ಎಸ್ಸಿಎಸ್ಪಿ, ಟಿಎಸ್ಪಿ ಅನುದಾನ ಪೂರ್ಣಪ್ರಮಾಣದಲ್ಲಿ ವ್ಯಯಿಸಿ: ಜಿಲ್ಲಾಧಿಕಾರಿ ಕೆ.ನಾಗೇಂದ್ರ ಪ್ರಸಾದ

KannadaprabhaNewsNetwork |  
Published : Nov 11, 2025, 02:45 AM IST
ಬಳ್ಳಾರಿ ಜಿಲ್ಲೆಯಲ್ಲಿ ಎಸ್ಸಿ, ಎಸ್ಟಿ ಮತ್ತು ಟಿಎಸ್ಪಿ ಯೋಜನೆ ಕಾರ್ಯಕ್ರಮಗಳ ಅನುಷ್ಠಾನ ಕುರಿತು ಬಳ್ಳಾರಿ ಡಿಸಿ ಕಚೇರಿಯಲ್ಲಿ ಜರುಗಿದ ಪ್ರಗತಿ ಪರಿಶೀಲನೆಯಲ್ಲಿ ಜಿಲ್ಲಾಧಿಕಾರಿ ಕೆ.ನಾಗೇಂದ್ರ ಪ್ರಸಾದ್ ಭಾಗವಹಿಸಿ, ಯೋಜನೆಯ ಅನುಷ್ಠಾನಕ್ಕೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.  | Kannada Prabha

ಸಾರಾಂಶ

ಅಧಿಕಾರಿಗಳು ಅವರಿಗಾಗಿಯೇ ಪೂರ್ಣ ಪ್ರಮಾಣದಲ್ಲಿ ವ್ಯಯಿಸಬೇಕು.

ಬಳ್ಳಾರಿ: ಪರಿಶಿಷ್ಟರ ಆರ್ಥಿಕ ಸ್ಥಿತಿ ಸುಧಾರಣೆಯಾಗಲು, ಅವರ ಪ್ರಮಾಣಕ್ಕನುಸಾರವಾಗಿ ರಾಜ್ಯ ಸರ್ಕಾರವು ಆಯವ್ಯಯದಲ್ಲಿ ವಿಶೇಷ ಅನುದಾನ ಮೀಸಲಿಡುತ್ತಿದ್ದು, ಅಧಿಕಾರಿಗಳು ಅವರಿಗಾಗಿಯೇ ಪೂರ್ಣ ಪ್ರಮಾಣದಲ್ಲಿ ವ್ಯಯಿಸಬೇಕು ಎಂದು ಜಿಲ್ಲಾಧಿಕಾರಿ ಕೆ. ನಾಗೇಂದ್ರ ಪ್ರಸಾದ ಹೇಳಿದರು.

ಜಿಲ್ಲೆಯಲ್ಲಿ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಯೋಜನೆ ಕಾರ್ಯಕ್ರಮಗಳ ಅನುಷ್ಠಾನ ಕುರಿತು ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಪ್ರಗತಿ ಪರಿಶೀಲನೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳ ವೈಯಕ್ತಿಕ ಅಭಿವೃದ್ಧಿಗಾಗಿ ಅನುಷ್ಠಾನ ಮಾಡುವ ಕಾರ್ಯಕ್ರಮಗಳಿಗೆ ಅನುದಾನ ಹಂಚಿಕೆ ಮಾಡಲಾಗುತ್ತದೆ. ಅವರನ್ನು ಮುನ್ನಲೆಗೆ ತರಲು ಅಧಿಕಾರಿಗಳು ಪ್ರಾಮಾಣಿಕವಾಗಿ ಸೌಲಭ್ಯ ವಿತರಿಸಿ ಅನುದಾನ ವೆಚ್ಚ ಮಾಡಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿನ ಪರಿಶಿಷ್ಟ ರೈತರ ಮಾಹಿತಿ ನೀಡಬೇಕು. ಕೃಷಿ, ತೋಟಗಾರಿಕೆ ಇಲಾಖೆ ವತಿಯಿಂದ ಎಸ್ಸಿಎಸ್ಪಿ, ಟಿಎಸ್ಪಿ ಅನುದಾನದಡಿ ಅನುಷ್ಠಾನಗೊಳ್ಳುವ ವಿವಿಧ ಸೌಲಭ್ಯ ಮತ್ತು ಉಪಕರಣಗಳನ್ನು ಯುವ ರೈತರಿಗೆ ವಿತರಿಸಬೇಕು. ಅವರಿಗೆ ಪ್ರೋತ್ಸಾಹ ನೆರವು ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಗಳಲ್ಲಿ ಎಸ್ಸಿಎಸ್ಪಿ, ಟಿಎಸ್ಪಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುವುದು. ಇದರ ಮೇಲ್ವಿಚಾರಣೆಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಮೇಲ್ವಿಚಾರಣಾ ಸಮಿತಿ ರಚಿಸಿ, ಪ್ರಗತಿ ನಡೆಸಲಾಗುವುದು. ಕೊನೆಯಲ್ಲಿ ರಾಜ್ಯಮಟ್ಟದ ಎಸ್ಸಿಎಸ್ಪಿ ಟಿಎಸ್ಪಿ ಅನುದಾನ ಕುರಿತು ಪರಿಶೀಲನೆಯಾಗಲಿದೆ. ಹಾಗಾಗಿ ಪೂರಕ ಮಾಹಿತಿ ಇಟ್ಟುಕೊಳ್ಳಬೇಕು ಎಂದು ನೋಡಲ್ ಅಧಿಕಾರಿ ಆದ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಿದರು.

ಬಳಕೆಯಾಗದ ಅನುದಾನದ ಮರುಹಂಚಿಕೆ:

ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಯೋಜನೆಯಡಿ ಹಂಚಿಕೆ ಮಾಡಿರುವ ಮೊತ್ತವು ಖರ್ಚಾಗದೇ ಉಳಿದ ಸಂದರ್ಭದಲ್ಲಿ ಮಾರ್ಚ್ ಅಂತ್ಯದೊಳಗೆ ಅನುದಾನ ಖರ್ಚು ಮಾಡಬೇಕು. ಇಲ್ಲವಾದಲ್ಲಿ ಲೆಕ್ಕ ಪರಿಶೋಧನೆಯಾದ ಬಳಿಕ ಅದರ ಮುಂದಿನ ಹಣಕಾಸು ವರ್ಷಕ್ಕೆ ರಾಜ್ಯ ಸರ್ಕಾರದಿಂದ ಸೇರ್ಪಡೆಯಾಗುತ್ತದೆ. ಆದರೆ ಕೇಂದ್ರದ ಹಣ ಮರಳುವುದಿಲ್ಲ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಸ್ಪಷ್ಟಪಡಿಸಿದರು.

ಅಧಿಕಾರಿಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪಯೋಜನೆಯಡಿ ಅನುಷ್ಠಾನವಾಗುವ ಕಾರ್ಯಕ್ರಮಗಳನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಿದಲ್ಲಿ ಶಿಸ್ತುಕ್ರಮ ಕ್ರಮಕ್ಕೆ ಒಳಪಡುತ್ತಾರೆ ಎಂದು ಅವರು ತಿಳಿಸಿದರು.

ಮುಖ್ಯವಾಗಿ ಎಸ್.ಸಿ.ಎಸ್.ಪಿ.-ಟಿ.ಎಸ್.ಪಿ. ಯೋಜನೆಯಡಿ ಒದಗಿಸಿದ ಅನುದಾನವನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮಾತ್ರ ವಿನಿಯೋಗಿಸಬೇಕು. ಅಧಿಕಾರಿಗಳು ತಮ್ಮ ಇಲಾಖೆಗಳಿಗೆ ಒದಗಿಸಿದ ಎಸ್.ಸಿ.ಎಸ್.ಪಿ.-ಟಿ.ಎಸ್.ಪಿ. ಅನುದಾನವನ್ನು ಪರಿಶಿಷ್ಟರ ಏಳಿಗೆಗಾಗಿ ತಲುಪಿಸುವಲ್ಲಿ ತೊಂದರೆಗಳಿದ್ದಲ್ಲಿ ತಿಳಿಸಬೇಕು. ಈ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಹೇಳಿದರು.

ಬಾಕ್ಸ್...

ಅಧಿಕಾರಿಗಳ ವಿರುದ್ಧ ಗರಂ

ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿ, ಅನುದಾನ ಬಳಕೆ ಮಾಡದ ಅಧಿಕಾರಿಗಳ ವಿರುದ್ಧ ಗರಂ ಆದರು.

ಜಿಲ್ಲೆಯಲ್ಲಿ ಜೆಜೆಎಂ ಕಾಮಗಾರಿ ಪ್ರಗತಿ ಪರಿಶೀಲಿಸಿದ ಅವರು, ರಾಜ್ಯ ಸರ್ಕಾರದಿಂದ ಎರಡು ಬಾರಿ ಅನುದಾನ ಬಿಡುಗಡೆಯಾಗಿದ್ದರೂ, ಯಾವುದೇ ರೀತಿಯ ಹಣ ಬಳಕೆಯಾಗಿಲ್ಲ ಮತ್ತು ಕಾಮಗಾರಿ ಪ್ರಗತಿಯಾಗಿಲ್ಲ. ಯೋಜನೆಯ ಮೇಲೆ ಉದಾಸೀನತೆ ತೋರುತ್ತಿದ್ದೀರಿ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಧಿಕಾರಿಗಳ ಮೇಲೆ ಅಸಮಾಧಾನ ವ್ಯಕ್ತಪಡಿಸಿದರು.

ಇದೇ ವೇಳೆ ವಿವಿಧ ಇಲಾಖಾವಾರು ನೀಡುವ ಸೌಲಭ್ಯಗಳು ಮತ್ತು ಉಪಕರಣಗಳ ಬಗ್ಗೆ ವಿಚಾರಿಸಿ ಮಾಹಿತಿ ಪಡೆದುಕೊಂಡರು.

ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್, ಜಿಪಂ ಉಪಕಾರ್ಯದರ್ಶಿ ಶಶಿಕಾಂತ ಶಿವಪೂರೆ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಾಷು ಮೋದಿನ್ ಉಪಸ್ಥಿತರಿದ್ದರು.

ಬಳ್ಳಾರಿ ಜಿಲ್ಲೆಯಲ್ಲಿ ಎಸ್ಸಿ, ಎಸ್ಟಿ ಮತ್ತು ಟಿಎಸ್ಪಿ ಯೋಜನೆ ಕಾರ್ಯಕ್ರಮಗಳ ಅನುಷ್ಠಾನ ಕುರಿತು ಬಳ್ಳಾರಿ ಡಿಸಿ ಕಚೇರಿಯಲ್ಲಿ ಜರುಗಿದ ಪ್ರಗತಿ ಪರಿಶೀಲನೆಯಲ್ಲಿ ಜಿಲ್ಲಾಧಿಕಾರಿ ಕೆ. ನಾಗೇಂದ್ರ ಪ್ರಸಾದ್ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿ ರಾಮ್‌ ಜಿ ಕುರಿತು ಇಂದು ರಾಜ್ಯ ವಿಶೇಷ ಸಂಪುಟ ಸಭೆ
ಫೆ.13ಕ್ಕೆ ಕಾಂಗ್ರೆಸ್‌ ಸರ್ಕಾರಕ್ಕೆ 1000 ದಿನ