ಕನ್ನಡಪ್ರಭ ವಾರ್ತೆ ಮಡಿಕೇರಿ
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಶುಕ್ರವಾರ ಆರಂಭಗೊಂಡಿದ್ದು, ಜಿಲ್ಲೆಯಲ್ಲಿ ಮೊದಲ ದಿನ ಯಾವುದೇ ಅಡಚಣೆ ಇಲ್ಲದೆ ಸುಗಮವಾಗಿ ಪರೀಕ್ಷೆ ನಡೆದಿದೆ. ಕೊಡಗು ಜಿಲ್ಲೆಯಲ್ಲಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ ಒಟ್ಟು 4,439 ವಿದ್ಯಾರ್ಥಿಗಳಲ್ಲಿ 4,351 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜಾರಾಗಿದ್ದು, 88 ವಿದ್ಯಾರ್ಥಿಗಳು ಗೈರಾಗಿದ್ದಾರೆ.ಪರೀಕ್ಷೆ ಹಿನ್ನಲೆ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಪೊಲೀಸರ ನಿಯೋಜನೆ, ಪರೀಕ್ಷಾ ಕೇಂದ್ರದಲ್ಲಿ ಶುಶ್ರೂಷಕರು ಹಾಗೂ ಪೊಲೀಸರ ನಿಯೋಜನೆ, ಬ್ಯಾಗ್ ಇಟ್ಟುಕೊಳ್ಳಲು ಪ್ರತ್ಯೇಕ ಕೊಠಡಿ ವ್ಯವಸ್ಥೆ, ಕುಡಿಯುವ ನೀರು ಮತ್ತಿತರ ಅಗತ್ಯ ಮೂಲ ಸೌಲಭ್ಯವನ್ನು ಜಿಲ್ಲಾಡಳಿತ ವತಿಯಿಂದ ಕೈಗೊಳ್ಳಲಾಗಿತ್ತು.ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪುಟ್ಟರಾಜು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಜಿಲ್ಲೆಯ 19 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಮಡಿಕೇರಿ ತಾಲೂಕಿನಲ್ಲಿ 5, ಸೋಮವಾರಪೇಟೆ ತಾಲೂಕಿನಲ್ಲಿ 8 ಮತ್ತು ವಿರಾಜಪೇಟೆ ತಾಲೂಕಿನಲ್ಲಿ 6 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿತ್ತು.----
ಸುಂಟಿಕೊಪ್ಪ: ದ್ವಿತೀಯ ಪಿಯುಸಿ ಪರೀಕ್ಷೆ ಆರಂಭರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಶುಕ್ರವಾರ ಆರಂಭವಾಗಿದ್ದು, ಸುಂಟಿಕೊಪ್ಪ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪರೀಕ್ಷಾ ಕೇಂದ್ರವನ್ನಾಗಿ ಮಾರ್ಪಡಿಸಿದ್ದರಿಂದ 4 ಪದವಿಪೂರ್ವ ಕಾಲೇಜಿನ 259 ವಿದ್ಯಾರ್ಥಿಗಳಿಗೆ ಮಾ.1ರಿಂದ ಮಾ.22ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಕೊಡಗಿನಲ್ಲಿ 19 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ.ಚೆನ್ನಮ್ಮ ಪಿಯು ಕಾಲೇಜು ಮಾದಾಪುರ, ಮಾರಾರ್ಜಿ ದೇಸಾಯಿ ಪಿಯುಸಿ. ಗರಗಂದೂರು, ಸುಂಟಿಕೊಪ್ಪ ಸಂತ ಮೇರಿ ಸಂಯುಕ್ತ ಪಿಯುಸಿ, ಸುಂಟಿಕೊಪ್ಪ ಸರ್ಕಾರಿ ಪದವಿಪೂರ್ವ ಕಾಲೇಜಿನ ಒಟ್ಟು 259 ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಹಾಜರಿದ್ದರು.
ಸುಂಟಿಕೊಪ್ಪ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಪರೀಕ್ಷೆಗೆ ಆಗಮಿಸಿದ್ದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭದ ಅಧ್ಯಕ್ಷತೆಯನ್ನು ಸುಂಟಿಕೊಪ್ಪ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಹಾಗೂ ಪರೀಕ್ಷಾ ಮುಖ್ಯ ಅಧೀಕ್ಷಕ ಶ್ರೀಲತಾ ವಹಿಸಿದ್ದರು.ಅವರು ಮಾತನಾಡಿ, ವಿದ್ಯಾರ್ಥಿಗಳು ಯಾವುದೇ ಅಹಿತಕರ ಚಟುವಟಿಕೆಗಳಲ್ಲಿ ತೊಡಗದೆ ಪರೀಕ್ಷೆಯ ಪಾವಿತ್ರ್ಯತೆ ಕಾಪಾಡಲು ಶಿಸ್ತು ಬದ್ಧತೆಯಿಂದ ಪರೀಕ್ಷೆಯಲ್ಲಿ ಪಾಲ್ಗೊಳ್ಳಬೇಕೆಂದು ತಿಳಿಹೇಳಿದರು. ಗರಗಂದೂರು ಮೊರಾರ್ಜಿ ವಸತಿ ವಿಜ್ಞಾನ ಪದವಿ ಕಾಲೇಜಿನ ಪ್ರಾಚಾರ್ಯ ಮಹೇಂದ್ರ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.ಉಪನ್ಯಾಸಕಿ ಸುನೀತಾ ಗಿರೀಶ್ ಅವರು ವಿದ್ಯಾರ್ಥಿಗಳಿಗೆ ಕಾಲ ಕಾಲಕ್ಕೆ ಕೊಡಮಾಡುವ ಎಚ್ಚರಿಕೆ ಸಂದೇಶ ನಿಗದಿತ ಸಮಯಗಳನ್ನು ಉಲ್ಲೇಖಿಸಿ ಮಾಹಿತಿ ನೀಡಿದರು.
ಉತ್ತರ ಪತ್ರಿಕೆಗಳ ಪಾಲಕಿ ಕವಿತಾ ಕೆ.ಸಿ. ಮಾತನಾಡಿ, ವಿದ್ಯಾರ್ಥಿಗಳು ಯಾವುದೇ ಒತ್ತಡಕ್ಕೆ ಸಿಲುಕದೆ ಸಾವಧಾನ ಚಿತ್ತದಿಂದ ಕಲಿತ ವಿಷಯಗಳನ್ನು ಮನನ ಮಾಡಿಕೊಂಡು ಪರೀಕ್ಷೆ ಎಂಬ ಯುದ್ಧವನ್ನು ಒಂದು ಕ್ರೀಡೆಯಂತೆ ತಿಳಿದು ಗೆಲುವಿನ ಹಾದಿಯತ್ತ ಸಾಗಲು ಶ್ರಮಿಸಬೇಕು ಎಂದರು.ಕಾಲೇಜಿನ ಪದ್ಮಾವತಿ ಮಾತನಾಡಿ, ಮಕ್ಕಳು ಪರೀಕ್ಷಾ ಸಮಯ ಹೊರತುಪಡಿಸಿ ಅನಗತ್ಯ ಸಮಯದಲ್ಲಿ ಪ್ರವೇಶಿಸುವುದು ಆಶಿಸ್ತು ತೋರಿದರೆ ಇಲಾಖೆಯ ನಿಯಮದ ಮೇರೆ ಶಿಸ್ತುಕ್ರಮಕ್ಕೆ ಒಳಗಾಗಬೇಕಾಗುತ್ತದೆ ಇದು ನಿಮ್ಮ ಮುಂದಿನ ಭವಿಷ್ಯಕ್ಕೆ ಮಾರಕವಾಗಲಿದೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.ಉಪನ್ಯಾಸಕರಾದ ಈಶಾ, ಸರಳ, ಕವಿತಾ, ಕವಿತಾಭಕ್ತಾ,ಸುಚಿತ್ರಾ, ಅಭಿಷೇಕ್, ಅನುಷಾ, ಕನಕ, ಹಾಗೂ ಉಪನ್ಯಾಸಕರು, ಕೊಠಡಿ ಮೇಲ್ವಿಚಾರಕರು ಇದ್ದರು.ಶುಕ್ರವಾರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದ 200 ಮೀಟರ್ ವರೆಗೆ ಪ್ರವೇಶಕ್ಕೆ ಜಿಲ್ಲಾಧಿಕಾರಿ ನಿಷೇಧಾಜ್ಞೆ ಜಾರಿಗೊಳಿಸಿದ್ದು,ಪೊಲೀಸ್ ಪಹರೆ ಹಾಗೂ ಆರೋಗ್ಯ ಕಾರ್ಯಕರ್ತೆಯರನ್ನು ನಿಯೋಜಿಸಲಾಗಿತ್ತು.