ಶಾಲಾ ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ ನೀಡಲು ರಿತೇಶ್ ಕುಮಾರ್ ಸಿಂಗ್ ಸೂಚನೆ

KannadaprabhaNewsNetwork | Published : Oct 17, 2024 12:07 AM

ಸಾರಾಂಶ

ಜಿಲ್ಲೆಯ ಎಲ್ಲ ಶಾಲೆಗಳಲ್ಲಿ ಸರ್ಕಾರದ ನಿರ್ದೇಶನದಂತೆ ವಾರದ 6 ದಿನವೂ ಮಕ್ಕಳಿಗೆ ಮೊಟ್ಟೆ ನೀಡುವ ಕಾರ್ಯಕ್ರಮದಲ್ಲಿ ಯಾವುದೇ ಲೋಪಗಳಾಗದಂತೆ ಎಚ್ಚರ ವಹಿಸಬೇಕು.

ಕಾರವಾರ: ಜಿಲ್ಲೆಯ ಎಲ್ಲ ಅಂಗನವಾಡಿ ಮತ್ತು ಶಾಲೆಗಳಲ್ಲಿ ಶಿಥಿಲಗೊಂಡಿರುವ ಕೊಠಡಿಗಳನ್ನು ಪರಿಶೀಲಿಸಿ, ಅವುಗಳನ್ನು ದುರಸ್ತಿಗೊಳಿಸುವ ಅಥವಾ ಹೊಸದಾಗಿ ನಿರ್ಮಿಸುವ ಮೂಲಕ ಮಕ್ಕಳ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುವಂತೆ ಶಿಕ್ಷಣ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆಯ ಅಧಿಕಾರಿಗಳಿಗೆ ಜಿಪಂ ಆಡಳಿತಾಧಿಕಾರಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಸೂಚಿಸಿದರು.ಇಲ್ಲಿನ ಜಿಪಂ ಸಭಾಂಗಣದಲ್ಲಿ ಬುಧವಾರ ನಡೆದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯ ಎಲ್ಲ ಶಾಲೆಗಳಲ್ಲಿ ಸರ್ಕಾರದ ನಿರ್ದೇಶನದಂತೆ ವಾರದ 6 ದಿನವೂ ಮಕ್ಕಳಿಗೆ ಮೊಟ್ಟೆ ನೀಡುವ ಕಾರ್ಯಕ್ರಮದಲ್ಲಿ ಯಾವುದೇ ಲೋಪಗಳಾಗದಂತೆ ಎಚ್ಚರ ವಹಿಸಬೇಕು. ಶಾಲೆ ಮತ್ತು ಅಂಗನವಾಡಿಗಳ ಕೊಠಡಿಗಳನ್ನು ಪರಿಶೀಲಿಸಿ ಅಗತ್ಯ ದುರಸ್ತಿ ಕಾರ್ಯಗಳನ್ನು ಅಥವಾ ನೂತನ ಕೊಠಡಿ ನಿರ್ಮಾಣ ಮಾಡುವ ಮೂಲಕ ಮಕ್ಕಳ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು ಎಂದ ಅವರು, ವಿವೇಕ ಶಾಲಾ ಕೊಠಡಿ ನಿರ್ಮಾಣ ಯೋಜನೆಯಲ್ಲಿ ಕೈಗೊಂಡಿರುವ ಕಟ್ಟಡ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಕ್ತಾಯಗೊಳಿಸಬೇಕು ಎಂದು ಸೂಚಿಸಿದರು.

ಎಲ್ಲ ವಸತಿನಿಲಯಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವಂತೆ ಹಾಗೂ ಆಹಾರ ಸಾಮಗ್ರಿಗಳ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ನೋಡಿಕೊಳ್ಳುವ ಮೂಲಕ ಮತ್ತು ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಮೂಲಕ ಅವರ ಶೈಕ್ಷಣಿಕ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದರು.

ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಕಲುಷಿತಗೊಳ್ಳದಂತೆ ಎಚ್ಚರ ವಹಿಸಬೆಕು. ಶುದ್ಧ ನೀರು ಸರಬರಾಜು ಆಗುತ್ತಿರುವ ಕುರಿತು ಆಗಾಗ ಪರಿಶೀಲನೆ ನಡೆಸುವಂತೆ ಮತ್ತು ಶುದ್ಧ ಕುಡಿಯುವ ನೀರು ಸರಬರಾಜು ಸಂಬಂಧಿತ ಕೈಗೊಂಡಿರುವ ಕಾಮಗಾರಿಗಳನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸುವಂತೆ ನೀರು ನೈರ್ಮಲ್ಯ ವಿಭಾಗದ ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲೆಯ ಯುವಕರಿಗೆ ನೌಕಾನಲೆ ವ್ಯಾಪ್ತಿಯಲ್ಲಿನ ವಿವಿಧ ಕೈಗಾರಿಕೆಗಳಲ್ಲಿ ಉದ್ಯೋಗವಕಾಶ ಒದಗಿಸುವ ನಿಟ್ಟಿನಲ್ಲಿ ಅಗತ್ಯವಿರುವ, ಕೌಶಲ್ಯ ಮತ್ತು ತಾಂತ್ರಿಕ ವಿದ್ಯಾರ್ಹತೆಯ ಹೊಸ ಕೋರ್ಸ್‌ಗಳನ್ನು ಕೈಗಾರಿಕಾ ತರಬೇತಿ ಕೇಂದ್ರ ಮತ್ತು ಜಿಟಿಟಿಸಿಯಲ್ಲಿ ಆರಂಭಿಸುವ ಅವಶ್ಯಕತೆಯಿರುವ ಬಗ್ಗೆ ಪರಿಶೀಲಿಸಿ ವರದಿ ನೀಡುವಂತೆ ತಿಳಿಸಿದರು.ಜಿಪಂನ ಅನಿರ್ಬಂಧಿತ ಅನುದಾನದಡಿ ಸಿದ್ಧಪಡಿಸಲಾದ ₹3.95 ಕೋಟಿ ಮೊತ್ತದ ವಿವಿಧ ಕಾಮಗಾರಿಗಳಿಗೆ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರಕುಮಾರ ಕಾಂದೂ ಹಾಗೂ ಅಧಿಕಾರಿಗಳು ಇದ್ದರು.

ಸರ್ಕಾರಿ ಶಾಲೆಗಳಲ್ಲಿ ಫೇಶಿಯಲ್ ರೆಕಗ್ನೇಶನ್ ಹಾಜರಾತಿಗೆ ಚಿಂತನೆ

ಕಾರವಾರ: ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿಯನ್ನು ಮೊಬೈಲ್‌ನಲ್ಲಿ ಫೇಶಿಯಲ್ ರೆಕಗ್ನೇಶನ್ ಮೂಲಕ ಪಡೆದುಕೊಳ್ಳುವ ವಿಧಾನವನ್ನು ಅಳವಡಿಸುವ ಚಿಂತನೆ ನಡೆದಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ತಿಳಿಸಿದರು.ಇಲ್ಲಿನ ಜಿಪಂ ಸಭಾಂಗಣದಲ್ಲಿ ಬುಧವಾರ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಈಗಾಗಲೇ ಪ್ರತಿ ಜಿಲ್ಲೆಯಲ್ಲೂ ಆಯ್ದ ಶಾಲೆಗಳಲ್ಲಿ ಪೈಲಟ್ ಯೋಜನೆಯಾಗಿ ಮಕ್ಕಳ ಹಾಜರಾತಿಯನ್ನು ಮುಖ್ಯ ಶಿಕ್ಷಕರು ಮತ್ತು ಶಿಕ್ಷಕರ ಮೊಬೈಲ್‌ನಲ್ಲಿ ಫೇಶಿಯಲ್ ರೆಕಗ್ನೇಶನ್ ಮೂಲಕ ಪಡೆದುಕೊಂಡಿದ್ದ ಯೋಜನೆಯು ಯಶಸ್ವಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಪೈಲಟ್ ಆಗಿ ಅಳವಡಿಸಿದ್ದ ಶಾಲೆಗಳಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಈ ವ್ಯವಸ್ಥೆಯಿಂದ ಯಾವುದೇ ಸಮಸ್ಯೆಯಿಲ್ಲವೆಂದು ತಿಳಿಸಿದ್ದು, ಈ ವ್ಯವಸ್ಥೆಯನ್ನು ರಾಜ್ಯಾದ್ಯಂತ ವಿಸ್ತರಿಸುವ ಚಿಂತನೆಯಿದೆ ಎಂದರು.ಈ ವ್ಯವಸ್ಥೆಯಿಂದ ರಾಜ್ಯದ ಪ್ರತಿ ಶಾಲೆಗಳಲ್ಲಿ ಪ್ರತಿ ದಿನದ ವಿದ್ಯಾರ್ಥಿಗಳ ನಿಖರ ಹಾಜರಾತಿ ಮತ್ತು ಗೈರು ಹಾಜರಾದ ವಿವರ ದೊರೆಯಲಿದ್ದು, ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ರೂಪಿಸಿರುವ ಅನೇಕ ಯೋಜನೆಗಳ ಅನುಷ್ಠಾನದಲ್ಲಿ ಸಂಪೂರ್ಣ ಪಾರದರ್ಶಕತೆ ಬರಲಿದೆ ಎಂದರು.

Share this article