ಕನ್ನಡಪ್ರಭ ವಾರ್ತೆ ಆಲೂರು
ಮಂಜೇಗೌಡ ಅವರಿಗೆ ಸೇರಿದ ಮನೆಯಲ್ಲಿ ಗುರುವಾರ ಮುಂಜಾನೆ ಸುಮಾರು 1.30ರ ವೇಳೆಗೆ ಈ ಘಟನೆ ನಡೆದಿದೆ. ಮನೆಯ ಹಿಂಬಾಗಿಲನ್ನು ಒಡೆದು ಒಳನುಗ್ಗಿದ ದುಷ್ಕರ್ಮಿಗಳು ಚಾಕು, ಮಚ್ಚು ಹಾಗೂ ಲಾಂಗ್ ತೋರಿಸಿ ಮನೆಯವರನ್ನು ಬೆದರಿಸಿದ್ದಾರೆ. ಬಳಿಕ ಮಂಜೇಗೌಡ ಹಾಗೂ ಅವರ ಪತ್ನಿಯನ್ನು ಒಂದು ಕೊಠಡಿಯಲ್ಲಿ ಕೂಡಿ ಹಾಕಿ, ಪತ್ನಿಯ ಕತ್ತಿನಲ್ಲಿದ್ದ ಮಾಂಗಲ್ಯ ಸರ ಮತ್ತು ಇತರ ಚಿನ್ನಾಭರಣಗಳನ್ನು ಕಿತ್ತುಕೊಂಡಿದ್ದಾರೆ. ನಂತರ ಮತ್ತೊಂದು ಕೊಠಡಿಯಲ್ಲಿ ಮಲಗಿದ್ದ ಪುತ್ರ ಯಶಸ್ ಅವರ ಬಳಿ ತೆರಳಿದ ಕಳ್ಳರು ಅವರ ಕೈಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿದ್ದಾರೆ. ಈ ವೇಳೆ ಪ್ರತಿರೋಧ ವ್ಯಕ್ತಪಡಿಸಿದಾಗ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ, ಅವರ ಕೈಯಲ್ಲಿದ್ದ ವಾಚ್, ಕತ್ತಿನಲ್ಲಿದ್ದ ಚಿನ್ನದ ಸರ ಹಾಗೂ ಬೀರುವಿನಲ್ಲಿದ್ದ 25 ಸಾವಿರ ನಗದನ್ನು ದೋಚಿಕೊಂಡು ಪರಾರಿಯಾಗಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಆಲೂರು ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮನೆಯಲ್ಲಿದ್ದ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ತನಿಖೆ ಆರಂಭಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸುತ್ತಮುತ್ತಲಿನ ಪ್ರದೇಶಗಳ ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಸಮೀಪದ ಒಂಟಿ ಮನೆಯಲ್ಲಿ ನಡೆದ ಈ ದರೋಡೆ ಪ್ರಕರಣದಿಂದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದ್ದು, ರಾತ್ರಿ ವೇಳೆಯಲ್ಲಿ ಪೊಲೀಸ್ ಗಸ್ತು ಹೆಚ್ಚಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ಪೊಲೀಸರು ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.