ಉಜಿರೆಯಲ್ಲಿ ಎಸ್.ಡಿ.ಎಂ. ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ವತಿಯಿಂದ ೧೪೫೦ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ವಿದ್ಯಾರ್ಥಿವೇತನ ವಿತರಣೆ ನೆರವೇರಿತು.
ಕನ್ನಡಪ್ರಭ ವಾರ್ತೆ ಬೆಳ್ತಂಗಡಿ
ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ಪ್ರತಿವರ್ಷ ವಿದ್ಯಾರ್ಥಿವೇತನ ವಿತರಿಸಲಾಗುತ್ತಿದ್ದು, ವಿದ್ಯಾರ್ಥಿಗಳು ವಿದ್ಯಾರ್ಥಿವೇತನದ ಸದುಪಯೋಗ ಪಡೆದು ಸಮಾಜದ ಸಭ್ಯ, ಸುಸಂಸ್ಕೃತ ನಾಗರಿಕರಾಗಿ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಧರ್ಮಸ್ಥಳದ ಡಿ. ಹರ್ಷೇಂದ್ರಕುಮಾರ್ ಹೇಳಿದ್ದಾರೆ.ಗುರುವಾರ ಉಜಿರೆಯಲ್ಲಿ ಎಸ್.ಡಿ.ಎಂ. ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ವತಿಯಿಂದ ೧೪೫೦ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಿ ಅವರು ಮಾತನಾಡಿದರು.೧೯೬೬ರಲ್ಲಿ ತಮ್ಮ ತಂದೆ ಕೀರ್ತಿಶೇಷ ಡಿ. ರತ್ನವರ್ಮ ಹೆಗ್ಗಡೆ ಉಜಿರೆಯಲ್ಲಿ ಎಸ್.ಡಿ.ಎಂ. ಕಾಲೇಜು ಪ್ರಾರಂಭಿಸಿದ ಬಳಿಕ ಉಜಿರೆಯು ಸಸ್ಯಕಾಶಿಯಾಗುವುದರ ಜೊತೆಗೆ ಜ್ಞಾನಕಾಶಿಯಾಗಿಯೂ ಬೆಳೆಯುತ್ತಿದೆ, ಬೆಳಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.ಉಪ್ಪಿನಂಗಡಿ ಬಳಿ ಕಾಂಚನದಲ್ಲಿ ಒಂದು ಕೋಟಿ ೭೫ ಲಕ್ಷ ರು. ವೆಚ್ಚದಲ್ಲಿ ನಿರ್ಮಿಸಲಾದ ಕನ್ನಡ ಪ್ರಾಥಮಿಕ ಶಾಲೆಯ ನೂತನ ಕಟ್ಟಡ 14ರಂದು ಉದ್ಘಾಟನೆಗೊಳ್ಳಲಿದೆ ಎಂದು ಅವರು ಪ್ರಕಟಿಸಿದರು.ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ. ಎಸ್. ಸತೀಶ್ಚಂದ್ರ, ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ ಶೆಟ್ಟಿ, ಎಸ್.ಡಿ.ಎಂ. ಸ್ನಾತಕೋತ್ತರ ಅಧ್ಯಯನ ಕೇಂದ್ರದ ಡೀನ್ ಡಾ. ಸೌಮ್ಯ ಬಿ.ಪಿ. ಇದ್ದರು.ಕಾಲೇಜಿನ ಪ್ರಾಂಶುಪಾಲ ಪ್ರೊ. ಪಿ. ವಿಶ್ವನಾಥ್ ಸ್ವಾಗತಿಸಿದರು. ಎಸ್.ಡಿ.ಎಂ. ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಅಶೋಕಕುಮಾರ್ ವಂದಿಸಿದರು.ರಸಾಯನಶಾಸ್ತ್ರ ಸ್ವಾತಕೋತ್ತರ ವಿಭಾಗದ ಉಪನ್ಯಾಸಕಿ ಡಾ. ನೆಫಿಸೆತ್ ಕಾರ್ಯಕ್ರಮ ನಿರ್ವಹಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.