ಕನ್ನಡಪ್ರಭ ವಾರ್ತೆ ವಿಜಯಪುರಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಕುರಿತಾಗಿ ದತ್ತಾಂಶ ಸಂಗ್ರಹಣಾ ಸಮೀಕ್ಷೆ ವೇಳೆ ನಿಖರವಾಗಿ ಮಾಹಿತಿ ಸಂಗ್ರಹಿಸಬೇಕು. ಜಿಲ್ಲಾದ್ಯಂತ ಮೇ ೧೭ರ ವರೆಗೆ ೧೨ ದಿನಗಳ ಕಾಲ ಪರಿಶಿಷ್ಟ ಜಾತಿಗಳ ಮನೆ-ಮನೆಗೆ ಭೇಟಿ ನೀಡಿ ಸಮೀಕ್ಷೆ ಕಾರ್ಯದಲ್ಲಿ ಗೊಂದಲ ಮಾಡಿಕೊಳ್ಳದೆ ಯಶಸ್ವಿಯಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚಿಸಿದರು.ನಗರದ ಜಿಲ್ಲಾಧಿಕಾರಿಗಳ ಕೇಸ್ವಾನ ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿಗಳ ದತ್ತಾಂಶ ಸಮೀಕ್ಷೆ ಸಭೆಯಲ್ಲಿ ಮಾತನಾಡಿದ ಅವರು, ಸಮೀಕ್ಷಾ ಕಾರ್ಯಕ್ಕೆ ನಿಯೋಜಿತರು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ನಿಖರ ಮಾಹಿತಿ ಸಂಗ್ರಹಿಸಬೇಕು. ಈ ಕುರಿತಂತೆ ಗ್ರಾಮ ಮಟ್ಟದಲ್ಲಿ ಡಂಗೂರ ಸಾರುವ ಮೂಲಕ ಜಿಲ್ಲೆಯ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಬಿಲ್‌ಕಲೆಕ್ಟರ್, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಸಮೀಕ್ಷೆದಾರರರೊಂದಿಗೆ ಹಾಜರಿದ್ದು, ಸಮೀಕ್ಷಾ ಕಾರ್ಯಕ್ಕೆ ಸಹಕಾರ ನೀಡುವಂತೆ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ವಾಹನಗಳ ಮೂಲಕ ಪ್ರಚಾರ ಕೈಗೊಳ್ಳಬೇಕು ಎಂದರು.
ಯಾವುದೇ ಕುಟುಂಬ ಸಮೀಕ್ಷೆಯಿಂದ ಕೈ ಬಿಟ್ಟು ಹೋಗಬಾರದು. ಎಲ್ಲ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಸಮೀಕ್ಷೆಗೆ ನಿಯೋಜಿತರು ಪರಸ್ಪರ ಸಮನ್ವಯತೆ ಹಾಗೂ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಿದರು. ಉಪವಿಭಾಗಾಧಿಕಾರಿಗಳು ಸಭೆ ನಡೆಸಿ ಅಗತ್ಯ ಸಲಹೆ ನೀಡುವ ಮೂಲಕ ಸಮೀಕ್ಷೆ ಕಾರ್ಯ ಯಶಸ್ವಿಗೊಳಿಸುವಂತೆ ಸೂಚಿಸಿದರು. ಸಮೀಕ್ಷೆ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲಾಗುವುದು. ಮೂರು ಹಂತಗಳಲ್ಲಿ ಸಮೀಕ್ಷೆ ಕಾರ್ಯ ನಡೆಯಲಿದೆ. ಮೇ.೫ ರಿಂದ ೧೭ ರವರೆಗೆ ಪರಿಶಿಷ್ಟ ಜಾತಿಯ ಮನೆ-ಮನೆಗೆ ಭೇಟಿ ನೀಡುವ ಮೂಲಕ, ಮೇ-೧೯ ರಿಂದ ೨೧ ರವರೆಗೆ ಮತಗಟ್ಟೆ ಪ್ರದೇಶವಾರು ವಿಶೇಷ ಶಿಬಿರಗಳ ಮೂಲಕ ಸಮೀಕ್ಷೆ ನಡೆಸಲಾಗುವುದು. ಮೇ.೧೯ ರಿಂದ ೨೩ರವರೆಗೆ ಆನ್ ಲೈನ್ ಮೂಲಕ ಸ್ವಯಂ ಘೋಷಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.ಈಗಾಗಲೇ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಂಟ್ರೋಲ್ ರೂಂ ಸ್ಥಾಪಿಸಲಾಗಿದ್ದು, ಸಹಾಯವಾಣಿ ಸಂಖ್ಯೆ ೦೮೩೫೨-೨೫೫೨೪೪ ಸಂಪರ್ಕಿಸುವಂತೆ ತಿಳಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಇಂಡಿ ಉಪ ವಿಭಾಗಾಧಿಕಾರಿ ಅನುರಾಧಾ ವಸ್ತ್ರದ, ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ವಿಡಿಎ ಆಯುಕ್ತ ರಾಜಶೇಖರ ಡಂಬಳ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬದ್ರುದ್ದೀನ ಸೌದಾಗರ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಪುಂಡಲಿಕ ಮಾನ ಉಪಸ್ಥಿತರಿದ್ದರು.