ಸಂಪಾಜೆ-ಕಾಟಕೇರಿ ಹೆದ್ದಾರಿ ಡಾಂಬರೀಕರಣ 6 ತಿಂಗಳಲ್ಲಿ ಪೂರ್ಣ: ಪ್ರತಾಪ್‌ಸಿಂಹ

KannadaprabhaNewsNetwork |  
Published : Jan 02, 2024, 02:15 AM IST
ಚಿತ್ರ :1ಎಂಡಿಕೆ1 : ಸಂಪಾಜೆ-ಕಾಟಕೇರಿ ಹೆದ್ದಾರಿ ಡಾಂಬರೀಕರಣ ಕಾಮಗಾರಿಗೆ ಪ್ರತಾಪ್ ಸಿಂಹ ಚಾಲನೆ ನೀಡಿದರು.  | Kannada Prabha

ಸಾರಾಂಶ

ಸಂಪಾಜೆ-ಕಾಟಕೇರಿ 21.6 ಕಿ.ಮೀ. ಉದ್ದದ ರಾಷ್ಟ್ರೀಯ ಹೆದ್ದಾರಿ ಡಾಂಬರೀಕರಣ ಕಾಮಗಾರಿಗೆ ಸಂಸದ ಪ್ರತಾಪ್ ಸಿಂಹ ಅವರು ಸೋಮವಾರ ಚಾಲನೆ ನೀಡಿದರು. , ಸುಮಾರು 14.16 ಕೋಟಿ ರು. ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, 6 ತಿಂಗಳೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಸಂಪಾಜೆ-ಕಾಟಕೇರಿ 21.6 ಕಿ.ಮೀ. ಉದ್ದದ ರಾಷ್ಟ್ರೀಯ ಹೆದ್ದಾರಿ ಡಾಂಬರೀಕರಣ ಕಾಮಗಾರಿಗೆ ಸಂಸದ ಪ್ರತಾಪ್ ಸಿಂಹ ಅವರು ಸೋಮವಾರ ಚಾಲನೆ ನೀಡಿದರು. ಸಂಪಾಜೆಯ ಗೇಟ್ ಬಳಿ ಚಾಲನೆ ನೀಡಿ ಮಾತನಾಡಿದ ಪ್ರತಾಪ್ ಸಿಂಹ ಅವರು, ಸುಮಾರು 14.16 ಕೋಟಿ ರು. ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, 6 ತಿಂಗಳೊಳಗೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.

ಸಂಪಾಜೆಯಿಂದ ಸುಂಟಿಕೊಪ್ಪದವರೆಗೆ 21 ಕಡೆಗಳಲ್ಲಿ ತಡೆಗೋಡೆ ನಿರ್ಮಾಣ ಮಾಡಲು ಈಗಾಗಲೇ ಸರ್ಕಾರಕ್ಕೆ ಅಂದಾಜುಪಟ್ಟಿ ಸಲ್ಲಿಸಲಾಗಿದ್ದು, ಅನುಮೋದನೆ ದೊರೆಯಬೇಕಿದೆ ಎಂದು ಮಾಹಿತಿ ನೀಡಿದರು.

ಕುಶಾಲನಗರದಿಂದ ಸಂಪಾಜೆ ವರೆಗೆ ಅಪಘಾತ ವಲಯವನ್ನು ಗುರುತಿಸಲಾಗಿದ್ದು, ಪ್ರಮುಖವಾಗಿ ಬೋಯಿಕೇರಿ ಮತ್ತು ಆನೆಕಾಡು ಬಳಿ ರಸ್ತೆ ಸರಿಪಡಿಸುವ ಕಾರ್ಯಕ್ಕೆ ಚಾಲನೆ ನೀಡಲಾಗುವುದು. ಇದಕ್ಕಾಗಿ 500 ಲಕ್ಷ ರು. ಕಾಮಗಾರಿಗೆ ಸರ್ಕಾರದಿಂದ ಅನುಮೋದನೆ ದೊರೆತಿದೆ ಎಂದು ಪ್ರತಾಪ್ ಸಿಂಹ ತಿಳಿಸಿದರು. ರಸ್ತೆ ಎತ್ತರೀಕರಣ: ಕೊಡಗು ಜಿಲ್ಲೆಯ ಕುಶಾಲನಗರದಿಂದ ಸಂಪಾಜೆವರೆಗೆ ಹೆದ್ದಾರಿ ಭಾಗದಲ್ಲಿ ಸುಮಾರು 1.3 ಕಿ.ಮೀ. ಮಳೆ ನೀರು ನಿಲ್ಲುವ ಪ್ರದೇಶವನ್ನು ಗುರುತಿಸಲಾಗಿದ್ದು, ಈ ಪ್ರದೇಶವನ್ನು ವಿಸ್ತರಿಸಿ ರಸ್ತೆ ಎತ್ತರೀಕರಣಗೊಳಿಸಲು ಮುಂದಾಗಲಾಗಿದೆ. ಆ ನಿಟ್ಟಿನಲ್ಲಿ ಈ ಕಾಮಗಾರಿಗೆ ಅನುಮೋದನೆ ದೊರೆತಿದ್ದು, ಅಂದಾಜು ಪಟ್ಟಿ ಸಲ್ಲಿಸಬೇಕಿದೆ ಎಂದು ಪ್ರತಾಪ್ ಸಿಂಹ ಹೇಳಿದರು. ಹೆದ್ದಾರಿಯಲ್ಲಿ ಎರಡು ಕಡೆ ಸೇತುವೆ ನಿರ್ಮಾಣ ಮಾಡಲಾಗುತ್ತದೆ. ಹಾಗೆಯೇ 8 ಕಡೆ ಸಣ್ಣಪುಟ್ಟ ತಡೆಗೋಡೆಗಳನ್ನು ನಿರ್ಮಿಸಲಾಗುತ್ತದೆ. ಜೋಡುಪಾಲ ಬಳಿ ಹೊಸದಾಗಿ ಸೇತುವೆ ನಿರ್ಮಿಸಲಾಗುವುದು ಎಂದು ವಿವರಿಸಿದರು.

2018 ರಲ್ಲಿ ಸಂಭವಿಸಿದ ಭೂಕುಸಿತದಿಂದ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯಲ್ಲಿ 19 ತಡೆಗೋಡೆ ನಿರ್ಮಿಸಲು ಉದ್ದೇಶಿಸಲಾಗಿತ್ತು, 2019 ರಲ್ಲಿಯೂ ಸಹ ಅತಿವೃಷ್ಟಿಯಾದ ಕಾರಣ 21 ತಡೆಗೋಡೆಗಳನ್ನು ನಿರ್ಮಿಸಲಾಗುತ್ತದೆ ಎಂದು ಪ್ರತಾಪ್ ಸಿಂಹ ಅವರು ಹೇಳಿದರು.

ಮೈಸೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೆದ್ದಾರಿ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.

ಸಂಪಾಜೆ ಗ್ರಾ.ಪಂ.ಅಧ್ಯಕ್ಷ ರಮಾದೇವಿ ಬಾಲಚಂದ್ರ ಕಳಗಿ, ಪ್ರಮುಖರಾದ ನಾಗೇಶ್ ಕುಂದಲ್ಪಾಡಿ, ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಶಿವಪ್ರಸಾದ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಜಿ.ಎಚ್.ಗಿರೀಶ್, ಸಹಾಯಕ ಎಂಜಿನಿಯರ್ ಹನುಮಂತ, ಸುಧಾಕರಶೆಟ್ಟಿ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು