ದ್ವಿತೀಯ ಪಿಯು ಪರೀಕ್ಷೆ ಮೊದಲ ದಿನ ಸುಸೂತ್ರ

KannadaprabhaNewsNetwork |  
Published : Mar 01, 2026, 02:15 AM IST
ಪರೀಕ್ಷೆ | Kannada Prabha

ಸಾರಾಂಶ

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಮೊದಲ ದಿನದ ಕನ್ನಡ ಮತ್ತು ಅರೇಬಿಕ್ ಭಾಷೆಗಳ ಪರೀಕ್ಷೆ ಸುಸೂತ್ರವಾಗಿ ನಡೆದಿದೆ. ರಾಜ್ಯದಲ್ಲಿ ಒಟ್ಟಾರೆ ಹಾಜರಾತಿ ಶೇ.96.87ರಷ್ಟು ಇತ್ತು.

ಕನ್ನಡಪ್ರಭ ವಾರ್ತೆ ಬೆಂಗಳೂರು

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಮೊದಲ ದಿನದ ಕನ್ನಡ ಮತ್ತು ಅರೇಬಿಕ್ ಭಾಷೆಗಳ ಪರೀಕ್ಷೆ ಸುಸೂತ್ರವಾಗಿ ನಡೆದಿದೆ. ರಾಜ್ಯದಲ್ಲಿ ಒಟ್ಟಾರೆ ಹಾಜರಾತಿ ಶೇ.96.87ರಷ್ಟು ಇತ್ತು.

ಒಟ್ಟು 5,09,085 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 4,93,132 ವಿದ್ಯಾರ್ಥಿಗಳು ಹಾಜರಾಗಿದ್ದು, 15,953 ಜನ ಗೈರಾಗಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಗರಿಷ್ಠ ಹಾಜರಾತಿ ಶೇ.99.62 ಇದ್ದರೆ, ವಿಜಯಪುರ ಜಿಲ್ಲೆಯಲ್ಲಿ ಕನಿಷ್ಠ ಶೇ.91.17 ಹಾಜರಾತಿ ಇತ್ತು. ಯಾವುದೇ ಪರೀಕ್ಷಾ ಅಕ್ರಮಗಳು ನಡೆದಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷಾ ಮೌಲ್ಯಮಾಪನ ಮಂಡಳಿ ತಿಳಿಸಿದೆ.

ಯಾವುದೇ ಲೋಪದೋಷಗಳಿಲ್ಲದೆ ಅತ್ಯಂತ ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಮಂಡಳಿ ಕ್ರಮ ಕೈಗೊಂಡಿದೆ. ಪರೀಕ್ಷಾ ಅಕ್ರಮಗಳನ್ನು ಸಂಪೂರ್ಣವಾಗಿ ತಡೆಗಟ್ಟಲು ಬಿಗಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಮುನ್ನೆಚ್ಚರಿಕೆ ಕ್ರಮವಾಗಿ 144 ಸೆಕ್ಷನ್ ಜಾರಿಗೊಳಿಸಲಾಗಿತ್ತು.

ಪರೀಕ್ಷೆ ನಡೆಯುವ ಸಮಯದಲ್ಲಿ ಕೇಂದ್ರದ ಹತ್ತಿರವಿರುವ ಎಲ್ಲಾ ಜೆರಾಕ್ಸ್ ಅಂಗಡಿಗಳನ್ನು ಕಡ್ಡಾಯವಾಗಿ ಮುಚ್ಚಲು ಆದೇಶ ಹೊರಡಿಸಲಾಗಿತ್ತು. ಪ್ರಶ್ನೆ ಪತ್ರಿಕೆಗಳ ಸೋರಿಕೆ ತಡೆಗಟ್ಟಲು ವಾಹನಗಳಿಗೆ ಜಿಪಿಎಸ್ ವ್ಯವಸ್ಥೆಯನ್ನು ಅಳವಡಿಸಲಾಗಿದ್ದು, ಪ್ರತಿಯೊಂದು ಚಲನವಲನದ ಮೇಲೆ ಹದ್ದಿನ ಕಣ್ಣಿಡಲಾಗಿದೆ.

ಪರೀಕ್ಷಾ ಕೊಠಡಿಗಳ ಒಳಗೆ ಮತ್ತು ಹೊರಗೆ ಸಿಸಿಟಿವಿ ಕ್ಯಾಮೆರಾಗಳ ಕಣ್ಗಾವಲು ಕಡ್ಡಾಯವಾಗಿದ್ದು, ವಿದ್ಯಾರ್ಥಿಗಳು ಮಾತ್ರವಲ್ಲದೆ ಮೇಲ್ವಿಚಾರಕರೂ ಸಹ ಮೊಬೈಲ್ ಫೋನ್ ಅಥವಾ ಯಾವುದೇ ಎಲೆಕ್ಟ್ರಾನಿಕ್ ಗ್ಯಾಡ್ಜೆಟ್‌ಗಳನ್ನು ಒಳಗೆ ತರುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ರೀತಿ ಅನೇಕ ಕಟ್ಟುನಿಟ್ಟು ಕ್ರಮಗಳನ್ನು ಕೈಗೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಸುಸೂತ್ರವಾಗಿ ನಡೆದಿದೆ ಎಂದು ಪರೀಕ್ಷಾ ಮಂಡಳಿ ತಿಳಿಸಿದೆ.ಪಿಯುಸಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ:

ದ್ವಿತೀಯ ಪಿಯುಸಿ ಪರೀಕ್ಷೆ ಆರಂಭದ ಕನ್ನಡ ಪರೀಕ್ಷೆಗೆ ತೆರಳಬೇಕಿದ್ದ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟಿರುವ ದುರ್ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ನಡೆದಿದೆ.ಭೂಮಿಕಾ ಮಾಳಂಗಿ (17) ಮೃತ ವಿದ್ಯಾರ್ಥಿನಿ. ಉತ್ಸಾಹದಿಂದಲೇ ಪರೀಕ್ಷೆಗೆ ಸಿದ್ಧತೆ ಮಾಡಿಕೊಂಡಿದ್ದ ಭೂಮಿಕಾ, ಶನಿವಾರ ಬೆಳಗ್ಗೆ ಪರೀಕ್ಷಾ ಕೇಂದ್ರಕ್ಕೆ ತೆರಳಲು ಮನೆಯಿಂದ ಹೊರಬರುತ್ತಿದ್ದಾಗ ಏಕಾಏಕಿ ಕುಸಿದು ಬಿದ್ದಿದ್ದಾಳೆ. ಈ ವೇಳೆ ಹೃದಯಾಘಾತ ಸಂಭವಿಸಿದ್ದು, ತಕ್ಷಣವೇ ಪೋಷಕರು ಆಕೆಯನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದರು. ಆದರೆ, ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯೆಯೇ ವಿದ್ಯಾರ್ಥಿನಿ ಕೊನೆಯುಸಿರೆಳೆದಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ. ಈ ದುರ್ಘಟನೆಯಿಂದ ಬಂಬಲವಾಡ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದ್ದು, ಕುಟುಂಬಸ್ಥರ ಆಕ್ರಂದನ ಮನಕಲಕುವಂತಿತ್ತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಸ್ರೇಲ್‌-ಇರಾನ್‌ ಸಂಘರ್ಷ: ಹಲವು ವಿಮಾನ ರದ್ದು
ನಾನು ರಾಜಕೀಯ ಮಾಡಿದ್ರೆ ನೀವ್ಯಾರೂ ಇರಲ್ಲ: ಶಾಸಕ ಸುಬ್ಬಾರೆಡ್ಡಿ