ಬಸ್‌ಗಳ ನಿಲುಗಡೆಗೆ ಒತ್ತಾಯಿಸಿ ಮುಗುಳುವಳ್ಳಿಯಲ್ಲಿ ರಸ್ತೆ ತಡೆ

KannadaprabhaNewsNetwork | Published : Jul 1, 2025 12:47 AM

ಚಿಕ್ಕಮಗಳೂರುಸರ್ಕಾರಿ ಬಸ್ ನಿಲುಗಡೆ ಮಾಡುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ಪ್ರತಿದಿನ ಕೆಲಸಕ್ಕಾಗಿ ವಿವಿಧ ಊರುಗಳಿಗೆ ತೆರಳುವವರು ಸಮಸ್ಯೆ ಎದುರಿಸುವಂತಾಗಿದೆ ಎಂದು ಆರೋಪಿಸಿ ಸಾರ್ವಜನಿಕರು ಮುಗುಳುವಳ್ಳಿ ಗ್ರಾಮದಲ್ಲಿ ಸೋಮವಾರ ರಸ್ತೆ ತಡೆ ನಡೆಸಿದರು.

ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ತೊಂದ್ರೆ,

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಸರ್ಕಾರಿ ಬಸ್ ನಿಲುಗಡೆ ಮಾಡುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ಪ್ರತಿದಿನ ಕೆಲಸಕ್ಕಾಗಿ ವಿವಿಧ ಊರುಗಳಿಗೆ ತೆರಳುವವರು ಸಮಸ್ಯೆ ಎದುರಿಸುವಂತಾಗಿದೆ ಎಂದು ಆರೋಪಿಸಿ ಸಾರ್ವಜನಿಕರು ಮುಗುಳುವಳ್ಳಿ ಗ್ರಾಮದಲ್ಲಿ ಸೋಮವಾರ ರಸ್ತೆ ತಡೆ ನಡೆಸಿದರು.

ಬೆಳಗ್ಗೆಯೇ ಹೆದ್ದಾರಿ ತಡೆದು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪ್ರತಿಭಟನೆ ಆರಂಭಿಸಿದ್ದರಿಂದ ಕಿಲೋ ಮೀಟರ್‌ ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಮುಗುಳುವಳ್ಳಿ ಭಾಗದಿಂದ ಪ್ರತಿದಿನ ಮುನ್ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಬಸ್‌ಗಳನ್ನು ಅವಲಂಭಿಸಿ ಶಾಲಾ ಕಾಲೇಜುಗಳಿಗೆ ತೆರಳುತ್ತಾರೆ. ಆದರೆ ಒಂಭತ್ತು ಗಂಟೆಗೆ ಬರುವ ಬಸ್ ಸಮಯಕ್ಕೆ ಸರಿಯಾಗಿ ಬರುತ್ತಿಲ್ಲ. ಜೊತೆಗೆ ವೇಗದೂತ ಸೇರಿದಂತೆ ಇತರೆ ಬಸ್‌ಗಳು ಮುಗುಳುವಳ್ಳಿಯಲ್ಲಿ ನಿಲುಗಡೆ ನೀಡುತ್ತಿಲ್ಲ. ಹೀಗಾಗಿ ಪ್ರತಿದಿನವೂ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಶಾಲಾ ಕಾಲೇಜುಗಳಿಗೆ ತೆರಳಲು ಸಾಧ್ಯವಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಿಂದೆ ಕೆಎಸ್‌ಆರ್‌ಟಿಸಿ ಚಿಕ್ಕಮಗಳೂರು ಉಪ ವಿಭಾಗೀಯ ನಿಯಂತ್ರಣಾಧಿಕಾರಿಗೆ ಮುಗುಳುವಳ್ಳಿ ಗೇಟ್ ಬಳಿ ಬಸ್ ನಿಲ್ಲಿಸಬೇಕು ಎಂದು ಮನವಿ ಸಲ್ಲಿಸಿದ್ದೆವು. ಅದರಂತೆ ಅವರು ಬಸ್ ನಿಲುಗಡೆ ಮಾಡುವಂತೆ ಆದೇಶ ಹೊರಡಿಸಿದ್ದರು. ಆದರೆ ಯಾವುದೇ ಬಸ್‌ಗಳು ನಿಲ್ಲಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮುಗುಳುವಳ್ಳಿಯಲ್ಲಿ ನಿಲ್ಲಿಸದ ಬಸ್‌ಗಳು ಮಾಗಡಿ ಹ್ಯಾಂಡ್ ಪೋಸ್ಟ್ ಇಲ್ಲವೇ ಹಿರೇಮಗಳೂರಿನಲ್ಲಿ ನಿಲ್ಲಿಸಲಾಗುತ್ತಿದೆ. ಹೀಗಾಗಿ ಮುಗುಳುವಳ್ಳಿ ಸೇರಿದಂತೆ ಸುತ್ತಮುತ್ತಲಿನ ಹತ್ತಾರು ಗ್ರಾಮಗಳ ಜನ ನಾಲ್ಕಾರು ಕಿ.ಮೀ. ನಡೆಯುವ ಅನಿವಾರ್ಯತೆ ಎದುರಾಗಿದೆ. ಹೀಗಾಗಿ ಕೂಡಲೇ ಮುಗುಳುವಳ್ಳಿಯಲ್ಲಿ ಬಸ್ ನಿಲುಗಡೆಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸರ್ಕಾರವೇನೋ ಶಕ್ತಿ ಯೋಜನೆ ಅನುಷ್ಠಾನಗೊಳಿಸಿದೆ. ಆದರೆ ಇಲ್ಲಿ ಸರ್ಕಾರಿ ಬಸ್‌ಗಳನ್ನು ನಿಲ್ಲಿಸುವುದೇ ಇಲ್ಲ. ಇದರಿಂದ ಈ ಭಾಗದ ಮಹಿಳೆಯರು ಶಕ್ತಿ ಯೋಜನೆ ಪ್ರಯೋಜನ ಪಡೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಬಸ್ ನಿಲುಗಡೆ ಬಗ್ಗೆ ಶಾಸಕರು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ರಸ್ತೆ ತಡೆ ನಡೆಯುತ್ತಿದ್ದ ಸ್ಥಳಕ್ಕೆ ತಹಸೀಲ್ದಾರ್ ರೇಷ್ಮಾ ಶೆಟ್ಟಿ ಸೇರಿದಂತೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಆಗಮಿಸಿ ಜನರ ಅಹವಾಲು ಆಲಿಸಿ ಕೂಡಲೇ ಬಸ್ ನಿಲುಗಡೆ ಮಾಡಲು ಕ್ರಮ ಕೈಗೊಳ್ಳುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು.

ಪ್ರತಿಭಟನೆಯಲ್ಲಿ ರೈತ ಮುಖಂಡ ಗುರುಶಾಂತಪ್ಪ, ಗ್ರಾಪಂ ಮಾಜಿ ಅಧ್ಯಕ್ಷ ರಘುನಂದನ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಪರಮೇಶ್ವರಪ್ಪ, ಬಿಜೆಪಿ ಮುಖಂಡ ದಿನೇಶ್ ಮುಗುಳುವಳ್ಳಿ, ಗ್ರಾಪಂ ಸದಸ್ಯೆ ನಳಿನಾಕ್ಷಿ ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು. 30 ಕೆಸಿಕೆಎಂ 1ಚಿಕ್ಕಮಗಳೂರು ತಾಲೂಕಿನ ಮುಗುಳುವಳ್ಳಿಯಲ್ಲಿ ಹೆದ್ದಾರಿ ತಡೆ ನಡೆಸಿದ ಸಾರ್ವಜನಿಕರು ತಮ್ಮ ಊರಿನಲ್ಲಿ ಸರ್ಕಾರಿ ಬಸ್ ನಿಲುಗಡೆಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ರಘುನಂದನ್, ಗುರುಶಾಂತಪ್ಪ, ಪರಮೇಶ್ವರಪ್ಪ, ದಿನೇಶ್, ನಳಿನಾಕ್ಷಿ ಇದ್ದರು.