ಹನುಮಸಾಗರ: ರೈತರ ಸಂಪೂರ್ಣ ಬೆಳೆ ಸಾಲ ಮನ್ನಾ, ಎಕರೆಗೆ ₹50 ಸಾವಿರ ಪರಿಹಾರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದ ಬಳಿ ವಿವಿಧ ರೈತ ಪರ ಸಂಘಟನೆಗಳ ನೇತೃತ್ವದಲ್ಲಿ ಶುಕ್ರವಾರ ರಸ್ತೆತಡೆ, ಪ್ರತಿಭಟನೆ ನಡೆಸಲಾಯಿತು.
ಎಕರೆಗೆ ₹50 ಸಾವಿರ ಪರಿಹಾರ ನೀಡಲಿ: ಮಳೆ ಅಭಾವ ಹಾಗೂ ಕೃಷಿ ಚಟುವಟಿಕೆಯಲ್ಲಿನ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಸರ್ಕಾರ ತಕ್ಷಣವೇ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು. ರೈತರು ಪಡೆದಿರುವ ಎಲ್ಲ ರೀತಿಯ ಕೃಷಿ ಸಾಲಗಳನ್ನು ಮನ್ನಾ ಮಾಡಬೇಕು. ಬೆಳೆ ವಿಮೆ ಮಾಡಿಸಿರುವ ಎಲ್ಲ ರೈತರಿಗೂ ಯಾವುದೇ ವಿಳಂಬವಿಲ್ಲದೆ ಪೂರ್ಣ ಪ್ರಮಾಣದ ವಿಮಾ ಪರಿಹಾರ ವಿತರಿಸಬೇಕು. ಬೆಳೆ ನಷ್ಟ ಅನುಭವಿಸಿದ ರೈತರಿಗೆ ಪರಿಹಾರ ನೀಡುವಲ್ಲಿ ವಿಳಂಬ ಮಾಡದೆ, ಕೃಷಿ ಕ್ಷೇತ್ರವನ್ನು ಉಳಿಸಲು ಸರ್ಕಾರಗಳು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
36 ಕೆರೆಗಳಿಗೆ ನೀರು ತುಂಬಿಸಲು ಆಗ್ರಹ: ಕುಷ್ಟಗಿ ತಾಲೂಕಿನ ರೈತರ ಕೃಷಿ ಹಾಗೂ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ತಾಲೂಕಿನ 36 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು. ಇದರಿಂದ ಅಂತರ್ಜಲ ಮಟ್ಟ ಸುಧಾರಿಸುವ ಜತೆಗೆ ಕೃಷಿ ಚಟುವಟಿಕೆಗೆ ಅನುಕೂಲವಾಗಲಿದೆ. ಗ್ರಾಮೀಣ ಪ್ರದೇಶಗಳಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಗೋಶಾಲೆ ಹಾಗೂ ಮೇವು ಬ್ಯಾಂಕ್‌ಗಳನ್ನು ತೆರೆಯಬೇಕು. ಜಾನುವಾರುಗಳ ಸಂರಕ್ಷಣೆಗೆ ಸರ್ಕಾರ ವಿಶೇಷ ಗಮನಹರಿಸಬೇಕು ಎಂದು ಆಗ್ರಹಿಸಿದರು.ಉದ್ಯೋಗ ಖಾತ್ರಿ ಯೋಜನೆ ವಿಸ್ತರಿಸಲು ಒತ್ತಾಯ: ಗ್ರಾಮೀಣ ಭಾಗದ ರೈತರು ಹಾಗೂ ಕೃಷಿ ಕೂಲಿ ಕಾರ್ಮಿಕ ಕುಟುಂಬಗಳಿಗೆ ಉದ್ಯೋಗದ ಭದ್ರತೆ ಒದಗಿಸಬೇಕು. ಪಟ್ಟಣ ಪ್ರದೇಶಗಳಲ್ಲಿಯೂ ವಿಬಿ ಜಿ ರಾಮ್ ಜೀ ಯೋಜನೆ ಆರಂಭಿಸಿ ಉದ್ಯೋಗಾವಕಾಶ ಕಲ್ಪಿಸಬೇಕು. ಬೆಲೆ ಏರಿಕೆಯಿಂದ ಜನಸಾಮಾನ್ಯರ ಜೀವನ ದುಸ್ತರವಾಗಿದ್ದು, ಗ್ರಾಮೀಣ ಹಾಗೂ ಕೃಷಿ ಕಾರ್ಮಿಕ ಕುಟುಂಬಗಳು ಜೀವನ ನಿರ್ವಹಣೆಗೆ ಪರದಾಡುವಂತಾಗಿದೆ. ಆದ್ದರಿಂದ ಯೋಜನೆಯಡಿ ವರ್ಷಕ್ಕೆ 200 ದಿನಗಳ ಕೆಲಸ ನೀಡುವ ಜತೆಗೆ ಪ್ರತಿದಿನ ₹1,000 ಕೂಲಿ ನಿಗದಿಪಡಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಅಲ್ಲದೆ, ಗ್ರಾಮೀಣ ಪ್ರದೇಶಗಳಲ್ಲಿ ಮಹಿಳೆಯರ ಅನುಕೂಲಕ್ಕಾಗಿ ಅಗತ್ಯವಿರುವ ಕಡೆ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಬೇಕು ಎಂದು ಆಗ್ರಹಿಸಿದರು.