ಜಿಲ್ಲೆಯಲ್ಲಿ ಎಸ್‌ಸಿಪಿ/ ಟಿಎಸ್‌ಪಿ ಯೋಜನೆಗಳಿಗೆ ಹೆಚ್ಚಿನ ಅನುದಾನ, ಸೌಲಭ್ಯಗಳು ಮತ್ತು ಕಾರ್ಯಕ್ರಮಗಳ ಅವಶ್ಯಕತೆಯಿದೆ.
ಬಳ್ಳಾರಿ; ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ಬಿಡುಗಡೆಯಾಗುವ ಹಣವನ್ನು ಬೇರೆ ಉದ್ದೇಶಕ್ಕೆ ಬಳಸಿರುವ ಅಥವಾ ದುರುಪಯೋಗ ಪಡಿಸಿಕೊಂಡಿರುವ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಡಾ.ಮೂರ್ತಿ ಎಲ್. ಹೇಳಿದರು.
ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಕೈಗೊಂಡಿರುವ ಕಾರ್ಯಕ್ರಮಗಳ ಕುರಿತು ನಗರದ ಜಿಪಂ ನಜೀರ್ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಎಸ್‌ಸಿಪಿ/ ಟಿಎಸ್‌ಪಿ ಯೋಜನೆಗಳಿಗೆ ಹೆಚ್ಚಿನ ಅನುದಾನ, ಸೌಲಭ್ಯಗಳು ಮತ್ತು ಕಾರ್ಯಕ್ರಮಗಳ ಅವಶ್ಯಕತೆಯಿದೆ. ಯೋಜನೆಗಳ ಅನುಷ್ಠಾನಕ್ಕೆ ಸರಿಯಾದ ಕ್ರಿಯಾ ಯೋಜನೆ ಹಾಗೂ ಹೆಚ್ಚುವರಿ ಅನುದಾನಕ್ಕಾಗಿ ಪ್ರಸ್ತಾವನೆ ಸಲ್ಲಿಸಬೇಕು. ಸರ್ಕಾರ ಹಣ ಕೊಟ್ಟಿಲ್ಲ ಎಂದು ಸುಮ್ಮನೆ ಕೂರಬಾರದು. ಜನಸಂಖ್ಯೆಗೆ ಅನುಗುಣವಾಗಿ ಬೇಡಿಕೆ ಪಟ್ಟಿ ಸಲ್ಲಿಸುವುದು ಅಧಿಕಾರಿಗಳ ಕರ್ತವ್ಯ ಎಂದು ತಿಳಿಸಿದರು.
ಯೋಜನೆಗಳ ಪ್ರಗತಿ ವರದಿಯನ್ನು ಕೇವಲ ಕಾಗದದ ಮೇಲೆ ಸೀಮಿತಗೊಳಿಸದೆ, ಕ್ಷೇತ್ರ ಮಟ್ಟದಲ್ಲಿ ಪರಿಶೀಲನೆ ನಡೆಸಬೇಕು. ಎಸ್‌ಸಿ/ಎಸ್ಟಿ ಸಮುದಾಯದ ಕಲ್ಯಾಣಕ್ಕಾಗಿ ಎಷ್ಟು ಸಭೆಗಳನ್ನು ನಡೆಸಲಾಗಿದೆ ಮತ್ತು ಕೈಗೊಂಡಿರುವ ಯೋಜನೆಗಳ ಫಲಿತಾಂಶವೇನು ಎಂಬುದರ ಬಗ್ಗೆ ಆಯೋಗದ ಕಚೇರಿಗೆ ನಿಯಮಿತವಾಗಿ ವರದಿ ಸಲ್ಲಿಸಬೇಕು ಎಂದು ತಿಳಿಸಿದರು.
ಆನ್‌ಲೈನ್ ಮೂಲಕ ಸಲ್ಲಿಸಲು ಅವಕಾಶ:
ದೀರ್ಘಕಾಲದಿಂದ ಅರಣ್ಯ ಭೂಮಿ ಅಥವಾ ಸರ್ಕಾರಿ ಜಾಗದಲ್ಲಿ ವಾಸಿಸುತ್ತಿರುವ ಭೂ ರಹಿತ ಜನರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಈ ಕುರಿತು ಪ್ರಧಾನ ಕಾರ್ಯದರ್ಶಿಗಳು ಈಗಾಗಲೇ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಪರ್ಯಾಯವಾಗಿ ಅವರಿಗೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಬೇಕು ಎಂದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳಿಂದ ಬರುವ ದೂರುಗಳು ಹಾಗೂ ಕುಂದುಕೊರತೆಗಳನ್ನು ಮುಂಬರುವ ದಿನಗಳಲ್ಲಿ ಆನ್‌ಲೈನ್ ಮೂಲಕ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು. ಇವುಗಳನ್ನು ಕಂದಾಯ ಇಲಾಖೆ ಹಾಗೂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳ ಮಟ್ಟದಲ್ಲಿ ಶೀಘ್ರವಾಗಿ ವಿಲೇವಾರಿ ಮಾಡಬೇಕು. ಕೃಷಿ ಮತ್ತು ತೋಟಗಾರಿಕೆ ಸೇರಿದಂತೆ ಎಲ್ಲಾ ಇಲಾಖೆಗಳಿಗೂ ಈ ನಿಯಮ ಅನ್ವಯಿಸಲಿದ್ದು, ತಾಲೂಕು ಮಟ್ಟದ ಅಧಿಕಾರಿಗಳು ಈ ದೂರುಗಳ ಬಗ್ಗೆ ಸಮಗ್ರವಾಗಿ ಚಿಂತನೆ ನಡೆಸಿ, ಯಾವುದೇ ವಿಳಂಬವಿಲ್ಲದೆ ಗಂಭೀರ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಆಯೋಗದ ಸದಸ್ಯರಾದ ದಿವಾಕರ ಎನ್., ಗೀತಾ ಥಾವಂಶಿ, ಕಾರ್ಯದರ್ಶಿ ಡಾ.ಶಿವರಾಮು ಎಚ್.ಎಸ್., ಸಂಶೋಧನಾ ಅಧಿಕಾರಿ ಸಿಂಘು ರಘು ಎಚ್.ಎಸ್., ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ., ಎಸ್ಪಿ ಡಾ.ಸುಮನ್ ಡಿ.ಪೆನ್ನೇಕರ್, ಜಿಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್, ಬಳ್ಳಾರಿ ವಲಯ ಉಪಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎನ್ ಬಸವರಾಜ, ಮಹಾನಗರ ಪಾಲಿಕೆಯ ಆಯುಕ್ತ ಪಿ.ಎಸ್.ಮಂಜುನಾಥ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
18ಬಿಆರ್‌ವೈ1
ಬಳ್ಳಾರಿಯ ಜಿಪಂ ಸಭಾಂಗಣದಲ್ಲಿ ಸೋಮವಾರ ಜರುಗಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಕಾರ್ಯಗಳ ಪ್ರಗತಿಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಡಾ.ಮೂರ್ತಿ ಎಲ್. ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.