ಹಾವೇರಿ: ದ್ವಿತೀಯ ಪಿಯುಸಿ ಪರೀಕ್ಷೆ ಮಾ. 1ರಿಂದ 20ರ ವರೆಗೆ ಜಿಲ್ಲೆಯ 22 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು, ಯಾವುದೇ ಲೋಪವಾಗದಂತೆ ತಮ್ಮ ತಮ್ಮ ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ಹಾಗೂ ಪಾರದರ್ಶಕವಾಗಿ ಮಾಡಬೇಕು. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಕಡ್ಡಾಯವಾಗಿರಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ ಎಲ್. ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಲಾದ ವಿವಿಧ ಇಲಾಖೆ ಅಧಿಕಾರಿಗಳು, ಮಾರ್ಗಾಧಿಕಾರಿಗಳು, ವೀಕ್ಷಕರು, ಕೊಠಡಿ ಮೇಲ್ವಿಚಾರಕರು ತಮ್ಮ ಕರ್ತವ್ಯಗಳಲ್ಲಿ ಯಾವುದೇ ಲೋಪವಾಗದಂತೆ ಜವಾಬ್ದಾರಿಯಿಂದ ಹಾಗೂ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು. ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿತಗೊಂಡ ಅಧಿಕಾರಿಗಳು, ಉಪನ್ಯಾಸಕರು ಪರೀಕ್ಷಾ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾ ಕೇಂದ್ರದ ಹೊರ ವಲಯ ಹಾಗೂ ಕೊಠಡಿಯ ಒಳಗೆ ಶಿಸ್ತುಬದ್ಧವಾಗಿ ಪರೀಕ್ಷಾ ನಿಯಮಗಳ ಉಲ್ಲಂಘನೆಯಾಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಸಬೇಕು ಎಂದು ನಿರ್ದೇಶನ ನೀಡಿದರು.ತ್ರಿ ಸದಸ್ಯ ಕಮಿಟಿ: ಪ್ರಶ್ನೆಪತ್ರಿಕೆ ಬಂಡಲ್ ತೆಗೆದುಕೊಂಡು ಹೋಗಲು ಪ್ರತಿ ತಾಲೂಕಿಗೂ ತಹಸೀಲ್ದಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಪ್ರಿನ್ಸಿಪಾಲ್ ಒಳಗೊಂಡ ತ್ರಿ ಸದಸ್ಯ ಸಮಿತಿ ರಚಿಸಲಾಗಿದೆ. ಪ್ರಶ್ನೆಪತ್ರಿಕೆ ತೆಗೆದುಕೊಂಡು ಹೋಗುವ ವಾಹನಕ್ಕೆ ಜಿಪಿಎಸ್ ಕಡ್ಡಾಯಗೊಳಿಸಲಾಗಿದೆ. ಪೊಲೀಸ್ ಬಂದೋಬಸ್ತ್‌ನಲ್ಲಿ ಪ್ರಶ್ನೆಪತ್ರಿಕೆಗಳನ್ನು ಆಯಾ ತಾಲೂಕಿಗೆ ನಿಗದಿಪಡಿಸಿದ ಸಮಯಕ್ಕೆ ಅನುಗುಣವಾಗಿ ತೆಗೆದುಕೊಂಡು ಹೋಗಬೇಕು ಎಂದು ಸೂಚನೆ ನೀಡಿದರು.
ಪರೀಕ್ಷೆ ನಡೆಯುವ ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಬಂದೋಬಸ್ತ್ ಒದಗಿಸಲು ಹಾಗೂ ಆರೋಗ್ಯ ಶುಶ್ರೂಷಕಿಯರನ್ನು ನಿಯೋಜನೆ ಮಾಡಬೇಕು ಎಂದು ಪೊಲೀಸ್ ಇಲಾಖೆ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪರೀಕ್ಷಾರ್ಥಿಗಳು ಅಥವಾ ಕೊಠಡಿಯ ಮೇಲ್ವಿಚಾರಕರಾಗಲಿ ಪರೀಕ್ಷಾ ಕೇಂದ್ರದೊಳಗೆ ಅತ್ಯಾಧುನಿಕ ಇಲೆಕ್ಟ್ರಾನಿಕ್ ಉಪಕರಣಗಳಾದ ಮೊಬೈಲ್, ಬ್ಲೂಟೂತ್, ಪೇಜರ್, ವೈರಲೆಸ್ ಸೆಟ್ ಹಾಗೂ ರಿಸ್ಟ್ ವಾಚ್‌ಗಳನ್ನು ನಿಷೇಧಿಸಿದೆ. ಈ ಕುರಿತಂತೆ ಅಧಿಕಾರಿಗಳು ಎಚ್ಚರವಹಿಸಬೇಕು ಎಂದು ಸೂಚಿಸಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಭಾರ ಉಪನಿರ್ದೇಶಕ ಆನಂದ ಮುದಕಮ್ಮನವರ ಮಾತನಾಡಿ, ಜಿಲ್ಲೆಯಲ್ಲಿ 13,493 ಹೊಸ, 794 ಪುನರಾವರ್ತಿತ, 402 ಖಾಸಗಿ ಹಾಗೂ ಫಲಿತಾಂಶ ಸುಧಾರಣೆ ಬಯಸಿ 11 ವಿದ್ಯಾರ್ಥಿಗಳು ಸೇರಿ 14,700 ವಿದ್ಯಾರ್ಥಿಗಳು ಪರೀಕ್ಷೆ ನೋಂದಾಯಿಸಿಕೊಂಡಿದ್ದಾರೆ ಎಂದು ಸಭೆಗೆ ಮಾಹಿತಿ ನೀಡಿದರು.