ಕನ್ನಡಪ್ರಭ ವಾರ್ತೆ ಬೀದರ್
ನಗರದಲ್ಲಿ ದಲಿತ ಸಂರಕ್ಷಣಾ ಸಮಿತಿಗಳ ಐಕ್ಯ ಹೋರಾಟ ಸಮಿತಿ ಮತ್ತು ಸಂವಿಧಾನ ಸಂರಕ್ಷಣಾ ಸಮಿತಿ, ಬೀದರ್ ಸಹಯೋಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಸವಾದಿ ಶರಣರು 12ನೇ ಶತಮಾನದಲ್ಲಿ ಸಮ ಸಮಾಜದ ಕನಸು ಕಂಡಿದ್ದರು. ಕಾಂಗ್ರೆಸ್ ನೇತೃತ್ವದ ಕೇಂದ್ರ ಸರ್ಕಾರ ಮೀಸಲಾತಿ ಜಾರಿಯ ಮೂಲಕ ವಂಚಿತರಿಗೆ, ಶೋಷಿತರಿಗೆ, ದಮನಿತರಿಗೆ, ದಲಿತರಿಗೆ ಸಾಮಾಜಿಕ ನ್ಯಾಯ ನೀಡುವ ಕಾರ್ಯ ಮಾಡಿತು ಎಂದರು.
ಇಂದು ಅಂಬೇಡ್ಕರ್ ನೀಡಿದ ಸಂವಿಧಾನವೇ ಅಪಾಯದಲ್ಲಿದೆ. ಬಿಜೆಪಿ ಸರ್ಕಾರ ಸಂವಿಧಾನವನ್ನೇ ಬದಲಾಯಿಸುವ ಮಾತನಾಡುತ್ತಿದೆ. ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾವಣೆ ಮಾಡೇ ಮಾಡುತ್ತದೆ. ಈಗಾಗಲೇ ಜನ ಭಯಭೀತಿಯಿಂದ ಬದುಕುವ ವಾತಾವರಣ ನಿರ್ಮಾಣವಾಗಿದ್ದು, ಮುಂದಿನ ದಿನಗಳನ್ನು ಊಹಿಸಿಕೊಳ್ಳುವುದೂ ಕಷ್ಟವಾಗುತ್ತದೆ ಎಂದರು.ಬಿಜೆಪಿಯವರು ದೇಶದ ಅಭಿವೃದ್ಧಿ ಮಾಡದೆ, ಒಡೆದಾಳುವ ತಂತ್ರ ಅನುಸರಿಸುತ್ತಿದ್ದಾರೆ. ಜಾತಿ, ಜಾತಿಗಳ ನಡುವೆ ವಿಷ ಬೀಜ ಬಿತ್ತುತ್ತಿದ್ದಾರೆ, ಧರ್ಮ-ಧರ್ಮಗಳ ನಡುವೆ ಒಡಕು ಮೂಡಿಸುತ್ತಿದ್ದಾರೆ. ಸಮಾಜದ ಉಳಿವಿಗಾಗಿ ಮತ್ತು ಸಂವಿಧಾನದ ಸಂರಕ್ಷಣೆಗಾಗಿ ಕಾಂಗ್ರೆಸ್ ಪಕ್ಷವೇ ಮತ್ತೆ ಅಧಿಕಾರಕ್ಕೆ ಬರಬೇಕು ಎಂದು ಅವರು ಅಭಿಪ್ರಾಯಪಟ್ಟರು.
ಈ ಕ್ಷೇತ್ರದ ಹಾಲಿ ಸಂಸತ್ ಸದಸ್ಯ ಭಗವಂತ ಖೂಬಾ, ಜಿಲ್ಲೆಗಾಗಲೀ, ಕ್ಷೇತ್ರಕ್ಕಾಗಲೀ ಯಾವುದೇ ಕೊಡುಗೆ ನೀಡಿಲ್ಲ. ಯಾರನ್ನೂ ಕೇಳಿದರೂ ಸಂಸದರು ತಮ್ಮ ಕ್ಷೇತ್ರಕ್ಕೆ ಬಂದಿಲ್ಲ ಎನ್ನುತ್ತಾರೆ. ಅವರ ಕೊಡುಗೆ ಏನು ಎಂದರೆ ಶೂನ್ಯ ಎನ್ನುತ್ತಾರೆ. ಹೀಗಾಗಿ ನಮ್ಮ ಜಿಲ್ಲೆಯ ಮತ್ತು ರಾಜ್ಯದ ಧ್ವನಿಯಾಗುವ ಸಾಗರ್ ಈಶ್ವರ ಖಂಡ್ರೆಯವರನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸಿ ಎಂದರು.
ಅನಿಲ್ ಕುಮಾರ್ ಅಧ್ಯಕ್ಷತೆ ವಹಿಸಿದ್ದ ಸಭೆಯಲ್ಲಿ ಮಾವಳ್ಳಿ ಶಂಕರ್, ಗುರುಪ್ರಸಾದ್ ಕೆರಗೋಡು, ಮನ್ನಾನ್ ಸೇಠ್, ಅಮೃತರಾವ್ ಚಿಮ್ಕೋಡ್ ಮತ್ತಿತರರು ಉಪಸ್ಥಿತರಿದ್ದರು.