲ್ಲಿ 2024ರ ಜನವರಿಯಿಂದ ಮೇವರೆಗೆ ಸಖಿ ಒನ್ ಸ್ಟಾಪ್ ಸೆಂಟರ್‌ನಲ್ಲಿ 18 ಪೋಕ್ಸೊ ಪ್ರಕರಣಗಳು ದಾಖಲಾಗಿರುವ ಬಗ್ಗೆ ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಹೆಚ್ಚಿನ ಪೋಕ್ಸೊ ಪ್ರಕರಣಗಳಲ್ಲಿ ಮಕ್ಕಳಿಗೆ ಪರಿಚಯದ ಮತ್ತು ಅತ್ಯಂತ ಸಮೀಪದ ವ್ಯಕ್ತಿಗಳಿಂದಲೇ ದೌರ್ಜನ್ಯ ನಡೆದಿರುವುದು ಕಂಡುಬರುತ್ತದೆ. ಅಲ್ಲದೇ ಬಾಲ್ಯವಿವಾಹ ಮತ್ತು ಪ್ರೇಮ ಪ್ರಕರಣಗಳಿಂದಲೂ ದೌರ್ಜನ್ಯಗಳು ನಡೆದಿರುವ ಸಾಧ್ಯತೆಗಳಿವೆ. ಆದ್ದರಿಂದ ಜಿಲ್ಲೆಯಲ್ಲಿ ಶಾಲೆಗಳಲ್ಲಿ ಮಕ್ಕಳಿಗೆ ಸೂಕ್ತ ಅರಿವು ಕಾರ್ಯಕ್ರಮಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಯೋಜಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಂ., ಡಿವೈಎಸ್ಪಿ ಗಿರೀಶ್, ಜಿಪಂ ಉಪಕಾರ್ಯದರ್ಶಿ ನಾಗೇಶ್ ರಾಯ್ಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಎಚ್.ಎಚ್. ಕುಕನೂರು, ಡಿಡಿಪಿಐ ಲತಾ ನಾಯಕ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.