ಹೊಸಪೇಟೆ: ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ-ಎಸ್ಟಿ ಜಾಗ್ರತ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ ಬೆಂಗಳೂರಿನ ಅರಮನೆ ಮೈದಾನದ ಶೃಂಗಾರ್ ಪ್ಯಾಲೇಸ್ ಗೇಟ್ ನಂ. 8ರಲ್ಲಿ ಆ. 28ರಂದು ಬೆಳಗ್ಗೆ 10.30ಕ್ಕೆ ನಡೆಯಲಿದ್ದು, ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ನೌಕರರ ಸಮನ್ವಯ ಸಮಿತಿ ಜಿಲ್ಲಾಧ್ಯಕ್ಷ ಜಿ. ಶಿವಕುಮಾರ್ ಕರೆ ನೀಡಿದ್ದಾರೆ.
ಮಧ್ಯಾಹ್ನ 2 ಗಂಟೆಗೆ ಸಂವಿಧಾನದ ಆಶಯಗಳು ಮತ್ತು ಎಸ್ಸಿ, ಎಸ್ಟಿ ಅಧಿಕಾರಿ, ನೌಕರರ ಪಾತ್ರ ಕುರಿತು ವಿಚಾರ ಸಂಕಿರಣ ನಡೆಯಲಿದೆ. ಮಧ್ಯಾಹ್ನ 3.30ಕ್ಕೆ ಸಮಾರೋಪ ಸಮಾರಂಭದಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮತ್ತು ಛಲವಾದಿ ನಾರಾಯಣಸ್ವಾಮಿ ಭಾಗವಹಿಸುವರು. ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ನೌಕರರ ಸಮನ್ವಯ ಸಮಿತಿ ಅಧ್ಯಕ್ಷ ಡಿ. ಶಿವಶಂಕರ್ ಅಧ್ಯಕ್ಷತೆ ವಹಿಸುವರು ಎಂದು ಹೇಳಿದರು.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಮಂಜೂರಾಗಿರುವ 7.75 ಲಕ್ಷ ಹುದ್ದೆಗಳ ಪೈಕಿ ಸುಮಾರು 4 ಲಕ್ಷ ಸರ್ಕಾರಿ ನೌಕರರು ಮಾತ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇದರಲ್ಲಿ ಸುಮಾರು 80 ಸಾವಿರಕ್ಕೂ ಹೆಚ್ಚು ಪರಿಶಿಷ್ಟ ಜಾತಿ, ಅಂದಾಜು 20 ಸಾವಿರಕ್ಕೂ ಹೆಚ್ಚು ಪರಿಶಿಷ್ಟ ಪಂಗಡಗಳ ನೌಕರರು ವಿವಿಧ ಇಲಾಖೆಗಳಲ್ಲಿ ವಿವಿಧ ಹಂತಗಳಲ್ಲಿ ಸರ್ಕಾರದ ಕೆಲಸ ನಿರ್ವಹಿಸುತ್ತಿದ್ದಾರೆ ಎಂದರು.ರಾಜ್ಯದಲ್ಲಿ ಸುಮಾರು 2,84,724ಕ್ಕೂ ಹೆಚ್ಚು ಹುದ್ದೆಗಳು ಖಾಲಿಯಿದ್ದು, ತಕ್ಷಣವೇ ಖಾಲಿ ಇರುವ ಹುದ್ದೆಗಳನ್ನು ಸರ್ಕಾರ ತುಂಬಿಕೊಳ್ಳಬೇಕು. ಎಸ್ಸಿ ಮತ್ತು ಎಸ್ಟಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು ನಿಲ್ಲಬೇಕು ಎಂಬುದೂ ಸೇರಿ ವಿವಿಧ ಬೇಡಿಕೆಗಳ ಕುರಿತು ಐಕ್ಯತಾ ಸಮಾವೇಶದಲ್ಲಿ ಚರ್ಚಿಸಲಾಗುತ್ತದೆ ಎಂದು ಅವರು ತಿಳಿಸಿದರು.