ಕನ್ನಡಪ್ರಭ ವಾರ್ತೆ ತುಮಕೂರುಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದವರ ಕುಂದುಕೊರತೆಗಳ ಬಗ್ಗೆ ತಾಲೂಕು ಹಂತದಲ್ಲಿಯೇ ಬಗೆಹರಿಸುವ ನಿಟ್ಟಿನಲ್ಲಿ ವಾರದೊಳಗಾಗಿ ಜಿಲ್ಲೆಯ ಎಲ್ಲಾ ಉಪ ವಿಭಾಗ ಹಾಗೂ ತಾಲೂಕು ಮಟ್ಟದಲ್ಲಿ ಜಾಗೃತಿ ಉಸ್ತುವಾರಿ ಸಭೆ ನಡೆಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕಟ್ಟುನಿಟ್ಟಿನ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸಭೆ ನಡೆಸಿ ಮಾತನಾಡಿದ ಅವರು, ಉಪ ವಿಭಾಗ ಹಾಗೂ ತಾಲೂಕು ಮಟ್ಟದಲ್ಲಿ ಕಡ್ಡಾಯವಾಗಿ ಸಭೆ ನಡೆಸಿ ಮುಂದಿನ ಸಭೆಯೊಳಗಾಗಿ ವರದಿ ಸಲ್ಲಿಸಬೇಕು ಎಂದು ಆಯಾ ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರರಿಗೆ ನಿರ್ದೇಶನ ನೀಡಿದರು. ಜಿಲ್ಲೆಯ ತುಮಕೂರು ಹಾಗೂ ಚಿಕ್ಕನಾಯಕನಹಳ್ಳಿ ತಾಲೂಕು ಹೊರತುಪಡಿಸಿ ಉಳಿದ 9 ತಾಲೂಕುಗಳಲ್ಲಿ ಸಭೆ ನಡೆಸದೇ ಇರುವ ಕುರಿತು ಆಯಾ ತಹಶೀಲ್ದಾರ್ ಹಾಗೂ ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿಗಳು ಮುಂದಿನ ವಾರದೊಳಗೆ ಸಭೆ ನಡೆಸಲು ಉದಾಸಿನ ತೋರುವ ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದರು.
ಸಮಿತಿ ಸದಸ್ಯರಾದ ರಂಗಯ್ಯ ಹಾಗೂ ನರಸಿಂಹಮೂರ್ತಿ ಮಾತನಾಡಿ 2018 ರಿಂದ 2024ರ ಜೂನ್ 30ರವರೆಗೆ ಪರಿಶಿಷ್ಟ ಜಾತಿ ಮತ್ತು ಪಂಗಡದ ದೌರ್ಜನ್ಯ ನಿಯಂತ್ರಣ ಕಾಯ್ದೆಯಡಿ 380 ಪ್ರಕರಣಗಳು ಇತ್ಯರ್ಥವಾಗದೆ ಬಾಕಿ ಇದ್ದು, ತ್ವರಿತ ವಿಲೇವಾರಿಗೆ ಮಾನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಸುಮಾರು 6 ವರ್ಷಗಳಿಂದ ಬಾಕಿ ಇರುವ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ದೌರ್ಜನ್ಯಗಳ ಪ್ರಕರಣಗಳ ಇತ್ಯರ್ಥಕ್ಕೆ ಕ್ರಮವಹಿಸಬೇಕು. ಇಂತಹ ಪ್ರಕರಣಗಳನ್ನು ಆದಷ್ಟು ಕಡಿಮೆ ಕಾಲಾವಧಿಯಲ್ಲಿ ಇತ್ಯರ್ಥ ಪಡಿಸಬೇಕು. ವಿಶೇಷ ನ್ಯಾಯಾಲಯಗಳಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ದೌರ್ಜನ್ಯಗಳ ಪ್ರಕರಣಗಳನ್ನು ಮಾತ್ರ ಇತ್ಯರ್ಥಪಡಿಸಬೇಕು. ಉಳಿದ ಪ್ರಕರಣಗಳನ್ನು ವಿಶೇಷ ನ್ಯಾಯಗಳಲ್ಲಿ ದಾಖಲಿಸಿಕೊಳ್ಳದಿರಲು ಕ್ರಮವಹಿಸಬೇಕೆಂದು ಸರ್ಕಾರಿ ಅಭಿಯೋಜಕ ಡಿ.ಎಸ್. ಜ್ಯೋತಿ ಅವರಿಗೆ ಸೂಚಿಸಿದರು.ಸಮಿತಿ ಸದಸ್ಯರಾದ ರಂಗಯ್ಯ ಹಾಗೂ ನರಸಿಂಹಮೂರ್ತಿ ಮಾತನಾಡಿ, ಜಿಲ್ಲೆಯಲ್ಲಿ 2023ರ ಜನವರಿಯಿಂದ ನವಂಬರ್‌ವರೆಗೂ ಪೋಕ್ಸೋ ಕಾಯ್ದೆಯಡಿ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ 19 ಪ್ರಕರಣಗಳ ಪೈಕಿ ಒಬ್ಬ ಆರೋಪಿ ಬಿಡುಗಡೆಯಾಗಿದ್ದು, ಉಳಿದ 18 ಆರೋಪಿಗಳಿಗೆ ಶಿಕ್ಷೆಯಾಗುವಂತೆ ಸಮಿತಿಗೆ ಒತ್ತಾಯಿಸಿದರುಅಪರ ಜಿಲ್ಲಾಧಿಕಾರಿ ಶಿವಾನಂದ ಬಿ ಕರಾಳೆ ಮಾತನಾಡಿ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಮಂಜೂರಾಗಿರುವ ಸ್ಮಶಾನ ಭೂಮಿಗಳನ್ನು ಗುರುತಿಸಿ ಖುದ್ದು ಸ್ಥಳ ಪರಿಶೀಲನೆ ನಡೆಸಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ವರದಿ ನೀಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.ಸಾರ್ವಜನಿಕ ಸ್ಮಶಾನ ಭೂಮಿಯಲ್ಲಿ ದಲಿತರಿಗೆ ಶವ ಹೂಳಲು ಅವಕಾಶ ನೀಡದೆ ಅಡ್ಡಿಪಡಿಸಿದಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ತಹಶೀಲ್ದಾರರಿಗೆ ದೂರು ನೀಡಬೇಕೆಂದು ಪ.ಜಾತಿ/ಪಂಗಡದ ಸಮುದಾಯದವರಿಗೆ ಅರಿವು ಮೂಡಿಸಬೇಕು ಎಂದು ಸೂಚಿಸಿದರು. ಪಾವಗಡ ತಾಲೂಕು ಕ್ಯಾತಗಾನಹಳ್ಳಿ, ಕೊರಟಗೆರೆಯ ನೀಲಗೊಂಡನಹಳ್ಳಿ, ತುಮಕೂರಿನ ದುರ್ಗದಹಳ್ಳಿ, ಚಿಕ್ಕನಾಯಕನಹಳ್ಳಿಯ ಹಂದನಕೆರೆಯ ಸ್ಮಶಾನ ಭೂಮಿ ಸಮಸ್ಯೆ ಸಂಬಂಧ ಕೈಗೊಂಡಿರುವ ಕ್ರಮಗಳ ಹಾಗೂ ಮುಜರಾಯಿ ದೇವಾಲಯಗಳಲ್ಲಿ ಪರಿಶಿಷ್ಟ ಜಾತಿ/ಪಂಗಡ ಜನಾಂಗದವರಿಗೆ ಮುಕ್ತ ಪ್ರವೇಶ ಕಲ್ಪಿಸಲಾಗಿದೆ ಎಂಬ ನಾಮಫಲಕಗಳನ್ನು ದಪ್ಪ ಅಕ್ಷರಗಳಲ್ಲಿ ಬರೆಸಿ ಅಳವಡಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ಸಭೆಗೆ ಮಾಹಿತಿ ನೀಡುತ್ತಾ, 2023-24ನೇ ಸಾಲಿನಲ್ಲಿ ದೌರ್ಜನ್ಯ ಪ್ರಕರಣಗಳನ್ನು ತಡೆಯುವ ಸಂಬಂಧ ಅತಿ ಹೆಚ್ಚು ದೌರ್ಜನ್ಯ ಪ್ರಕರಣಗಳು ನಡೆದಿರುವ 96 ಗ್ರಾಮಗಳಲ್ಲಿ ಜನಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆಯಲ್ಲದೆ ದೌರ್ಜನ್ಯ ಪ್ರಕರಣಗಳು ನಡೆದಿರುವ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪೊಲೀಸ್ ಇಲಾಖೆ ಸಹಕಾರದಲ್ಲಿ ಶಾಂತಿ ಸಭೆಗಳನ್ನು ನಡೆಸಿ ನೊಂದ ಸಂತ್ರಸ್ತರಿಗೆ ನಿಯಮಾನುಸಾರ ಪರಿಹಾರ ಮಂಜೂರಾತಿಗೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.ಸಭೆಯಲ್ಲಿ ಉಪವಿಭಾಗಾಧಿಕಾರಿಗಳಾದ ಗೌರವ್ ಕುಮಾರ್ ಶೆಟ್ಟಿ, ಸಪ್ತಶ್ರೀ ಹಾಗೂ ಗೋಟೂರು ಶಿವಪ್ಪ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ಅಬ್ದುಲ್ ಖಾದರ್, ವಿವಿಧ ತಾಲೂಕು ತಹಶೀಲ್ದಾರರು, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿಗಳು, ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಮತ್ತಿತರರು ಹಾಜರಿದ್ದರು.