ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಇಲ್ಲಿನ ಅರವಿಂದ ನಗರದಲ್ಲಿರುವ ಬಿಜೆಪಿ ಕಚೇರಿ ಎದುರು ಬುಧವಾರ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.
ಹುಬ್ಬಳ್ಳಿ:
ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಇಲ್ಲಿನ ಅರವಿಂದ ನಗರದಲ್ಲಿರುವ ಬಿಜೆಪಿ ಕಚೇರಿ ಎದುರು ಬುಧವಾರ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.
ಪಶ್ಚಿಮ ಪದವೀಧರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಹ್ಯಾಟ್ರಿಕ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಶಾಸಕ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು.
ಈ ವೇಳೆ ಮಾತನಾಡಿದ ಶಾಸಕ ಅರವಿಂದ ಬೆಲ್ಲದ, ನಾಲ್ಕು ಸ್ಥಾನಗಳನ್ನು ಗೆಲ್ಲುವ ಮೂಲಕ ಎನ್‌ಡಿಎ ಅಭೂತಪೂರ್ವ ಜಯ ಸಾಧಿಸಿದೆ. ಕಾಂಗ್ರೆಸ್ ಭ್ರಷ್ಟಾಚಾರವನ್ನೇ ಪ್ರಮುಖ ಉದ್ಯೋಗವನ್ನಾಗಿಸಿಕೊಂಡಿದೆ. ನಕಾರಾತ್ಮಕ ರಾಜಕಾರಣವನ್ನು ತಿರಸ್ಕರಿಸಿ, ಅಭಿವೃದ್ಧಿ ಕಾರ್ಯಗಳಿಗೆ ಮತದಾರರು ಮತ ಹಾಕಿದ್ದಾರೆ ಎಂದು ಹೇಳಿದರು.
ಕೆಲವರು ಒಗ್ಗೂಡಿ ದೇಶವನ್ನು ಹೈಜಾಕ್ ಮಾಡಲು ಮುಂದಾಗಿದ್ದರು. ಆದರೆ, ದೇಶದ್ರೋಹಿ ಶಕ್ತಿಗಳನ್ನು ಜನರು ಸಹಿಸುವುದಿಲ್ಲ ಎಂಬುದನ್ನು ಈ ಚುನಾವಣಾ ಫಲಿತಾಂಶದ ಮೂಲಕ ದೇಶಕ್ಕೆ ಹಾಗೂ ರಾಜ್ಯಕ್ಕೆ ಮತದಾರರು ಸ್ಪಷ್ಟ ಸಂದೇಶ ನೀಡಿದ್ದಾರೆ ಎಂದು ಬೆಲ್ಲದ ಹೇಳಿದರು.
ಈ ವೇಳೆ ಶಾಸಕ ಮಹೇಶ ಟೆಂಗಿನಕಾಯಿ, ವಿಪ ಸದಸ್ಯರಾದ ಪ್ರದೀಪ ಶೆಟ್ಟರ್, ಲಿಂಗರಾಜ ಪಾಟೀಲ, ಮೇಯರ್ ದುರ್ಗಮ್ಮ ಬಿಜವಾಡ, ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಪಾಲಿಕೆ ಸದಸ್ಯ ರಾಜಣ್ಣ ಕೊರವಿ, ವಿಭಾಗ ಪ್ರಮುಖ ಜಯತೀರ್ಥ ಕಟ್ಟಿ, ಮಹೇಂದ್ರ ಕೌತಾಳ, ವೆಂಕಟೇಶ ಕಾಟವೆ, ಸಂತೋಷ ವೇರ್ಣೆಕರ, ಅಶೋಕ ವಾಲ್ಮೀಕಿ, ರಾಜು ಕೋರ್ಯಾಣಮಠ ಸೇರಿದಂತೆ ಹಲವರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.