ಮಂಗಳೂರು: ಸಹಕಾರ ಕ್ಷೇತ್ರಕ್ಕೆ ಆದರ್ಶವಾಗಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್) ೨೦೨೪-೨೫ನೇ ಸಾಲಿನಲ್ಲಿ ಸಾರ್ವಕಾಲಿಕ ಗರಿಷ್ಠ ೧೧೦.೪೧ ಕೋಟಿ ರು. ಲಾಭ ಗಳಿಸಿದ್ದು, ತನ್ನ ಸದಸ್ಯ ಸಂಘಗಳಿಗೆ ಶೇ.೧೦ ಡಿವಿಡೆಂಡ್‌ನ್ನು ಬ್ಯಾಂಕಿನ ಅಧ್ಯಕ್ಷ ‘ಸಹಕಾರ ರತ್ನ’ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಘೋಷಣೆ ಮಾಡಿದ್ದಾರೆ.
ಹೊಸತನದ ಬ್ಯಾಂಕಿಂಗ್ ವ್ಯವಸ್ಥೆಯನ್ನು ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅಳವಡಿಸಿ ಗ್ರಾಹಕರಿಗೆ ಉತ್ಕೃಷ್ಟ ಸೇವೆಯನ್ನು ಬ್ಯಾಂಕ್ ನೀಡುತ್ತಿದೆ. ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ಇಂಟರ್‌ನೆಟ್, ಕೋರ್ ಬ್ಯಾಂಕಿಂಗ್‌ನಂತಹ ಉನ್ನತ ಸೇವೆಯು ಬ್ಯಾಂಕಿನ ೧೧೩ ಶಾಖೆಗಳಲ್ಲಿ ದೊರೆಯುತ್ತಿದೆ. ಮೊಬೈಲ್ ಆ್ಯಪ್, ಟ್ಯಾಬ್ ಬ್ಯಾಂಕಿಂಗ್‌ನಂತಹ ವಿನೂತನ ವ್ಯವಸ್ಥೆಯನ್ನು ಗ್ರಾಹಕರಿಗೆ ಪರಿಚಯಿಸಿದೆ. ಮುಂದಿನ ದಿನಗಳಲ್ಲಿ “ಇಂಟರ್ ಬ್ಯಾಂಕ್ ಮೊಬೈಲ್ ಪೇಮೆಂಟ್ ಸಿಸ್ಟಮ್” ಹಾಗೂ “ಯುನಿಫೈಡ್ ಪೇಮೆಂಟ್ ಇಂಟರ್‌ಫೇಸ್ (ಯುಪಿಐ)” ಸೇವೆಯನ್ನು ರೂಪಿಸಲು ಬ್ಯಾಂಕ್ ಮುಂದಾಗಿದೆ. ವರದಿ ವರ್ಷದಲ್ಲಿ ೧೦ ಹೊಸ ಶಾಖೆಗಳನ್ನು ತೆರೆಯುವ ಯೋಜನೆಯನ್ನು ಬ್ಯಾಂಕ್ ಹಮ್ಮಿಕೊಂಡಿದೆ ಎಂದು ಡಾ.ಎಂ.ಎನ್.ಆರ್. ತಿಳಿಸಿದರು.
ಗುರಿ ಮೀರಿದ ಸಾಧನೆ:ಸುದೀರ್ಘ ಕಾಲ ಸಾರ್ವಜನಿಕ ಸೇವೆಯಲ್ಲಿರುವ ಎಸ್‌ಸಿಡಿಸಿಸಿ ಬ್ಯಾಂಕ್ ವರದಿ ವರ್ಷದಲ್ಲಿ ಎಲ್ಲ ವ್ಯವಹಾರಗಳಲ್ಲೂ ಗುರಿ ಮೀರಿದ ಸಾಧನೆ ಮಾಡಿದೆ. ವರದಿ ವರ್ಷದಲ್ಲಿ ಒಟ್ಟು ೧೭೩೬೬.೬೮ ಕೋಟಿ ರು. ವ್ಯವಹಾರ ಸಾಧಿಸುವ ಮೂಲಕ ಗುರಿ ಮೀರಿದ ಸಾಧನೆಗೈದಿದೆ. ವಾಣಿಜ್ಯ ಬ್ಯಾಂಕುಗಳಲ್ಲಿ ಠೇವಣಾತಿ ಸಂಗ್ರಹಣೆಯಲ್ಲಿ ಪೈಪೋಟಿ ಇದ್ದರೂ ಬ್ಯಾಂಕ್ ೧೧೩ ಶಾಖೆಗಳ ಮೂಲಕ ಒಟ್ಟು ೭೮೮೨.೭೬ ಕೋಟಿ ರು. ಠೇವಣಿ ಸಂಗ್ರಹಿಸಿ, ಅತೀ ಹೆಚ್ಚು ಠೇವಣಿ ಸಂಗ್ರಹಿಸಿದ ರಾಜ್ಯದ ಪ್ರಥಮ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಎನ್ನುವ ಕೀರ್ತಿಗೆ ಪಾತ್ರವಾಗಿದೆ ಎಂದರು.
ಕೃಷಿ ಸಾಲ ಮರುಪಾವತಿಯಲ್ಲಿ ರಾಷ್ಟ್ರೀಯ ದಾಖಲೆ:
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ವಸಹಾಯ ಗುಂಪುಗಳ ಸಂಘಟನೆಯಲ್ಲೂ ಬ್ಯಾಂಕ್ ಮುಂಚೂಣಿಯಲ್ಲಿದೆ. ಈ ಬ್ಯಾಂಕ್ ಒಟ್ಟು ೩೪,೬೨೧ ಸ್ವಸಹಾಯ ಗುಂಪುಗಳನ್ನು ವಿವಿಧ ಸಹಕಾರ ಸಂಘಗಳ ಜೋಡಣೆಯ ಮೂಲಕ ರಚಿಸಿಕೊಂಡಿದೆ. ಈ ಗುಂಪುಗಳ ಒಟ್ಟು ಉಳಿತಾಯ ೧೭೪.೩೧ ಕೋಟಿ ರು., ಒಟ್ಟು ೩೪,೬೧೩ ಸ್ವಸಹಾಯ ಗುಂಪುಗಳಿಗೆ ಸಾಲ ಸಂಯೋಜಿಸಲಾಗಿದ್ದು, ಇದರಲ್ಲಿ ೪೯೭.೩೬ ಕೋಟಿ ರು. ಸಾಲ ಹೊರಬಾಕಿ ಇರುತ್ತದೆ.
ಜನಪರ ಯೋಜನೆಗಳೊಂದಿಗೆ ಸಹಕಾರಿ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ದೇಶದ ಗಮನ ಸೆಳೆದಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸರ್ವಾಂಗೀಣ ನಿರ್ವಹಣೆಗೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ೨೩ ಬಾರಿ ದೊರೆತಿರುವುದು ಬ್ಯಾಂಕ್‌ನ ಕಾರ್ಯಸಾಧನೆಗೆ ಸಂದ ಪುರಸ್ಕಾರ. ಸ್ವಸಹಾಯ ಗುಂಪುಗಳ ನಿರ್ವಹಣೆಗೂ ನಬಾರ್ಡ್ ಪ್ರಶಸ್ತಿ ೧೯ ಬಾರಿ ಬ್ಯಾಂಕಿಗೆ ದೊರೆತಿದೆ. ವರದಿ ವರ್ಷದಲ್ಲಿ ಅಟಲ್ ಪಿಂಚಣಿ ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಬ್ಯಾಂಕಿಗೆ “ಎಪಿವೈ ರಾಷ್ಟ್ರೀಯ ಪ್ರಶಸ್ತಿ” ನಾಲ್ಕನೇ ಬಾರಿ ಬಂದಿದೆ ಎಂದು ಡಾ.ರಾಜೇಂದ್ರ ಕುಮಾರ್ ತಿಳಿಸಿದರು.
ಈ ಸಂದರ್ಭದಲ್ಲಿ ೨೦೨೪-೨೫ನೇ ಸಾಲಿನಲ್ಲಿ ಶೇ.೧೦೦ರ ವಸೂಲಾತಿಯಲ್ಲಿ ಸಾಧನೆಗೈದ ೧೭ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಪ್ರಶಸ್ತಿ ಪತ್ರದೊಂದಿಗೆ ಗೌರವಾರ್ಪಣೆ ಮಾಡಲಾಯಿತು. ಲೆಕ್ಕ ಪರಿಶೋಧನಾ “ಅ” ವರ್ಗದ ೪ ಮತ್ತು “ಬಿ” ವರ್ಗದ ೩ ಅತ್ಯುತ್ತಮ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ೨೦೨೪-೨೫ನೇ ಸಾಲಿನ ಜಿಲ್ಲಾ ಬ್ಯಾಂಕಿನ ಪ್ರಶಸ್ತಿ ಪ್ರದಾನ ಮಾಡಲಾಯಿತು.
ವರದಿ ವರ್ಷದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕಿನ ೧೦ ಸಿಬ್ಬಂದಿ ಹಾಗೂ ಪ್ರಾಥಮಿಕ ಸಹಕಾರಿ ಸಂಘಗಳ ೧೦ ಮಂದಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ನಿವೃತ್ತಿ ಹೊಂದಿದ್ದು, ಇವರಿಗೆ ಬ್ಯಾಂಕಿನಿಂದ ತಲಾ ೫೦,೦೦೦ ರು. ನೀಡಿ ಗೌರವಿಸಲಾಯಿತು.
ಬ್ಯಾಂಕಿನ ನಿರ್ದೇಶಕ ಟಿ.ಜಿ. ರಾಜಾರಾಮ್ ಭಟ್ ಸ್ವಾಗತಿಸಿದರು. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ. ಗೋಪಾಲಕೃಷ್ಣ ಭಟ್ ನಿರೂಪಿಸಿ, ವಂದಿಸಿದರು.