ಕನ್ನಡಪ್ರಭ ವಾರ್ತೆ ದಾವಣಗೆರೆ
ದೇವರು ನೀಡಿರುವ ಪರಿಸರ ಉಳಿಸಿ ಬೆಳೆಸಬೇಕಾದ ಹೊಣೆಗಾರಿಕೆ ಇಂದಿನ ವಿದ್ಯಾರ್ಥಿ ಸಮೂಹದ ಮೇಲಿದೆ ಎಂದು ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಹೇಳಿದರು.ನಗರದ ದುರ್ಗಾಂಬಿಕಾ ಪ್ರೌಢಶಾಲೆಯಲ್ಲಿ ಗುರುವಾರ ದಾವಣಗೆರೆ ತೋಟಗಾರಿಕೆ ಇಲಾಖೆ ವತಿಯಿಂದ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಹಮ್ಮಿಕೊಂಡಿದ್ದ "ವಿದ್ಯಾರ್ಥಿಗಳಿಗೆ ತೋಟಗಾರಿಕೆ " ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ತರಕಾರಿ ಮತ್ತು ಸಸಿಗಳನ್ನು ಹೇಗೆ ಬೆಳೆಯಬೇಕೆನ್ನುವ ತಿಳಿವಳಿಕೆ ಇಂದಿನ ವಿದ್ಯಾರ್ಥಿಗಳಿಗೆ ಅಗತ್ಯವಾಗಿದೆ. ಜೊತೆಗೆ ಉತ್ತಮ ಪರಿಸರ ಹೊಂದುವುದು ಎಲ್ಲರ ಆದ್ಯ ಕರ್ತವ್ಯ. ಈ ಹಿನ್ನೆಲೆಯಲ್ಲಿ ತರಕಾರಿ ತೋಟ ನಿರ್ಮಾಣ ಕುರಿತು ಇಲಾಖೆಯಿಂದ ಈ ರೀತಿಯ ಕಾರ್ಯಕ್ರಮ ಹಮ್ಮಿಕೊಂಡಿರುವುದು ಸ್ವಾಗತಾರ್ಹ. ಇಂದಿನ ವಿದ್ಯಾರ್ಥಿಗಳೆ ಮುಂದಿನ ಪ್ರಜೆಗಳು ಈ ನಿಟ್ಟಿನಲ್ಲಿ ಪರಿಸರ ರಕ್ಷಣೆಯಲ್ಲಿ ವಿದ್ಯಾರ್ಥಿ ಸಮೂಹದ ಪಾತ್ರ ಬಹು ಮುಖ್ಯವಾಗಿದೆ ಎಂದರು.
ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ.ಬಸವನಗೌಡ ಮಾತನಾಡಿ, ಶಾಲಾ ಆವರಣಗಳಲ್ಲಿ ತರಕಾರಿ ಕೈ ತೋಟಗಳನ್ನು ನಿರ್ಮಾಣ ಮಾಡುವ ಬಗ್ಗೆ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ, ಅಲ್ಲಿ ಬೆಳೆಯುವ ಸಾವಯವ ತರಕಾರಿಗಳನ್ನು ಮಧ್ಯಾಹ್ನದ ಬಿಸಿಯೂಟಕ್ಕೆ ಬಳಸುವುದು ಈ ಕಾರ್ಯಕ್ರಮದ ಮೂಲ ಉದ್ದೇಶವಾಗಿದೆ. ದಾವಣಗೆರೆ ಜಿಲ್ಲೆಯಲ್ಲಿ 7 ಸಾವಿರ ಕುಟುಂಬಗಳಿಗೆ ಕೃಷಿ ವಿಜ್ಞಾನ ಕೇಂದ್ರ ಮತ್ತು ತೋಟಗಾರಿಕೆ ಇಲಾಖೆಯಿಂದ ತಾರಸಿ ತರಕಾರಿ ಬೆಳೆಯಲು ತರಬೇತಿ ನೀಡಲಾಗಿದೆ. ಅಡುಗೆ ಮನೆಯಿಂದ ಉತ್ಪತ್ತಿಯಾಗುವ ತರಕಾರಿ ತ್ಯಾಜ್ಯವನ್ನು ಗೊಬ್ಬರ ಮಾಡಿ ಸಾವಯವ ಗೊಬ್ಬರ ತಯಾರಿಸಿ ತಾರಸಿ ಕೈ ತೋಟ ಬೆಳೆಯಲು ಪ್ರೋತ್ಸಾಹ ನೀಡಲಾಗಿದೆ. ಇದೇ ಮಾದರಿಯಲ್ಲಿ ಶಾಲಾ ವಿದ್ಯಾರ್ಥಿಗಳು ಪ್ರೇರಣೆ ಪಡೆಯಬೇಕಿದೆ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ತಾಲೂಕು ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ರೇಷ್ಮಾ ಪರ್ವಿನ್, ಮಹಾನಗರ ಪಾಲಿಕೆ ಸದಸ್ಯ ಕೆ.ಚಮನ್ ಸಾಬ್, ಮಾಜಿ ಸದಸ್ಯರಾದ ದಿನೇಶ್ ಕೆ.ಶೆಟ್ಟಿ, ಚಂದ್ರಶೇಖರ, ದುರ್ಗಾಂಬಿಕಾ ದೇವಸ್ಥಾನದ ಧರ್ಮದರ್ಶಿ ಗೌಡ್ರ ಚನ್ನಬಸಪ್ಪ ಹಾಗೂ ಶಾಲೆಯ ಶಿಕ್ಷಕರಿದ್ದರು.