ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಪ್ರಮುಖ: ವೆಂಕಟ್ ರಾಜಾ

KannadaprabhaNewsNetwork |  
Published : Jun 13, 2025, 04:26 AM ISTUpdated : Jun 13, 2025, 04:27 AM IST
ಮಕ್ಕಳ | Kannada Prabha

ಸಾರಾಂಶ

ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಅತಿ ಮುಖ್ಯವಾಗಿದೆ ಎಂದು ಗಣ್ಯರು ತಿಳಿಸಿದರು.

ಕನ್ನಡಪ್ರಭ ವಾರ್ತೆ‌ ಮಡಿಕೇರಿ

ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ಕ್ರೀಡೆ, ಕಲೆ, ಸಾಹಿತ್ಯ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪಾಲ್ಗೊಳ್ಳಲು ಪ್ರೇರೇಪಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಮಕ್ಕಳ ವಿಶೇಷ ಪೊಲೀಸ್ ಘಟಕ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಮಕ್ಕಳ ರಕ್ಷಣಾ ಘಟಕ, ಮಡಿಕೇರಿ ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ನಡೆದ ‘ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ 1098 ಗೆ ಮಾಹಿತಿ ನೀಡುವಂತಾಗಬೇಕು. ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಸಂಬಂಧಿಸಿದಂತೆ ಗ್ರಾಮ ಹಾಗೂ ಹಾಡಿಗಳಲ್ಲಿ ಪ್ರತೀ ನಿತ್ಯ ಜಾಗೃತಿ ಕಾರ್ಯಕ್ರಮಗಳು ಆಯೋಜಿಸಬೇಕು ಎಂದರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿ, ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಕಲಿಸುವಂತಾಗಬೇಕು. ಇದರಿಂದ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳದಂತೆ ನೋಡಿಕೊಳ್ಳಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಪೋಷಕರು ಗಮನಹರಿಸಬೇಕು:

ಮಕ್ಕಳು ಸಮಾಜದಲ್ಲಿ ಉತ್ತಮ ಹಾದಿಯಲ್ಲಿ ಸಾಗುವಂತಾಗಲು ನೈತಿಕ ಹಾಗೂ ಮೌಲ್ಯಯುತ ಶಿಕ್ಷಣ ಹಿಂದಿಗಿಂತ ಇಂದು ಹೆಚ್ಚು ಅತ್ಯಗತ್ಯವಾಗಿದೆ. ಆ ನಿಟ್ಟಿನಲ್ಲಿ ಪೋಷಕರು ಗಮನಹರಿಸಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅವರು ತಿಳಿಸಿದರು. ಶ್ರಮ ಅತೀ ಮುಖ್ಯವಾಗಿದೆ:

ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಮಾತನಾಡಿ, ಮಕ್ಕಳ ಉತ್ತಮ ಬೆಳವಣಿಗೆಗೆ ತಂದೆ ತಾಯಂದಿರ ಶ್ರಮ ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡುವಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದರು. ‘ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ಅವರು ಮಾತನಾಡಿ ಮಕ್ಕಳಿಗೆ ಸರ್ಕಾರದ ಸೌಲಭ್ಯಗಳು ತಲುಪುವಂತಾಗಬೇಕು. ಸೌಲಭ್ಯ ವಂಚಿತ ಮಕ್ಕಳಿಗೆ ಸವಲತ್ತುಗಳು ತಲುಪಿದಾಗ ಬಾಲ ಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.’ ಜಿಲ್ಲಾ ಕಾರ್ಮಿಕ ಅಧಿಕಾರಿ ಟಿ.ಕಾವೇರಿ ಅವರು ಮಾತನಾಡಿ ಕೊಡಗು ಬಾಲ ಕಾರ್ಮಿಕ ಮುಕ್ತ ಜಿಲ್ಲೆಯತ್ತ ದಾಪುಗಾಲು ಹಾಕುವತ್ತಾ ಮಹತ್ವಾಕಾಂಕ್ಷೆ ಹೊಂದಿದೆ ಎಂದು ತಿಳಿಸಿದರು. ‘2017 ರಿಂದ ಇಲ್ಲಿಯವರೆಗೆ 2974 ಕಡೆಗಳಲ್ಲಿ ತಪಾಸಣೆ ಕೈಗೊಳ್ಳಲಾಗಿದ್ದು, ಇದುವರೆಗೆ 22 ಬಾಲ ಕಾರ್ಮಿಕರು ಹಾಗೂ 50 ಕಿಶೋರ ಕಾರ್ಮಿಕರು ಕಂಡು ಬಂದಿದ್ದಾರೆ. ಈ ಪೈಕಿ 32 ಮಕ್ಕಳಿಗೆ ಪುನರ್ ವಸತಿ ಕಲ್ಪಿಸಲಾಗಿದ್ದು, ಉಳಿದ 40 ಮಕ್ಕಳನ್ನು ಪೋಷಕರ ವಶಕ್ಕೆ ಒಪ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.’ ಟಾಸ್ಕ್‌ಫೋರ್ಸ್ ವಿಶೇಷ ತಂಡ ರಚನೆ:

ಎಸ್‍ಸಿಎಸ್‍ಪಿ ಮತ್ತು ಟಿಎಸ್‍ಪಿ ಯೋಜನೆಯಡಿ 27 ಮಕ್ಕಳಿಗೆ ಕಲಿಕಾ ಸಾಮಗ್ರಿ ಹಾಗೂ ಆಹಾರ ಸಾಮಗ್ರಿಗಳ ಕಿಟ್ ಒದಗಿಸಲಾಗಿದೆ. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಟಾಸ್ಕ್‌ಫೋರ್ಸ್ ವಿಶೇಷ ತಂಡ ರಚಿಸಲಾಗಿದೆ ಎಂದು ಇದೇ ಸಂದರ್ಭದಲ್ಲಿ ವಿವರಿಸಿದರು. ಅಂಗಡಿ, ಹೋಟೆಲ್, ಗ್ಯಾರೇಜ್, ಕಲ್ಲುಕೋರೆ, ಕೈಗಾರಿಕೆ, ತೋಟಗಳು, ಮನೆ ಹಾಗೂ ವಿವಿಧ ವಾಣಿಜ್ಯ ಸಂಸ್ಥೆಗಳಲ್ಲಿ ತಪಾಸಣೆ ಕೈಗೊಳ್ಳಲಾಗುತ್ತಿದೆ. ಜೊತೆಗೆ ವಿಶೇಷ ಅಭಿಯಾನ ಕಾರ್ಯಕ್ರಮಗಳು ನಡೆಯುತ್ತಿವೆ ಎಂದು ಟಿ.ಕಾವೇರಿ ಅವರು ಹೇಳಿದರು. ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕ ಕಾಯ್ದೆ ಕುರಿತು ವಕೀಲರಾದ ಯಾಲದಾಳು ಮನೋಜ್ ಬೋಪಯ್ಯ ಅವರು ಮಾತನಾಡಿ 14 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಹಾಗೂ 18 ವರ್ಷದೊಳಗಿನ ಹದಿಹರೆಯದ ಕಾರ್ಮಿಕರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ತಿಳಿಸಿದರು. ಬಾಲಕಾರ್ಮಿಕ ಹಾಗೂ ಹದಿಹರೆಯದ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016 ರ ಮಾಹಿತಿ ಅಧ್ಯಯನ ಮಾಡುವಂತಾಗಬೇಕು ಎಂದರು.ಮಡಿಕೇರಿ ತಾಲೂಕು ಹಿರಿಯ ಕಾರ್ಮಿಕ ನಿರೀಕ್ಷಕರಾದ ಎಂ.ಎಂ.ಯತ್ನಟ್ಟಿ ಅವರು ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶ್ರಮಿಸುತ್ತಿರುವ ಹಿನ್ನೆಲೆ ಸನ್ಮಾನ ಸ್ವೀಕರಿಸಿ ಮಾತನಾಡಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಯಲ್ಲಿ ಕಾರ್ಮಿಕ ಇಲಾಖೆ ಶ್ರಮಿಸುತ್ತಿದ್ದು, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಯಲ್ಲಿ 18 ಕ್ಕೂ ಹೆಚ್ಚು ಮೊಕದ್ದಮೆಗಳನ್ನು ದಾಖಲಿಸಲಾಗಿದೆ. ಶಾಲೆಯಿಂದ ಹೊರಗುಳಿದ 7 ಮಕ್ಕಳನ್ನು ಶಾಲೆಗೆ ಸೇರ್ಪಡೆ ಮಾಡಲಾಗಿದೆ ಎಂದು ತಿಳಿಸಿದರು. ಹಿಂದೆ ಬಾಲ ಕಾರ್ಮಿಕರಾಗಿ ದುಡಿಯುತ್ತಿದ್ದು, ನಂತರ ಶಾಲೆಗೆ ಸೇರಿ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಶೇ.75 ಕ್ಕೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಜೊತೆಗೆ 2 ಸಾವಿರ ರು. ಪ್ರೋತ್ಸಾಹಧನ ಬಹುಮಾನವನ್ನು ಆರ್‍ಟಿಜಿಎಸ್ ಮೂಲಕ ನೀಡಲಾಯಿತು. ಪ್ರಧಾನ ಜಿಲ್ಲಾ ಮತ್ತು ಸೆಷನ್‌ ನ್ಯಾಯಾಧೀಶರಾದ ಹೊಸಮನಿ ಪುಂಡಲಿಕ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಸಿ.ರಂಗಧಾಮಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ತಿಪ್ಪಣ್ಣ ಪಿ.ಸಿರಸಗಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಬಿ.ಈರಸ್ವಾಮಿ, ಹಿರಿಯ ಕಾರ್ಮಿಕ ನಿರೀಕ್ಷಕರಾದ ಎಸ್.ಶಶಿಧರ್, ನಿಖಿಲ್ ಚಂದ್ರ ಇತರರು ಇದ್ದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಜಯಪ್ಪ ನಿರೂಪಿಸಿದರು. ಯಶೋಧ ಪ್ರಾರ್ಥಿಸಿದರು. ಕೊಡಗು ವಿದ್ಯಾಲಯದ ವಿದ್ಯಾರ್ಥಿನಿಯರು ನಾಡಗೀತೆ ಹಾಡಿದರು. ವಿರಾಜಪೇಟೆ ವೃತ್ತದ ಹಿರಿಯ ಕಾರ್ಮಿಕ ನಿರೀಕ್ಷಕರಾದ ನಿಖಿಲ್ ಚಂದ್ರ ಸ್ವಾಗತಿಸಿದರು. ಜಿಲ್ಲಾ ಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕರಾದ ಆರ್.ಶೀರಾಝ್ ಅಹ್ಮದ್ ಅವರು ವಂದಿಸಿದರು.

ಬಾಲ ಕಾರ್ಮಿಕ ಪದ್ಧತಿಯ ದುಷ್ಪರಿಣಾಮ ಹಾಗೂ ಮಕ್ಕಳ ಹಕ್ಕುಗಳ ಬಗ್ಗೆ ಯಕ್ಷಗಾನದ ಪ್ರದರ್ಶನದ ಮೂಲಕ ಅರಿವು ಮೂಡಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ