)
ಬೇಲೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ, ಧಾರವಾಡ ಹಾಗೂ ಬೇಲೂರು ಘಟಕದ ವತಿಯಿಂದ ವಿಶೇಷ ಸಾವಿತ್ರಿಬಾಯಿ ಫುಲೆ ಸಾಧಕಿಯರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿತ್ತು.ಪಟ್ಟಣದ ಬಸ್ ನಿಲ್ದಾಣದ ಎದುರಿರುವ ಅಂಬೇಡ್ಕರ್ ಭವನದಲ್ಲಿ ನಡೆದ ಸಮಾರಂಭವನ್ನು ಶಾಸಕ ಎಚ್.ಕೆ. ಸುರೇಶ್ ಉದ್ಘಾಟಿಸಿ ಮಾತನಾಡಿ, ಮಹಿಳೆಯರು ಇಂದು ಶಿಕ್ಷಣ, ರಾಜಕೀಯ, ಸಮಾಜಸೇವೆ, ಆರೋಗ್ಯ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಮಹತ್ತರ ಸಾಧನೆ ಮಾಡುತ್ತಿರುವುದು ಸಮಾಜದ ಅಭಿವೃದ್ಧಿಗೆ ಅತ್ಯಂತ ಶ್ರೇಯಸ್ಕರ ಸಂಗತಿ. ಮಹಿಳಾ ಶಿಕ್ಷಣದ ಮಹತ್ವವನ್ನು ದೇಶಕ್ಕೆ ಪರಿಚಯಿಸಿದ ಮಹಾನ್ ಸಮಾಜ ಸುಧಾರಕಿಯಾದ ಸಾವಿತ್ರಿಬಾಯಿ ಫುಲೆ ಅವರ ಸೇವೆ ಮತ್ತು ಹೋರಾಟ ಆ ಕಾಲಘಟ್ಟದಲ್ಲಿ ಮಹಿಳೆಯರಿಗೆ ಶಿಕ್ಷಣವೇ ಸಿಗದ ಪರಿಸ್ಥಿತಿಯಲ್ಲಿ ಶಾಲೆಗಳನ್ನು ಆರಂಭಿಸಿ ಮಹಿಳೆಯರ ಬದುಕಿಗೆ ಹೊಸ ದಾರಿ ತೋರಿದ ಮಹಾನ್ ವ್ಯಕ್ತಿತ್ವ ಅವರದಾಗಿದೆ ಎಂದು ಹೇಳಿದರು.ಪುರಸಭೆ ಅಧ್ಯಕ್ಷೆ ಉಷಾ ಸತೀಶ್ ಮಾತನಾಡಿ, ಮಹಿಳೆಯರಿಗೆ ಶಿಕ್ಷಣ ಮತ್ತು ಅವಕಾಶ ದೊರೆತರೆ ಸಮಾಜದಲ್ಲಿ ಮಹತ್ತರ ಬದಲಾವಣೆ ಸಾಧ್ಯವಾಗುತ್ತದೆ. ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ತಮ್ಮ ಸಾಮರ್ಥ್ಯವನ್ನು ತೋರಿಸುತ್ತಿದ್ದು, ಇಂತಹ ಕಾರ್ಯಕ್ರಮಗಳು ಮಹಿಳೆಯರ ಸಾಧನೆಯನ್ನು ಗೌರವಿಸುವುದಕ್ಕೆ ಸಹಕಾರಿ ಎಂದರು.ಜ್ಯೋತಿಬಾಯಿ ಫುಲೆ ಸಂಘದ ತಾಲೂಕು ಅಧ್ಯಕ್ಷೆ ಸುಧಾ ಎಚ್.ಡಿ ಮಾತನಾಡಿ, ಸಮಾಜದಲ್ಲಿ ಮಹಿಳೆಯರಿಗೆ ಶಿಕ್ಷಣ ಮತ್ತು ಸಮಾನ ಹಕ್ಕುಗಳನ್ನು ನೀಡುವಲ್ಲಿ ಸಾವಿತ್ರಿಬಾಯಿ ಫುಲೆ ಹಾಗೂ ಜ್ಯೋತಿಬಾಯಿ ಫುಲೆ ಅವರ ಕೊಡುಗೆ ಅಪಾರವಾಗಿದೆ. ಮಹಿಳೆಯರು ಆತ್ಮವಿಶ್ವಾಸದಿಂದ ಮುಂದೆ ಬರಬೇಕು ಮತ್ತು ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಮುಂದಾಗಬೇಕು ಎಂದು ಹೇಳಿದರು.ಈ ಸಂದರ್ಭದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ಶಿವಮರಿಯಪ್ಪ, ಎಚ್.ಜಿ, ಅಬಕಾರಿ ನಿರೀಕ್ಷಕ ಅಪೂರ್ವ, ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಸರೋಜ ಕೆ.ಟಿ, ಶಕುಂತಲಾ ಎಚ್.ಇ, ಸಂಘದ ಖಜಾಂಚಿ ಪಲ್ಲವಿ, ಡಾ. ಸುಮನಾ ಈಶ್ವರ ಪ್ರಸಾದ್, ಸಹಾಯಕ ಪ್ರಾಧ್ಯಾಪಕಿ ಹಿಮ್ಸ್ ಹಾಸನ ಇತರರು ಕಾರ್ಯಕ್ರಮದಲ್ಲಿ ಇದ್ದರು. ಶಿಕ್ಷಣ, ಸಮಾಜಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರಿಗೆ ಸಾವಿತ್ರಿಬಾಯಿ ಫುಲೆ ಸಾಧಕಿಯರ ಪ್ರಶಸ್ತಿ ನೀಡಿ ಗೌರವಿಸಲಾಯಿತು.