ಕನ್ನಡಪ್ರಭ ವಾರ್ತೆ ಉಡುಪಿಹಾಸನ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣರನ್ನು ಬಂಧಿಸಲು ಒತ್ತಾಯಿಸಿ ಮತ್ತು ಬಿಜೆಪಿಯ ಪಕ್ಷಪಾತ ಧೋರಣೆ ಖಂಡಿಸಿ ಸೋಶಿಯಲ್ ಡೆಮೋಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಗುರುವಾರ ನಗರದ ಅಜ್ಜರಕಾಡು ಹುತಾತ್ಮ ಯೋಧರ ಸ್ಮಾರಕದ ಬಳಿ ಪ್ರತಿಭಟನೆ ನಡೆಸಲಾಯಿತು.
ಉಡುಪಿಯ ಕಾಲೇಜು ಮಕ್ಕಳ ಪುಂಡಾಟವನ್ನು ದೊಡ್ಡ ವಿವಾದವಾಗಿ ಬಿಂಬಿಸಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡುವ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಪ್ರಜ್ವಲ್ ರೇವಣ್ಣ ವಿಷಯದಲ್ಲಿ ಒಂದು ಮಾತೂ ಆಡದಿರುವುದು ಹಿಂದೂಗಳ ಮೇಲಿನ ಅವರ ಕಾಳಜಿ ಕೇವಲ ರಾಜಕೀಯ ಲಾಭಕ್ಕಾಗಿ ಮಾತ್ರ ಎಂಬುದನ್ನು ಬಿಂಬಿಸುತ್ತದೆ ಎಂದು ಆರೋಪಿಸಿದರು.
ಜಿಲ್ಲಾಧ್ಯಕ್ಷ ಶಾಹಿದ್ ಆಲಿ ಹಾಗೂ ಕಾಪು ಕ್ಷೇತ್ರ ಸಮಿತಿ ಅಧ್ಯಕ್ಷ ಹನೀಫ್ ಮೂಲೂರ್ ಮಾತನಾಡಿದರು.ಪ್ರತಿಭಟನೆಯಲ್ಲಿ ವಿಮೆನ್ ಇಂಡಿಯಾ ಮೂವ್ಮೆಂಟ್ ಉಡುಪಿ ಜಿಲ್ಲಾಧ್ಯಕ್ಷೆ ನಾಜಿಯಾ ನಸ್ರುಲ್ಲಾ, ಎಸ್‌ಡಿಪಿಐ ಉಡುಪಿ ಜಿಲ್ಲಾ ನಾಯಕರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.