ಕನ್ನಡಪ್ರಭ ವಾರ್ತೆ ಮಡಿಕೇರಿ
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಿದ ಸಚಿವರು ಕೊಡಗು ಜಿಲ್ಲೆಯಲ್ಲಿ ಸುರಿದ ಹೆಚ್ಚಿನ ಮಳೆಗೆ ರಸ್ತೆಗಳು ಗುಂಡಿಮಯವಾಗಿದ್ದು, ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು, ಕೂಡಲೇ ರಸ್ತೆ ಗುಂಡಿ ಮುಚ್ಚುವಂತೆ ಎಂಜಿನಿಯರ್ ಗಳಿಗೆ ತಾಕೀತು ಮಾಡಿದರು.
ಈ ಬಗ್ಗೆ ವಿಷಯ ಪ್ರಸ್ತಾಪಿಸಿದ ಶಾಸಕರಾದ ಡಾ.ಮಂತರ್ ಗೌಡ ಅವರು ಶನಿವಾರಸಂತೆ- ಕೊಡ್ಲಿಪೇಟೆ, ಕೂಡಿಗೆ-ಸೋಮವಾರಪೇಟೆ ಮಾರ್ಗದ ರಸ್ತೆಗಳು ಸೇರಿದಂತೆ ಹಲವು ರಸ್ತೆಗಳು ಗುಂಡಿ ಬಿದ್ದಿದ್ದು, ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಆದ್ದರಿಂದ ಕೂಡಲೇ ಗುಂಡಿ ಮುಚ್ಚಬೇಕು ಎಂದು ನಿರ್ದೇಶನ ನೀಡಿದರು.ಈ ಕುರಿತು ಮಾತನಾಡಿದ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಹೆಚ್ಚಿನ ಮಳೆಯಿಂದಾಗಿ ರಸ್ತೆಗಳು ಗುಂಡಿಯಾಗಿದ್ದು, ಇದನ್ನು ಸರಿಪಡಿಸುವ ಕೆಲಸ ಆಗಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಹೆಚ್ಚಿನ ಮಳೆಯಿಂದಾಗಿ ರಸ್ತೆ, ಸೇತುವೆ ಮತ್ತಿತರ ಹಾನಿಯ ಕಾಮಗಾರಿಗಳ ಸಂಬಂಧ ವರದಿ ನೀಡಿ, ಕಾಮಗಾರಿ ಕೈಗೊಳ್ಳ ಬಹುದಾಗಿದೆ. ಆ ನಿಟ್ಟಿನಲ್ಲಿ ಎಂಜಿನಿಯರ್ ಗಳು ತಕ್ಷಣ ಕ್ರಮವಹಿಸಬೇಕು ಎಂದರು.
ಅತಿವೃಷ್ಟಿಯಿಂದಾಗಿ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ರಸ್ತೆ, ಸೇತುವೆ ಹಾಗೂ ಕಟ್ಟಡಗಳು ಸೇರಿದಂತೆ ಸುಮಾರು 76 ಕೋಟಿ ರು. ಗೂ ಹೆಚ್ಚಿನ ನಷ್ಟವಾಗಿದೆ ಎಂದು ಸಿದ್ದೇಗೌಡ ಅವರು ಮಾಹಿತಿ ನೀಡಿದರು.
ಹಾಗೆಯೇ ಸೆಸ್ಕ್ ವಿಭಾಗ ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಿಂದಾಗಿ ವಿದ್ಯುತ್ ಕಂಬಗಳು, ಪರಿವರ್ತಕಗಳು ಸೇರಿದಂತೆ ಸುಮಾರು 4 ಕೋಟಿ ರು. ಗೂ ಹೆಚ್ಚು ಹಾನಿಯಾಗಿದೆ ಎಂದು ಸೆಸ್ಕ್ ಇಇ ಅನಿತಾ ಬಾಯಿ ವಿವರಿಸಿದರು.
ಮಳೆಹಾನಿ ಕಾಮಗಾರಿಯನ್ನು ಎಂಜಿನಿಯರ್ ಗಳು ಗಂಭೀರವಾಗಿ ಪರಿಗಣಿಸಬೇಕು ಎಂದು ಸಚಿವರು ತಾಕೀತು ಮಾಡಿದರು.
ವಿವಿಧ ಇಲಾಖೆಯ ಎಂಜಿನಿಯರ್ ಗಳು ಕೆಲಸ ಮಾಡುವ ಬಗ್ಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ಬಂದಲ್ಲಿ ಸರ್ಕಾರಕ್ಕೆ ಒಳ್ಳೆಯ ಹೆಸರು ಬರಲಿದೆ. ಆ ದಿಸೆಯಲ್ಲಿ ಎಂಜಿನಿಯರ್ ಗಳು ಸೆಸ್ಕ್ ವಿಭಾಗದ ಸಿಬ್ಬಂದಿಗಳ ಮಾದರಿಯಲ್ಲಿ ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಭೋಸರಾಜು ಅವರು ಹೇಳಿದರು.
ಮನೆ ಹಾನಿಗೆ ಪರಿಹಾರ ವಿತರಣೆ, ಡೆಂಘಿ ನಿಯಂತ್ರಣ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಬಗ್ಗೆ ಸಚಿವರು ಮಾಹಿತಿ ಪಡೆದರು.
ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಹಾರಂಗಿ ವಿಭಾಗದ ಅಧೀಕ್ಷಕ ಎಂಜಿನಿಯರ್ ರಘುಪತಿ, ಇಇ ಪುಟ್ಟಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಕುಮಾರ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ. ವಿಶಾಲ್ ಕುಮಾರ್, ಜಿಲ್ಲಾ ಸರ್ಜನ್ ಡಾ. ನಂಜುಂಡಯ್ಯ, ಡಾ. ಶ್ರೀನಿವಾಸ, ತಹಸೀಲ್ದಾರರಾದ ಪ್ರವೀಣ್ ಕುಮಾರ್ ಇದ್ದರು.