ತುಮಕೂರು: ಹಳೇ ವಸ್ತು ತುಂಬಿದ್ದ ಕೊಠಡಿಗೆ ಬೆಂಕಿ ಬಿದ್ದು ವ್ಯಕ್ತಿಯೊಬ್ಬ ಸುಟ್ಟು ಕರಕಲಾಗಿರುವ ಘಟನೆ ತುಮಕೂರಿನ ಕ್ಯಾತ್ಸಂದ್ರದಲ್ಲಿ ನಡೆದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಗುರುವಾರ ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡಿತು. ಬೆಂಕಿ ಜ್ವಾಲೆ ಹೆಚ್ಚಾಗಿದ್ದನ್ನು ಗಮನಿಸಿದ ಒಬ್ಬರು ಅಗ್ನಿಶಾಮಕ ಠಾಣೆಗೆ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿ ನಂದಿಸಿದ ಬಳಿಕ ಕೊಠಡಿ ಒಳಗೆ ಪ್ರವೇಶಿಸುತ್ತಿದ್ದಂತೆ ವ್ಯಕ್ತಿಯೊಬ್ಬ ಸುಟ್ಟು ಕರಕಲಾಗಿರುವುದು ಪತ್ತೆಯಾಗಿದೆ. ಶವವನ್ನು ತುಮಕೂರು ಜಿಲ್ಲಾಸ್ಪತ್ರೆ ಶವಾಗಾರಕ್ಕೆ ರವಾನಿಸಿದ್ದು ಮೃತನ ಗುರುತು ಇನ್ನು ಪತ್ತೆಯಾಗಿಲ್ಲ. ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.