ಆರೆಸ್ಸೆಸ್‌ ಮಾನನಷ್ಟ: ಸಿಎಂಗೆ ನೋಟಿಸ್‌

KannadaprabhaNewsNetwork |  
Published : Jun 18, 2025, 11:48 PM IST
ಸಿದ್ದರಾಮಯ್ಯ | Kannada Prabha

ಸಾರಾಂಶ

ರಾಜ್ಯದಲ್ಲಿ ಅತಿಹೆಚ್ಚು ಅಪರಾಧ ಕೃತ್ಯಗಳನ್ನು ನಡೆಸುತ್ತಿರುವುದು ಆರ್‌ಎಸ್‌ಎಸ್ ಸಂಘಟನೆ ಮತ್ತು ಬಜರಂಗದಳದವರು ಎಂಬ ವಿವಾದಾತ್ಮಕ ಹೇಳಿಕೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (42ನೇ ಎಸಿಜೆಎಂ ಕೋರ್ಟ್‌) ನೋಟಿಸ್‌ ಜಾರಿಗೊಳಿಸಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ರಾಜ್ಯದಲ್ಲಿ ಅತಿಹೆಚ್ಚು ಅಪರಾಧ ಕೃತ್ಯಗಳನ್ನು ನಡೆಸುತ್ತಿರುವುದು ಆರ್‌ಎಸ್‌ಎಸ್ ಸಂಘಟನೆ ಮತ್ತು ಬಜರಂಗದಳದವರು ಎಂಬ ವಿವಾದಾತ್ಮಕ ಹೇಳಿಕೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (42ನೇ ಎಸಿಜೆಎಂ ಕೋರ್ಟ್‌) ನೋಟಿಸ್‌ ಜಾರಿಗೊಳಿಸಿದೆ.

ಅವಹೇಳನಕಾರಿ ಹೇಳಿಕೆ ನೀಡುವ ಮುಖಾಂತರ ಆರ್‌ಎಸ್‌ಎಸ್‌ ಸಂಘಟನೆ ಗೌರವಕ್ಕೆ ಧಕ್ಕೆ ತಂದು ಮಾನನಷ್ಟ ಉಂಟು ಮಾಡಿದ ಆರೋಪದ ಮೇಲೆ ಬುಧವಾರ ಆರ್‌ಎಸ್‌ಎಸ್‌ ಕಾರ್ಯಕರ್ತ ಹಾಗೂ ವಕೀಲ ಎನ್‌.ಕಿರಣ್‌ ಸಲ್ಲಿಸಿರುವ ಖಾಸಗಿ ದೂರಿನ ವಿಚಾರಣೆ ನಡೆಸಿದ ನ್ಯಾಯಾಲಯ, ಮುಖ್ಯಮಂತ್ರಿ ಸಿದ್ದರಾಮಯ್ಯಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆಯನ್ನು ಜೂ.26ಕ್ಕೆ ಮುಂದೂಡಿತು.

ಪ್ರಕರಣ ಸಂಬಂಧ ದೂರುದಾರನ ಪ್ರಮಾಣೀಕೃತ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಪ್ರಕರಣದಲ್ಲಿ ಕಾಗ್ನಿಜೆನ್ಸ್‌ ಸ್ವೀಕರಿಸುವ ಮುನ್ನ ಆರೋಪಿಗೆ ನೋಟಿಸ್‌ ಜಾರಿಗೊಳಿಸಿ ಅವರ ವಾದ ಆಲಿಸಬೇಕು ಎಂದು ಭಾರತೀಯ ನ್ಯಾಯ ಸುರಕ್ಷಾ ಸಂಹಿತೆ(ಬಿಎನ್‌ಎಸ್‌ಎಸ್‌) ಸೆಕ್ಷನ್‌ 233 ಹೇಳುತ್ತದೆ. ಅದರಂತೆ ಪ್ರಕರಣದಲ್ಲಿ ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್‌ ಜಾರಿಗೊಳಿಸಲಾಗಿದೆ ಎಂದು ಆದೇಶದಲ್ಲಿ ನ್ಯಾಯಾಲಯ ಉಲ್ಲೇಖಿಸಿದೆ.

ಏನಿದು ಪ್ರಕರಣ?:

ದೂರುದಾರ ಎನ್‌.ಕಿರಣ್‌ ನೀಡಿದ ದೂರಿನ ಅನ್ವಯ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025ರ ಮಾ.17ರಂದು ವಿಧಾನಸಭೆಯಲ್ಲಿ ಮಾತನಾಡುತ್ತಾ, ರಾಜ್ಯದಲ್ಲಿ ಅತಿಹೆಚ್ಚು ಅಪರಾಧ ಕೃತ್ಯಗಳನ್ನು ನಡೆಸುತ್ತಿರುವುದು ಆರ್‌ಎಸ್‌ಎಸ್ ಸಂಘಟನೆ ಮತ್ತು ಬಜರಂಗದಳದವರು ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಯೂಟ್ಯೂಬ್‌ ಚಾನೆಲ್‌ ಮತ್ತು ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿದೆ.

ಆರ್‌ಎಸ್‌ಎಸ್‌ ಸಂಘಟನೆ ಕೇವಲ ಧಾರ್ಮಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸುತ್ತದೆ. ಯಾವುದೇ ಅಪರಾಧ ಕೃತ್ಯಗಳನ್ನು ಎಸೆಗಿಲ್ಲ. ಸಿದ್ದರಾಮಯ್ಯ ಅವರು ಈ ರೀತಿ ಅವಹೇಳನಕಾರಿಯಾಗಿ ಮಾತನಾಡಿರುವುದರಿಂದ ಆರ್‌ಎಸ್‌ಎಸ್‌ ಸಂಘಟನೆ ಕಾರ್ಯಕರ್ತನಾದ ನನ್ನ ಮನಸ್ಸಿಗೆ ನೋವಾಗಿದೆ. ಹಾಗೆಯೇ ಸಂಘಟನೆಯ ಗೌರವಕ್ಕೆ ಧಕ್ಕೆ ಹಾಗೂ ಮಾನನಷ್ಟ ಉಂಟಾಗಿದೆ.

ವಿಧಾನಸಭೆ ಕಾರ್ಯಕಲಾಪಗಳಿಗೆ ಸಂಬಂಧಿಸಿ ಆರ್‌ಎಸ್‌ಎಸ್ ಸಂಘಟನೆ ಪಾತ್ರ ಇಲ್ಲ. ಅನವಶ್ಯಕವಾಗಿ ಸಿದ್ದರಾಮಯ್ಯ ಅವರು ಸಂಘಟನೆ ಹೆಸರು ಎಳೆತಂದು ಗೌರವಕ್ಕೆ ಚ್ಯುತಿ ಉಂಟು ಮಾಡಿದ್ದಾರೆ. ಹೀಗಾಗಿ ಅವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ(ಬಿಎನ್‌ಎಸ್‌) ಸೆಕ್ಷನ್‌ 299(ಧಾರ್ಮಿಕ ಭಾವನೆಗಳಿಗೆ ಧಕ್ಕೆ), 352 (ಶಾಂತಿಭಂಗಕ್ಕೆ ಪ್ರಚೋದನೆ) ಹಾಗೂ 356(ಮಾನನಷ್ಟ) ಅಡಿ ಕ್ರಮ ಜರುಗಿಸಬೇಕು ಎಂದು ದೂರುದಾರ ಕಿರಣ್‌ ತಮ್ಮ ದೂರಿನಲ್ಲಿ ಮನವಿ ಮಾಡಿದ್ದಾರೆ. ಪ್ರಕರಣ ಸಂಬಂಧ ದೂರುದಾರನ ವಾದ ಆಲಿಸಿದ ಮತ್ತು ಆತನ ಪ್ರಮಾಣಿಕೃತ ಹೇಳಿಕೆ ದಾಖಲಿಸಿರುವ ನ್ಯಾಯಾಲಯವು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ನೋಟಿಸ್‌ ಜಾರಿಗೊಳಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವೈಯಕ್ತಿಕ ಕಾರಣದಿಂದ ಬೇಸತ್ತು ಕಿರುತೆರೆ ಯುವ ನಟಿ ಆತ್ಮ*ತ್ಯೆ
ಜ.6 ಇಲ್ಲವೇ 9ಕ್ಕೆ ಡಿಕೆಶಿ ಸಿಎಂ 200% ಕನ್ಫರ್ಮ್: ಇಕ್ಬಾಲ್