ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ(ಮೂಡಾ) ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ ಮೂಡ ಅಧ್ಯಕ್ಷರಾಗಿ ಸದಾಶಿವ್ ಉಳ್ಳಾಲ್ ಅಧಿಕಾರದಲ್ಲಿದ್ದರು. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾದ ಬಳಿಕ ನಿಗಮ, ಮಂಡಳಿ ಅಧಿಕಾರ ಮರು ಹಂಚಿಕೆ ವೇಳೆ ಇಲ್ಲಿ ಮೂಡಾ ಮೊದಲ ನೇಮಕ ಇದಾಗಿದೆ.
1974ರ ಆ.6ರಂದು ಜನಿಸಿದ ಅವರು ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಪದವಿ ಪಡೆದಿದ್ದಾರೆ. ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾಗೂ ಕಚೇರಿ ಉಸ್ತುವಾರಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.
ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ, ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಸಂಚಾಲಕ ಹಾಗೂ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಅಲ್ಲದೆ, ಎನ್‌ಎಸ್‌ಯುಐ ಮಂಗಳೂರು ನಗರ ಘಟಕದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.ರಾಜಕೀಯ ಕ್ಷೇತ್ರದ ಜತೆಗೆ ಸಾಮಾಜಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲೂ ಸಂತೋಷ್ ಕುಮಾರ್ ಶೆಟ್ಟಿ ಅವರು ಸಕ್ರಿಯರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್‌ನ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ, ಮಂಗಳಾ ಬ್ಯಾಡ್ಮಿಂಟನ್ ಅಸೋಸಿಯೇಷನ್‌ನ ಮಾಜಿ ಅಧ್ಯಕ್ಷರಾಗಿ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.ಬರ್ಕೆ ಫ್ರೆಂಡ್ಸ್ (ರಿ.) ಮಂಗಳೂರಿನ ಕಾರ್ಯದರ್ಶಿ, ಬರ್ಕೆ ಸ್ಪೋರ್ಟ್ಸ್ ಕ್ಲಬ್‌ನ ಮಾಜಿ ಅಧ್ಯಕ್ಷ, ಗುರ್ಜಿ ದೀಪೋತ್ಸವ ಸಮಿತಿಯ ಮಾಜಿ ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸ್ಟೂಡೆಂಟ್ ಯೂನಿಯನ್‌ನ ಸಲಹೆಗಾರರಾಗಿಯೂ ಜವಾಬ್ದಾರಿ ನಿರ್ವಹಿಸಿದ್ದಾರೆ. ಪಾಲಿಟೆಕ್ನಿಕ್ ದಕ್ಷಿಣ ಕನ್ನಡ ಜಿಲ್ಲಾ ಸ್ಟೂಡೆಂಟ್ ಯೂನಿಯನ್‌ನ ಮಾಜಿ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ.