ರಸ್ತೆ ಕಾಮಗಾರಿ ಅವೈಜ್ಞಾನಿಕ: ಎಸ್‌ಡಿಪಿಐ ಕಾರ್ಯಕರ್ತರ ಆಕ್ಷೇಪ

KannadaprabhaNewsNetwork |  
Published : Nov 29, 2026, 02:15 AM IST
ಕೊಪ್ಪಳ ನಗರದ ಶ್ರೀಶೈಲ ನಗರದಿಂದ ರಾಷ್ಟ್ರೀಯ ಹೆದ್ದಾರಿ 67ಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣ ಕಾಮಗಾರಿ ಅವೈಜ್ಞಾನಿಕವಾಗಿದೆ ಎಂದು ಆರೋಪಿಸಿ ಎಸ್‌ಡಿಪಿಐ ಕಾರ್ಯಕರ್ತರು ಕಾಮಗಾರಿಗೆ ತಡೆಯೊಡ್ಡಿ, ಆಕ್ರೋಶ ವ್ಯಕ್ತಪಡಿಸಿದರು. | Kannada Prabha

ಸಾರಾಂಶ

ಕೊಪ್ಪಳ ನಗರದ ಶ್ರೀಶೈಲ ನಗರದಿಂದ ರಾಷ್ಟ್ರೀಯ ಹೆದ್ದಾರಿ 67ಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣ ಕಾಮಗಾರಿ ಅವೈಜ್ಞಾನಿಕ ಹಾಗೂ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಆರೋಪಿಸಿ ಎಸ್‌ಡಿಪಿಐ ಕಾರ್ಯಕರ್ತರು ಕಾಮಗಾರಿಗೆ ತಡೆಯೊಡ್ಡಿ, ಆಕ್ರೋಶ ವ್ಯಕ್ತಪಡಿಸಿದರು.

ಕೊಪ್ಪಳ: ಕೊಪ್ಪಳ ನಗರದ ಶ್ರೀಶೈಲ ನಗರದಿಂದ ರಾಷ್ಟ್ರೀಯ ಹೆದ್ದಾರಿ 67ಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣ ಕಾಮಗಾರಿ ಅವೈಜ್ಞಾನಿಕ ಹಾಗೂ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಆರೋಪಿಸಿ, ಎರಡು ಚರಂಡಿಗಳನ್ನು ನಿರ್ಮಿಸುವಂತೆ ಆಗ್ರಹಿಸಿದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಕಾರ್ಯಕರ್ತರು ಕಾಮಗಾರಿಗೆ ತಡೆಯೊಡ್ಡಿ, ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ.

ಕೆಆರ್‌ಐಡಿಎಲ್ ವತಿಯಿಂದ ಆರಂಭಿಸಿರುವ ಈ ರಸ್ತೆ ಕಾಮಗಾರಿ ನಗರದ ಜನರಿಗೆ ಮಾತ್ರವಲ್ಲದೆ ಸುತ್ತಮುತ್ತಲಿನ 7ರಿಂದ 8 ಗ್ರಾಮಗಳ ಜನರಿಗೂ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿದೆ. ಆದರೆ, ರಸ್ತೆ ನಿರ್ಮಾಣದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸದೆ ಅವೈಜ್ಞಾನಿಕವಾಗಿ ಕಾಮಗಾರಿ ನಡೆಸಲಾಗುತ್ತಿದೆ. ರಸ್ತೆಯ ಎರಡೂ ಬದಿಗಳಲ್ಲಿ ಚರಂಡಿ ನಿರ್ಮಿಸಬೇಕು ಎಂಬುದು ಸ್ಥಳೀಯರ ಪ್ರಮುಖ ಬೇಡಿಕೆಯಾಗಿದೆ.

ಈ ಕುರಿತು ಆ. 15ರಂದು ಶಾಸಕ ಹಾಗೂ ಸಚಿವರಿಗೆ ಮುತ್ತಿಗೆ ಹಾಕಿ ರಸ್ತೆ ಅಭಿವೃದ್ಧಿಗೆ ಆಗ್ರಹಿಸಲಾಗಿತ್ತು. ಆದರೂ ಸಮಸ್ಯೆ ಪರಿಹಾರವಾಗದ ಹಿನ್ನೆಲೆಯಲ್ಲಿ ಮೂರು ದಿನಗಳ ಹಿಂದೆ ಎಸ್‌ಡಿಪಿಐ ಕಾರ್ಯಕರ್ತರು ಕಾಮಗಾರಿಗೆ ತಡೆಯೊಡ್ಡಿ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಕೊಪ್ಪಳ ನಗರ ಠಾಣೆ ಪೊಲೀಸರು, ಅಬ್ದುಲ್ ಖಾದರ್ ಪಿರಜಾದೆ ಸೇರಿದಂತೆ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ.

ಕಳಪೆ ಹಾಗೂ ಅವೈಜ್ಞಾನಿಕ ಕಾಮಗಾರಿಯನ್ನು ಪ್ರಶ್ನಿಸಿ ಜನರ ಪರವಾಗಿ ಧ್ವನಿ ಎತ್ತಿದ್ದಕ್ಕೆ ಪೊಲೀಸರ ಮೂಲಕ ದೌರ್ಜನ್ಯ ನಡೆಸಲಾಗುತ್ತಿದೆ ಎಂದು ಎಸ್‌ಡಿಪಿಐ ಮುಖಂಡರು ಆರೋಪಿಸಿದ್ದಾರೆ. ಅಲ್ಲದೆ, ಈ ಘಟನೆಯ ಹಿಂದೆ ಕಾಂಗ್ರೆಸ್ ಮುಖಂಡರ ಕೈವಾಡವಿದ್ದು, ನಗರಸಭೆ ಮಾಜಿ ಅಧ್ಯಕ್ಷ ಅಮ್ಜದ್ ಪಟೇಲ್, ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಹಾಗೂ ಸಂಸದ ರಾಜಶೇಖರ ಹಿಟ್ನಾಳ ಅವರ ಕುಮ್ಮಕ್ಕಿನಿಂದ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ ಎಂದು ದೂರಿದ್ದಾರೆ.

ಜನರಿಗೆ ಅನುಕೂಲವಾಗುವಂತೆ ಗುಣಮಟ್ಟದ ರಸ್ತೆ ನಿರ್ಮಿಸಬೇಕು ಮತ್ತು ಎರಡು ಬದಿಗಳಲ್ಲಿ ಚರಂಡಿ ವ್ಯವಸ್ಥೆ ಕಲ್ಪಿಸಬೇಕು. ಇಲ್ಲದಿದ್ದರೆ ಹೋರಾಟ ಮುಂದುವರಿಸುವ ಜತೆಗೆ ಕಾನೂನು ಹೋರಾಟ ನಡೆಸಲಾಗುವುದು ಎಂದು ಎಸ್‌ಡಿಪಿಐ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಕ್ಕರೆ ಕನಿಷ್ಠ ಮಾರಾಟ ಬೆಲೆ ಕೆ.ಜಿ.ಗೆ ₹60ಕ್ಕೆ ಹೆಚ್ಚಿಸಿ
ಸೈನಿಕ ಶಾಲೆ ಪ್ರವೇಶಾತಿಗೆ ಜ.31ರಂದು ಪರೀಕ್ಷೆ