ದಾಂಡೇಲಿ: ದಾಂಡೇಲಿ ಬ್ಯಾಡ್ಮಿಂಟನ್ ಅಸೋಸಿಯೇಷನ್ ವತಿಯಿಂದ ಸುಭಾಷನಗರದ ಒಳ ಕ್ರೀಡಾಂಗಣದಲ್ಲಿ ವಿಭಾಗೀಯ ಮಟ್ಟದ ‘ರೈಸಿಂಗ್ ಸ್ಟಾರ್ಸ್ ಬ್ಯಾಡ್ಮಿಂಟನ್ ಕಪ್- 2026’ ಪಂದ್ಯಾವಳಿಗೆ ಭಾನುವಾರ ಚಾಲನೆ ನೀಡಲಾಯಿತು.ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಸಿಪಿಐ ಶಿವಾನಂದ ಅಂಬಿಗೇರ ಅವರು, ಕ್ರೀಡೆ ಮಕ್ಕಳಲ್ಲಿ ಶಿಸ್ತು, ಆತ್ಮವಿಶ್ವಾಸ ಹಾಗೂ ಸೋಲು- ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸುತ್ತದೆ. ಇಂತಹ ಪಂದ್ಯಾವಳಿಗಳು ಗ್ರಾಮೀಣ ಹಾಗೂ ಸಣ್ಣ ಪಟ್ಟಣಗಳ ಪ್ರತಿಭೆಗಳಿಗೆ ದೊಡ್ಡ ವೇದಿಕೆ ಕಲ್ಪಿಸುತ್ತವೆ. ಕ್ರೀಡಾಪಟುಗಳು ಕ್ರೀಡಾ ಮನೋಭಾವದಿಂದ ಆಡಬೇಕು ಎಂದರು.ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಅನಿಲ್ ಕುಮಾರ್ ನಾಯ್ಕ ಮಾತನಾಡಿ, ಇಂದಿನ ಮಕ್ಕಳು ಮೊಬೈಲ್ಗೆ ಅಂಟಿಕೊಳ್ಳದೆ ಮೈದಾನಕ್ಕೆ ಬರಬೇಕು. ಬ್ಯಾಡ್ಮಿಂಟನ್ನಂತಹ ಕ್ರೀಡೆ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದರು.
ದಾಂಡೇಲಿ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ನವೀನ ಕಾಮತ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ದಾಂಡೇಲಿ ಬ್ಯಾಡ್ಮಿಂಟನ್ ಅಸೋಸಿಯೇಷನ್ ಉಪಾಧ್ಯಕ್ಷ ದೀಪಕ ನಾಯಕ ಉಪಸ್ಥಿತರಿದ್ದರು.ದಾಂಡೇಲಿ ಬ್ಯಾಡ್ಮಿಂಟನ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಗುರು ಮಠಪತಿ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ವಿನೋದ ಬಾಂದೇಕರ ವಂದಿಸಿದರು. ಸುರೇಶ ಕಾಮತ್ ಕಾರ್ಯಕ್ರಮವನ್ನು ನಿರೂಪಿಸಿದರು. ಉತ್ತರಕನ್ನಡ, ಹುಬ್ಬಳ್ಳಿ ಹಾಗೂ ಬೆಳಗಾವಿ ವಿಭಾಗಗಳಿಂದ ಆಗಮಿಸಿದ್ದ ಕ್ರೀಡಾಪಟುಗಳು ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದಾರೆ.