ಶಿಕ್ಷಣದ ಜೊತೆಗೆ ಸಂಸ್ಕಾರ,ಸಂಸ್ಕೃತಿ ಹಾಗೂ ಮೌಲ್ಯ ಕಲಿಸುವ ಜವಬ್ದಾರಿ ಶಿಕ್ಷಕರ ಮೇಲಿದೆ ಎಂದು ಪಡಗೂರು ಅಡವಿ ಮಠಾಧೀಶ ಶಿವಲಿಂಗೇಂದ್ರ ಸ್ವಾಮೀಜಿ ಸಲಹೆ ನೀಡಿದರು.
ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ
ಶಿಕ್ಷಣದ ಜೊತೆಗೆ ಸಂಸ್ಕಾರ,ಸಂಸ್ಕೃತಿ ಹಾಗೂ ಮೌಲ್ಯ ಕಲಿಸುವ ಜವಬ್ದಾರಿ ಶಿಕ್ಷಕರ ಮೇಲಿದೆ ಎಂದು ಪಡಗೂರು ಅಡವಿ ಮಠಾಧೀಶ ಶಿವಲಿಂಗೇಂದ್ರ ಸ್ವಾಮೀಜಿ ಸಲಹೆ ನೀಡಿದರು.
ಪಟ್ಟಣದ ಶ್ರೀ ಮದ್ದಾನೇಶ್ವರ ಶಾಲಾ ಆವರಣದಲ್ಲಿ ಮದ್ದಾನೇಶ್ವರ ಚಾರಿಟಬಲ್ ಟ್ರಸ್ಟ್ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ, ಶಿಕ್ಷಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿದರು.
ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು.ಗುರು ಎಂಬ ಪದವೇ ಅಜ್ಞಾನವೆಂಬ ಅಂಧಕಾರ ಹೋಗಲಾಡಿಸಿ ಜ್ಞಾನದ ಬೆಳಕನ್ನು ನೀಡುತ್ತಾರೆ.ವಿದ್ಯಾರ್ಥಿಗಳಲ್ಲಿ ಜ್ಞಾನವನ್ನು ತುಂಬುವುದರ ಜತೆಗೆ ಉತ್ತಮ ವ್ಯಕ್ತಿತ್ವ ರೂಪಿಸುವ ಕೆಲಸ ಶಿಕ್ಷಕರು ಮಾಡಬೇಕು ಎಂದರು.
ಮಕ್ಕಳಿಗೆ ಸಂಸ್ಕಾರಯುತ ಹಾಗೂ ಮೌಲ್ಯಾಧಾರಿತ ಶಿಕ್ಷಣ ನೀಡಬೇಕು.ರಾಮನ ಆದರ್ಶ ಗುಣಗಳು ಸೇರಿದಂತೆ ಮಹನೀಯರ ಜೀವನ ಮೌಲ್ಯಗಳನ್ನು ಮಕ್ಕಳಿಗೆ ಪರಿಚಯಿಸಬೇಕು ಎಂದರು.
ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಪ್ರತಿಭೆ ಹಾಗೂ ಕೌಶಲ್ಯವಿದ್ದು, ಅದನ್ನು ಗುರುತಿಸಿ ಬೆಳೆಸುವ ಜವಾಬ್ದಾರಿ ಶಿಕ್ಷಕರದ್ದಾಗಿದ್ದು, ಶಿಕ್ಷಕರು ತಮ್ಮ ಮಕ್ಕಳಂತೆ ವಿದ್ಯಾರ್ಥಿಗಳನ್ನು ಕಾಣಬೇಕು ಎಂದು ಹೇಳಿದರು.
ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ಕೌಶಲ್ಯಕ್ಕೆ ಹೆಚ್ಚಿನ ಮಹತ್ವವಿದೆ.ಉದ್ಯೋಗಾವಕಾಶಗಳಲ್ಲಿಯೂ ವಿದ್ಯಾರ್ಥಿಗಳ ಕೌಶಲ್ಯ ಪರಿಗಣಿಸಲಾಗುತ್ತಿದೆ. ವಿದ್ಯಾರ್ಥಿಗಳು ತಮ್ಮಲ್ಲಿರುವ ಕೌಶಲ್ಯ ಬೆಳೆಸಿಕೊಳ್ಳಬೇಕು. ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಂಡು ನಿರಂತರ ಅಧ್ಯಯನ ಮಾಡಬೇಕು ಎಂದರು.
ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನವನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ. ಅವರಂತೆ ಆಗಾಧವಾದ ಅಧ್ಯಯನ,ಜ್ಞಾನ ಹಾಗೂ ಸರಳತೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಶಿಷ್ಯರು ಗುರುಗಳಿಗೆ ಗೌರವ ನೀಡಬೇಕು ಎಂದರು.
ಮದ್ದಾನೇಶ್ವರ ಶಾಲೆಯ ಪ್ರಾಂಶುಪಾಲ ನಟರಾಜು ಮಾತನಾಡಿ ಶಿಕ್ಷಕ ವೃತ್ತಿ ಎಂದರೆ ಕೇವಲ ಅಕ್ಷರ ಜ್ಞಾನ ನೀಡುವುದಷ್ಟೇ ಅಲ್ಲ,ಸಮಾಜದ ಭವಿಷ್ಯದ ನಾಯಕರನ್ನು ಮತ್ತು ಉತ್ತಮ ಪ್ರಜೆಗಳನ್ನು ರೂಪಿಸುವ ಅತ್ಯಂತ ಪವಿತ್ರ ಹಾಗೂ ಶ್ರೇಷ್ಠ ಕಾಯಕ ಎಂದರು.
ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕಾರ,ಮಾನವೀಯ ಮೌಲ್ಯಗಳು ಮತ್ತು ಜೀವನದ ಪಾಠಗಳನ್ನು ಕಲಿಸಿ ಸದೃಢ ಸಮಾಜವನ್ನು ನಿರ್ಮಾಣ ಮಾಡಲು ಶಿಕ್ಷಕರ ಪಾತ್ರ ದೊಡ್ಡದಿದೆ ಎಂದು ಹೇಳಿದರು.
ವಿದ್ಯಾರ್ಥಿಗಳಿಂದ ಸನ್ಮಾನ
ಸಮಾರಂಭದಲ್ಲಿ ನಿವೃತ್ತ ಶಿಕ್ಷಕರಾದ ಎಸ್.ಎಂ. ಸಿದ್ದರಾಜಪ್ಪ,ಶ್ರೀನಿವಾಸನಾಯಕ,ವೀಣಾ ಹಾಗೂ ಮುಖ್ಯ ಶಿಕ್ಷಕರಾದ ಪದ್ಮ,ದೊಡ್ಡಬಸವಯ್ಯ ಮತ್ತು ಮಹದೇಶ್ವರಸ್ವಾಮಿ ಅವರನ್ನು ವಿದ್ಯಾರ್ಥಿಗಳು ಸನ್ಮಾನಿಸಿ ಅಭಿನಂದಿಸಿದರು.
ಅಲ್ಲದೆ ಎಸ್ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸಹ ಪಡಗೂರು ಶ್ರೀ ಸೇರಿದಂತೆ ವೇದಿಕೆಯಲ್ಲಿದ್ದ ಗಣ್ಯರು ಸನ್ಮಾನಿಸಿದರು.
ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಘಟಕದ ಅಧ್ಯಕ್ಷ ಎಸ್.ಶಿವಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು.ಪ್ರೌಢಶಾಲಾ ಮುಖ್ಯ ಶಿಕ್ಷಕ ಎಂ.ಪ್ರಕಾಶ್,ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಎಚ್.ಎಂ.ಸೋಮಶೇಖರ್, ಶಾಲಾ ಶಿಕ್ಷಕರು,ವಿದ್ಯಾರ್ಥಿಗಳು, ಪೋಷಕರು ಹಾಜರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.