ಮೂರು ವರ್ಷಗಳಲ್ಲಿ ₹2,944 ಕೋಟಿ ಪಂಚ ಗ್ಯಾರಂಟಿಗಳಿಗೆ ವಿನಿಯೋಗ: ಪಿ.ಟಿ. ಪರಮೇಶ್ವರ್ ನಾಯ್ಕ

KannadaprabhaNewsNetwork |  
Published : Aug 05, 2026, 02:15 AM IST
ಫೋಟೋವಿವರ- (4ಎಚ್‌ಪಿಟಿ1) ಹೊಸಪೇಟೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗ್ಯಾರಂಟಿ ಸಮಿತಿ ರಾಜ್ಯ ಉಪಾಧ್ಯಕ್ಷ ಪಿ.ಟಿ.ಪರಮೇಶ್ವರ್ ಮಾತನಾಡಿದರು | Kannada Prabha

ಸಾರಾಂಶ

ಜಿಲ್ಲೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಾದ ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ, ಶಕ್ತಿಯೋಜನೆ ಹಾಗೂ ಯುವನಿಧಿ ಯೋಜನೆಗಳಿಗೆ ಕಳೆದ ಮೂರು ವರ್ಷಗಳಲ್ಲಿ ಒಟ್ಟು ₹2944 ಕೋಟಿ ಅನುದಾನ ನೀಡಲಾಗಿದೆ ಎಂದು ಗ್ಯಾರಂಟಿ ಸಮಿತಿ ರಾಜ್ಯ ಉಪಾಧ್ಯಕ್ಷ ಪಿ.ಟಿ. ಪರಮೇಶ್ವರ್ ಅವರು ಮಾಹಿತಿ ನೀಡಿದರು.

ಹೊಸಪೇಟೆ: ಜಿಲ್ಲೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಾದ ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ, ಶಕ್ತಿಯೋಜನೆ ಹಾಗೂ ಯುವನಿಧಿ ಯೋಜನೆಗಳಿಗೆ ಕಳೆದ ಮೂರು ವರ್ಷಗಳಲ್ಲಿ ಒಟ್ಟು ₹2944 ಕೋಟಿ ಅನುದಾನ ನೀಡಲಾಗಿದೆ ಎಂದು ಗ್ಯಾರಂಟಿ ಸಮಿತಿ ರಾಜ್ಯ ಉಪಾಧ್ಯಕ್ಷ ಪಿ.ಟಿ. ಪರಮೇಶ್ವರ್ ನಾಯ್ಕ ಅವರು ಮಾಹಿತಿ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಈ ಯೋಜನೆಗಳಲ್ಲಿನ ಕೆಲವು ಲೋಪಗಳನ್ನು ಸರಿಪಡಿಸಿಕೊಂಡು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಅತ್ಯಂತ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ಯಭಾಗ್ಯ ಯೋಜನೆಯಡಿ ಜಿಲ್ಲೆಯ ಸುಮಾರು 3.47 ಲಕ್ಷ ಕುಟುಂಬಗಳಿಗೆ 2023ರ ಆಗಸ್ಟ್‌ನಿಂದ 2024ರ ಡಿಸೆಂಬರ್ ವರೆಗೆ ನೇರವಾಗಿ ಫಲಾನುಭವಿಗಳಿಗೆ ಡಿಬಿಟಿ ಮೂಲಕ ₹285 ಕೋಟಿ ಪಾವತಿ ಮಾಡಲಾಗಿದೆ. ನಂತರ ಹಣದ ಬದಲಾಗಿ ಪ್ರತಿಫಲಾನುಭವಿಗೆ 5 ಕೆಜಿಯಂತೆ ಪಡಿತರ ಅಕ್ಕಿಯನ್ನು ವಿತರಣೆ ಮಾಡಲಾಗುತ್ತಿದೆ. ಅದರಂತೆ ಗೃಹಜ್ಯೋತಿ ಯೋಜನೆಯಡಿ ಜಿಲ್ಲೆಯಲ್ಲಿ ನೊಂದಣಿಯಾದ ಒಟ್ಟು 3,21,966 ಫಲಾನುಭವಿಗಳಿಗೆ 2023ರ ಜೂನ್‌ನಿಂದ 2026ರ ಜೂನ್‌ವರೆಗೆ ₹468.26 ಕೋಟಿ ಸಹಾಯಧನ ನೀಡಲಾಗಿದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ. ಶಿವಮೂರ್ತಿ, ಉಪಾಧ್ಯಕ್ಷರಾದ ಕೆ. ಬದಾವಲಿ, ಹಡಗಲಿ ಶಾಂತನಗೌಡ, ಚಂದ್ರಪ್ಪ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಅನ್ನದಾನಸ್ವಾಮಿ ಸೇರಿದಂತೆ ಇತರರು ಉಪಸ್ಥಿತರಿದ್ದರು. ಗ್ಯಾರಂಟಿ ಯೋಜನೆಗಳಿಂದ ₹2,793.89 ಕೋಟಿ ಅನುದಾನ

ಬಳ್ಳಾರಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳ ಮೂಲಕ ಬಳ್ಳಾರಿ ಜಿಲ್ಲೆಯ ಫಲಾನುಭವಿಗಳಿಗೆ ಕಳೆದ ಮೂರು ವರ್ಷಗಳಲ್ಲಿ ಒಟ್ಟು ₹2,793.89 ಕೋಟಿ ಅನುದಾನವನ್ನು ನೇರವಾಗಿ ತಲುಪಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಪಿ.ಟಿ. ಪರಮೇಶ್ವರ ನಾಯ್ಕ ತಿಳಿಸಿದರು.ಬಳ್ಳಾರಿ ಜಿಲ್ಲೆಯ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ನಗರದ ಜಿಲ್ಲಾ ಪಂಚಾಯಿತಿಯ ವಿಡಿಯೋ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ದುರುಪಯೋಗ ತಡೆಯಲು ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ನಿಧನರಾದ ನಂತರವೂ ಎಟಿಎಂ ಕಾರ್ಡ್ ಮೂಲಕ ಹಣ ದುರುಪಯೋಗವಾಗುತ್ತಿರುವುದು ಗಮನಕ್ಕೆ ಬಂದಿದೆ. ಇದನ್ನು ತಡೆಯಲು ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಜನನ-ಮರಣ ನೋಂದಣಿ ಅಧಿಕಾರಿಗಳ ಮೂಲಕ ಮಾಹಿತಿ ಪಡೆದು, ತಕ್ಷಣವೇ ಅಂತಹ ಖಾತೆಗಳನ್ನು ಬ್ಲಾಕ್ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಮರಣ ಹೊಂದಿದವರ ಖಾತೆಯಲ್ಲಿದ್ದ ಹಣವನ್ನು ಸರ್ಕಾರಕ್ಕೆ ಮರುಜಮಾ ಮಾಡುವ ಪ್ರಕ್ರಿಯೆ ನಡೆಯುತ್ತಿದ್ದು, ಬಳ್ಳಾರಿ ಜಿಲ್ಲೆಯೊಂದರಲ್ಲೇ ₹69 ಲಕ್ಷ ಹಣವನ್ನು ಸರ್ಕಾರಕ್ಕೆ ವಾಪಸ್ ತರಿಸಲಾಗಿದೆ. ರಾಜ್ಯಮಟ್ಟದಲ್ಲಿ ಲೀಡ್ ಬ್ಯಾಂಕ್‌ಗಳ ಜೊತೆ ಚರ್ಚಿಸಿ ಸುಮಾರು ₹117 ಕೋಟಿಯಲ್ಲಿ ಈಗಾಗಲೇ ₹28 ಕೋಟಿ ಮರುಜಮಾ ಮಾಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.ಯಾವುದೇ ಅರ್ಹ ಫಲಾನುಭವಿಯೂ ಪಂಚ ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ನಡೆಸಿ ಇನ್ನೂ ಹೆಚ್ಚಿನ ಪ್ರಚಾರ ಹಾಗೂ ಪರಿಣಾಮಕಾರಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಅಭಿಮತ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ. ಚಿದಾನಂದಪ್ಪ, ಉಪಾಧ್ಯಕ್ಷೆ ಆಶಾಲತಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಸೇರಿದಂತೆ ಸಂಡೂರು ಹಾಗೂ ಕುರುಗೋಡು ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರು, ಸದಸ್ಯರು ಮತ್ತು ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಡುಬಡವರಿಗೆ ನಿವೇಶನ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ
ಹೊರಗುತ್ತಿಗೆ ನೌಕರರಿಗೆ ಕನಿಷ್ಠ ವೇತನ ಜಾರಿಗಾಗಿ ಪ್ರತಿಭಟನೆ