ಬಳ್ಳಾರಿ: ಸವಿತಾ ಮಹರ್ಷಿಗಳು ಇಂದಿನ ಸಮಾಜಕ್ಕೆ ದಾರಿದೀಪವಾಗಿದ್ದಾರೆ. ಅವರ ಆಚಾರ-ವಿಚಾರಗಳನ್ನು ಮೈಗೂಡಿಸಿಕೊಂಡರೆ ಸಮಾಜದಲ್ಲಿ ಸತ್ರ್ಪಜೆಗಳಾಗಬಹುದು ಎಂದು ಸಹಾಯಕ ಆಯುಕ್ತ ಪಿ .ಪ್ರಮೋದ್ ಹೇಳಿದರು.
ಸವಿತಾ ಸಮಾಜ ಎಲ್ಲ ವರ್ಗದ ಜನರಿಗೂ ತಾರತಮ್ಯವಿಲ್ಲದೆ ಸೇವೆ ನೀಡುತ್ತಿದೆ. ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಈ ಸಮುದಾಯ ಮತ್ತಷ್ಟು ಸದೃಢವಾಗಬೇಕಿದೆ. ಪ್ರತಿಯೊಬ್ಬರೂ ತಾನು ಮಾಡುವ ವಚನ ವೃತ್ತಿಯ ಮೇಲೆ ಗೌರವ, ನಿಷ್ಠೆ ಇಟ್ಟುಕೊಂಡಾಗ ಬದುಕಿನಲ್ಲಿ ಉತ್ತುಂಗಕ್ಕೇರಲು ಸಾಧ್ಯವಿದೆ ಎಂದು ತಿಳಿಸಿದರು.
ಸವಿತಾ ಸಮಾಜದ ಬಂಧುಗಳು, ಮಹರ್ಷಿಗಳ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕು ಎಂದು ಹೇಳಿದರು.ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾದ ಶ್ರೀನಿವಾಸಮೂರ್ತಿ ಯು. ಅವರು ವಿಶೇಷ ಉಪನ್ಯಾಸ ನೀಡಿ, ಪುರಾಣ ಗ್ರಂಥಗಳ ಪ್ರಕಾರ ಸವಿತಾ ಮಹರ್ಷಿ ಎಲ್ಲ ದೇವತೆಗಳ ಆಯುಷ್ಕರ್ಮ ಸೇವೆಯನ್ನು ಮಾಡುತ್ತಿದ್ದಾರೆ ಎಂದು ಕಾಶಿ ಕ್ಷೇತ್ರದಲ್ಲಿ ದೊರೆತ ಮಹಾಗ್ರಂಥದಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಂಪ್ಲಿಯ ಜಿ.ಕೆ. ಸಿಂಧು ತಂಡದವರು ಭಕ್ತಿ ಗಾಯನ ಪ್ರಸ್ತುತ ಪಡಿಸಿದರು ಹಾಗೂ ಸಮುದಾಯದ ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಪದವಿ ಮಟ್ಟದಲ್ಲಿ ಅತ್ಯುತ್ತಮ ಶ್ರೇಣಿ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ್, ಜಿಲ್ಲಾ ಸವಿತಾ ಸಮಾಜ ಸಂಘದ ಅಧ್ಯಕ್ಷ ಸಣ್ಣಗೊಂಡ್ಲ ರಾಕೇಶ್ ಸೇರಿದಂತೆ ಸಮಾಜದ ಮುಖಂಡರು, ಜನಪ್ರತಿನಿಧಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.ಸಂಭ್ರಮದ ಮೆರವಣಿಗೆ
ಸವಿತಾ ಮಹರ್ಷಿ ಜಯಂತಿಯ ಅಂಗವಾಗಿ ಏರ್ಪಡಿಸಿದ್ದ ಮೆರವಣಿಗೆಯು ಸಂಭ್ರಮದಿಂದ ನಡೆಯಿತು. ಮೆರವಣಿಗೆಗೆ ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್ ಚಾಲನೆ ನೀಡಿದರು. ಮೆರವಣಿಗೆಯಲ್ಲಿ ಪೂರ್ಣ ಕುಂಭ ಹೊತ್ತ ಮಹಿಳೆಯರು ಹಾಗೂ ವಿವಿಧ ಸಾಂಸ್ಕೃತಿಕ ಕಲಾತಂಡಗಳು ಗಮನ ಸೆಳೆದವು. ಮೆರವಣಿಗೆಯು ನಗರದ ಡಾ. ರಾಜ್ ಕುಮಾರ್ ರಸ್ತೆಯ ಮುನ್ಸಿಪಲ್ ಕಾಲೇಜ್ ಮೈದಾನದಿಂದ ಆರಂಭವಾಗಿ ಗಡಿಗಿ ಚೆನ್ನಪ್ಪ ವೃತ್ತ, ಬೆಂಗಳೂರು ರಸ್ತೆ, ತೇರು ಬೀದಿ, ಎಚ್.ಆರ್. ಗವಿಯಪ್ಪ ವೃತ್ತದ ಮೂಲಕ ಡಾ. ಜೋಳದರಾಶಿ ದೊಡ್ಡನಗೌಡ ರಂಗಮದಿರದ ವೇದಿಕೆ ಸಭಾಂಗಣಕ್ಕೆ ತಲುಪಿ ಸಂಪನ್ನಗೊಂಡಿತು.