ಕೊಪ್ಪಳ: ಮಿಷನ್ ಶಕ್ತಿ ಯೋಜನೆಯಡಿ ಕಾರ್ಯನಿರ್ವಹಿಸುವ ಸಖಿ ಒನ್ ಸ್ಟಾಪ್ ಸೆಂಟರ್ ಘಟಕ ಮತ್ತು ಎಲ್ಲ ಮಹಿಳಾ ಘಟಕಗಳು ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳ ಹಾಗೂ ಕಾನೂನುಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಇತರ ಇಲಾಖೆಗಳೊಂದಿಗೆ ಸಮನ್ವಯತೆ ಸಾಧಿಸಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು.
ಮಿಶನ್ ಶಕ್ತಿಯಡಿ ಬರುವ ಸಖಿ ಸ್ಟಾಪ್ ಸೆಂಟರ್ ಎಲ್ಲ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಕಚೇರಿಗೆ ಆಗಮಿಸಿ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮಹಿಳಾ ಸಬಲೀಕರಣ ಘಟಕದಲ್ಲಿನ ಸಿಬ್ಬಂದಿ ತಮ್ಮ ಕಾರ್ಯಗಳೇನು ಎಂಬುದನ್ನರಿತು ಚುರುಕಾಗಿ ಕಾರ್ಯ ನಿರ್ವಹಿಸಬೇಕು. ಸರಿಯಾಗಿ ಕಾರ್ಯನಿರ್ವಹಿಸದಿದ್ದರೆ ಅಂತಹ ಸಿಬ್ಬಂದಿಯನ್ನು ಮುಂದುವರಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು.
ಜಿಪಂ ಸಿಇಒ ವರ್ಣಿತ್ ನೇಗಿ ಮಾತನಾಡಿ, ಸಖಿ ಒನ್ ಸ್ಟಾಪ್ ಸೆಂಟರ್, ಮಹಿಳಾ ಸಹಾಯವಾಣಿ, ಮಹಿಳಾ ಸಬಲೀಕರಣ ಘಟಕಗಳ ಎಲ್ಲ ಸಿಬ್ಬಂದಿಗೆ ಸರಿಯಾದ ತರಬೇತಿ ವ್ಯವಸ್ಥೆ ಆಗಬೇಕು. ಆಯಾ ಸಿಬ್ಬಂದಿಯ ಕಾರ್ಯವೈಖರಿಯ ಬಗ್ಗೆ ಮಾಹೆವಾರು ಪರಿಶೀಲನೆ ನಡೆಸಿ, ಉತ್ತಮವಾಗಿ ಕಾರ್ಯನಿರ್ವಹಿಸಲು ಅವರಿಗೆ ಮಾರ್ಗದರ್ಶನ ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಅಮರೇಶ ಹಾವಿನ್ ಅವರಿಗೆ ನಿರ್ದೇಶನ ನೀಡಿದರು.ಸಖಿ ಒನ್ ಸ್ಟಾಪ್ ಸೆಂಟರ್‌ನಲ್ಲಿ ದೊರೆಯುವ ಸೇವೆಗಳ ಬಗ್ಗೆ ಮತ್ತು ಸಖಿ ಒನ್ ಸ್ಟಾಫ್ ಸೆಂಟರ್‌ನಲ್ಲಿ ದಾಖಲಾದ ಪ್ರಕರಣಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಸಖಿ ಸ್ಟಾಪ್ ಸೆಂಟರ್ ಅಧಿಕಾರಿ ಯಮುನಾ ಅವರು ಕಾರ್ಯ ಚಟುವಟಿಕೆ ಮಾಹಿತಿ ನೀಡಿದರು.ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ ಎಸ್. ದರಗದ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪ ಸೋಗಲದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಅನ್ನಪೂರ್ಣಾ, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ ಉಪಸ್ಥಿತರಿದ್ದರು.