ಕನ್ನಡಪ್ರಭ ವಾರ್ತೆ ಮಡಿಕೇರಿ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ನಗರಸಭೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಪದವಿ ಪೂರ್ವ ಶಿಕ್ಷಣ, ಕಾಲೇಜು ಶಿಕ್ಷಣ ಇಲಾಖೆ ಹಾಗೂ ಸರ್ವೋದಯ ಸಮಿತಿ ಇವರ ಸಹಕಾರದಲ್ಲಿ ಗಾಂಧೀಜಿ ಜಯಂತಿ ಆಚರಿಸಲಾಗುತ್ತಿದೆ.
ವಿವಿಧ ವಿಷಯಗಳ ಕುರಿತು ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಣ ಹಾಗೂ ಪದವಿ-ಸ್ನಾತಕೋತ್ತರ ಪದವಿಗಳ ಹಂತದ ವಿದ್ಯಾರ್ಥಿಗಳಿಗೆ ಒಟ್ಟು 3 ವಿಭಾಗಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ವಿವಿಧ ಇಲಾಖೆಗಳ ಸಹಕಾರದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿದೆ.ವಿಜೇತರಿಗೆ ರಾಜ್ಯ ಮಟ್ಟದಲ್ಲಿ ಪ್ರಥಮ 31 ಸಾವಿರ ರು., ದ್ವಿತೀಯ 21 ಸಾವಿರ ರು. ಮತ್ತು ತೃತೀಯ 11 ಸಾವಿರ ರು. ಹಾಗೂ ಜಿಲ್ಲಾ ಮಟ್ಟದಲ್ಲಿ ಪ್ರಥಮ 3 ಸಾವಿರ ರು. ದ್ವಿತೀಯ 2 ಸಾವಿರ ರು., ಮತ್ತು ತೃತೀಯ 1 ಸಾವಿರ ರು. ಬಹುಮಾನ ನೀಡಲಾಗುತ್ತದೆ.
ಪದವಿ ಪೂರ್ವ ಶಿಕ್ಷಣ ವಿಭಾಗ: 1)ಮಹಾತ್ಮ ಗಾಂಧೀಜಿ ಹಾಗೂ ಪ್ರಜಾಪ್ರಭುತ್ವ, 2) ದೇಶದ ಕಳಂಕವಾದ ಅಸ್ಪೃಶ್ಯತೆ ನಿವಾರಿಸುವಲ್ಲಿನ ಗಾಂಧೀಜಿಯವರ ಪ್ರಯೋಗಗಳು, 3) ಗಾಂಧೀಜಿಯವರನ್ನು ಜಗತ್ತು ಗ್ರಹಿಸಿದ ರೀತಿ, 4) ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ಬಗೆ, ಪದವಿ ಪೂರ್ವ ಶಿಕ್ಷಣ ವಿಭಾಗದ ವಿದ್ಯಾರ್ಥಿಗಳು ಈ ನಾಲ್ಕು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು 1500 ಪದಗಳಿಗೆ ಮೀರದಂತೆ ಪ್ರಬಂಧ ಬರೆಯಬೇಕು.
ಪ್ರತಿ ವಿಭಾಗದಲ್ಲಿನ ಅತ್ಯುತ್ತಮವಾದ ಮೂರು ಪ್ರಬಂಧಗಳಿಗೆ ಅ.2ರಂದು ಜಿಲ್ಲಾ ಮಟ್ಟದ ಗಾಂಧೀ ಜಯಂತಿ ದಿನಾಚರಣೆ ಸಂದರ್ಭದಲ್ಲಿ ಬಹುಮಾನ ನೀಡಿ ಪ್ರಬಂಧ ರಚನೆಕಾರರಿಗೆ ಗೌರವಿಸಲಾಗುವುದು.
‘ಆಯಾಯ ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಣ ಹಾಗೂ ಪದವಿ-ಸ್ನಾತಕೋತ್ತರ ಪದವಿ ಹಂತದಲ್ಲಿ ಪ್ರಬಂಧ ಸ್ಪರ್ಧೆ ಏರ್ಪಡಿಸಿ, ಸಂಬಂಧಪಟ್ಟ ಇಲಾಖೆಗಳ ಮುಖ್ಯಸ್ಥರು ತಾಲೂಕು ಮಟ್ಟದಲ್ಲಿ ಮೌಲ್ಯಮಾಪನ ಮಾಡಿ ಪ್ರತಿ ವಿಭಾಗದಿಂದ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ಮೂವರ ಪ್ರಬಂಧಗಳನ್ನು ಆ.30 ರೊಳಗೆ: ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸ್ಟೀವರ್ಟ್ ಹಿಲ್ ರಸ್ತೆ, ಮಡಿಕೇರಿ ಇಲ್ಲಿಗೆ ಕಳುಹಿಸಬೇಕು.ಪ್ರಬಂಧಕಾರರ ಹೆಸರು, ವಿಳಾಸ ಮತ್ತು ಮೊಬೈಲ್ ಸಂಖ್ಯೆ ನಮೂದಿಸಿರಬೇಕು. ಪ್ರಬಂಧವು ಈ ಮೊದಲು ಎಲ್ಲಿಯೂ ಪ್ರಕಟವಾಗಿರಬಾರದು. ಆಯ್ದ ಪ್ರಬಂಧಗಳ ಪ್ರಕಟಣೆಯ ಹಕ್ಕನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊಂದಿರುತ್ತದೆ.